ಈಶ್ವರಪ್ಪ ಪಿಎ ಅಪಹರಣ ಯತ್ನ, ಯಡಿಯೂರಪ್ಪಗೆ ನೋಟಿಸ್
ಬೆಂಗಳೂರು, ಸೆಪ್ಟೆಂಬರ್ 22 : ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಯಡಿಯೂರಪ್ಪ ಪೊಲೀಸ್ ವಿಚಾರಣೆ ಎದುರಿಸಬೇಕಿದೆ. ಯಡಿಯೂರಪ್ಪ ಆಪ್ತ ಸಹಾಯಕ ಎನ್.ಆರ್.ಸಂತೋಷ್ ಈ ಪ್ರಕರಣದ ಪ್ರಮುಖ ಆರೋಪಿ.
ಮಲ್ಲೇಶ್ವರಂ ಎಸಿಪಿ ಎ.ಆರ್.ಬಡಿಗೇರ್ ಶುಕ್ರವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸೆ.28ರಂದು ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಯಡಿಯೂರಪ್ಪ ಆಪ್ತ ಸಹಾಯಕ ಎನ್.ಆರ್.ಸಂತೋಷ್ ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪ್ರಕರಣದಲ್ಲಿ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಎನ್.ಆರ್.ಸಂತೋಷ್ ಯಡಿಯೂರಪ್ಪ ಆಪ್ತ ಸಹಾಯಕರಾದ ಕಾರಣ ವಿಚಾರಣೆಗೆ ಬರುವಂತೆ ಯಡಿಯೂರಪ್ಪ ಅವರಿಗೂ ನೋಟಿಸ್ ಜಾರಿಗೊಳಿಸಲಾಗಿದೆ. ಹಿಂದೆ ಸಂತೋಷ್‌ಗೆ ನೋಟಿಸ್ ನೀಡುವಾಗ ಅದನ್ನು ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಪೊಲೀಸರು ತಲುಪಿಸಿದ್ದರು.
ಈ ಪ್ರಕರಣದಲ್ಲಿ ಆರೋಪಿಯಾಗಿರುವ ಎನ್.ಆರ್.ಸಂತೋಷ್ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಂತೋಷ್ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಆದ್ದರಿಂದ, ಅವರ ಜಾಮೀನು ರದ್ದುಗೊಳಿಸಿ ಎಂದು ಪೊಲೀಸರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.












Click it and Unblock the Notifications