ಮುಂದಿನವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು, ಫೆ.9 : 2014ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೇಳಿದ್ದಾರೆ.
ಶನಿವಾರ ಬೆಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಹಲವಾರು ಉಹಾಪೋಹಗಳು ಕೇಳಿಬರುತ್ತಿವೆ. ಆದರೆ, ನಾವಿನ್ನು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ ಎಂದು ಅನಂತ್ ಕುಮಾರ್ ಸ್ಪಷ್ಟಪಡಿಸಿದರು.

ಫೆ.11ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಸಂಸದರ ಸಭೆ ನಡೆಯಲಿದ್ದು ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. [ಡಾ.ರಾಜ್ ಗೆ ಭಾರತ ರತ್ನ ನೀಡಿ]
ನರೇಂದ್ರ ಮೋದಿ ಅವರು ನಮಗೆ 272+ ಗುರಿ ನಿಗದಿ ಮಾಡಿದ್ದಾರೆ. ನಾವು ಈ ಗುರಿಯನ್ನು ದಾಟದೆ ಹೋದರೆ, ಸರ್ಕಾರ ರಚಿಸಲು ಸಾಧ್ಯವಿಲ್ಲ. ಆದ್ದರಿಂದ ನಾವು ಗೆಲ್ಲುವು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಿದ್ದೇವೆ. 272+ಸ್ಥಾನಗಳನ್ನು ಗೆಲ್ಲುವುದು ನಮ್ಮ ಮುಖ್ಯಗುರಿ ಎಂದು ಅನಂತ್ ಕುಮಾರ್ ಹೇಳಿದರು.
ಪಕ್ಷದ ಕಾರ್ಯಕರ್ತರು ಬಿಜೆಪಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಸಹಕಾರ ನೀಡಬೇಕು ಎಂದು ಅನಂತ್ ಕುಮಾರ್ ಕರೆ ನೀಡಿದರು. ಕರ್ನಾಟಕ, ಗುಜರಾತ್, ಉತ್ತರ ಪ್ರದೇಶ, ಬಿಹಾರ ರಾಜ್ಯಗಳಲ್ಲಿ ನಾವು ಹೆಚ್ಚಿನ ಸ್ಥಾನಗಳನ್ನು ಗಳಿಸಲಿದ್ದೇವೆ ಎಂದು ಅನಂತ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಬೆಂಗಳೂರು ನಗರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ಬೆಂಗಳೂರು ಮೆಟ್ರೋ ಯೋಜನೆಯನ್ನು ಅಗತ್ಯವಿರುವ ಇತರ ಬಡಾವಣೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಅನಂತ್ ಕುಮಾರ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಘೋಷಿಸಿತ್ತು. ಆದರೆ, ಇಂದು ಬೆಂಗಳೂರಿನ ನಾಗರೀಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬೆಂಗಳೂರನ್ನು ನಾವು ಪರಿವರ್ತನೆ ಮಾಡುತ್ತೇವೆ. ನಮ್ಮ ಮೆಟ್ರೋ ಯೋಜನೆಯನ್ನು ಕೆಂಪೇಗೌಡ ವಿಮಾನ ನಿಲ್ದಾಣದ ವರೆಗೆ ವಿಸ್ತರಣೆ ಮಾಡುತ್ತೇವೆ ಎಂದು ಅನಂತ್ ಕುಮಾರ್ ಹೇಳಿದರು.












Click it and Unblock the Notifications