ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ: 2-3 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು, ಸೆ. 27: ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ತೀವ್ರ ಜ್ವರದಿಂದ ಬಳಲುತ್ತಿದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಆಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ.
ಇನ್ನು ಎರಡು ಅಥವಾ ಮೂರು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದು, ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.

ಮಂಡ್ಯ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಮಂಗಳವಾರ ಎಸ್. ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈಗ ತಾನೇ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ಎಸ್.ಎಂ. ಕೃಷ್ಣ ಅವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಕಳೆದ ಮೂರು ದಿನಗಳಿಂದ ತಮ್ಮ ಆರೋಗ್ಯದ ಬಗ್ಗೆ ಆತಂಕಗೊಂಡು ಶೀಘ್ರ ಆರೋಗ್ಯದ ಚೇತರಿಕೆಗೆ ಹಾರೈಸಿದ ಹಿತೈಷಿಗಳು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಎಸ್.ಎಂ ಕೃಷ್ಣ ಕೃತಜ್ಞತೆ ಸಲ್ಲಿಸಿದ್ದು, ಯಾರು ತಮ್ಮ ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನೂ ತಿಳಿಸಿದ್ದಾರೆ. ಆಸ್ಪತ್ರೆ ಹಾಸಿಗೆಯಿಂದ ಎದ್ದು ಪತ್ರಿಕೆ ಓದುತ್ತಿರುವ ಚಿತ್ರಗಳಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದನ್ನು ಕಾಣಬಹುದು.
ರಾಜ್ಯದ ಹಿರಿಯ ನಾಯಕರಾದ ಎಸ್. ಎಂ ಕೃಷ್ಣ ಅವರು ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡ್ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಅವರುನ್ನು ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ರಾಜ್ಯದ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದರು.












Click it and Unblock the Notifications