Ganesh Chaturthi 2026: ಗಣೇಶ ಮೂರ್ತಿ ತಯಾರಿಕೆಯಲ್ಲಿ ಪರಿಸರ ಹಾನಿಕಾರಕ ವಸ್ತುಗಳ ಬಳಕೆ ಸಂಪೂರ್ಣ ನಿಷೇಧ: ಮಹೇಶ್ವರ್ ರಾವ್
ಗಣೇಶ ಮೂರ್ತಿ ತಯಾರಿಕೆಯಲ್ಲಿ ಪರಿಸರ ಹಾನಿಕಾರಕ ವಸ್ತುಗಳ ಬಳಕೆ ಸಂಪೂರ್ಣ ನಿಷೇಧ ಇರಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. 2026ನೇ ಸಾಲಿನ ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಪರಿಸರ ಹಾನಿಕಾರಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಹೇಳಿದ್ದಾರೆ.
ನಗರದಾದ್ಯಂತ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ, ಪೂಜಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಕಂಡುಬಂದಲ್ಲಿ, ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Ganesh Chaturthi 2026: ಜಿಬಿಎ ವ್ಯಾಪ್ತಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ
ಇನ್ನು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾರ್ಡ್‌ವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಏಕಗವಾಕ್ಷಿ ವ್ಯವಸ್ಥೆಯ ಮೂಲಕ ತ್ವರಿತವಾಗಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು.
ನಿಷೇಧಿತ ವಸ್ತುಗಳ ಬಳಕೆ ವಿರುದ್ಧ ಕ್ರಮ: ಎಚ್ಚರಿಕೆ
ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವುದು, ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಹಾಗೂ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳುವ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
Ganesh Chaturthi 2026: ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ
ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿಯೇ ಬಕೆಟ್‌ಗಳಲ್ಲಿ ಕೈಗೊಳ್ಳುವಂತೆ ಹಾಗೂ ವಿಸರ್ಜನೆಯ ನಂತರ ಉಳಿಯುವ ಮಣ್ಣನ್ನು ಕೈತೋಟ ಮತ್ತು ಹೂವಿನ ಕುಂಡಗಳಿಗೆ ಬಳಸುವಂತೆ ಅರಿವು ಮೂಡಿಸಲಾಗುವುದು. ದೊಡ್ಡ ಗಾತ್ರದ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಸೂಕ್ತ ಸ್ಥಳಗಳನ್ನು ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಸಂಚಾರಿ ವಾಹನಗಳು, ತಾತ್ಕಾಲಿಕ ಟ್ಯಾಂಕರ್‌ಗಳು, ಡ್ರಮ್‌ಗಳು ಹಾಗೂ ಬ್ಯಾರಿಕೇಡ್‌ಗಳ ವ್ಯವಸ್ಥೆ ಮಾಡಲಾಗುವುದು. ಕೆರೆಗಳು ಮತ್ತು ಕಲ್ಯಾಣಿಗಳಲ್ಲಿ ಮಾಲಿನ್ಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟದ ವಿರುದ್ಧ ಕ್ರಮ
ವಿಸರ್ಜನೆಯ ಸಂದರ್ಭದಲ್ಲಿ ಸಂಗ್ರಹವಾಗುವ ಮಣ್ಣು, ಹೂವುಗಳು ಹಾಗೂ ಇತರೆ ತ್ಯಾಜ್ಯವನ್ನು ಹಸಿತ್ಯಾಜ್ಯ ಮತ್ತು ಒಣತ್ಯಾಜ್ಯವಾಗಿ ವಿಂಗಡಿಸಿ, ಸಂಬಂಧಪಟ್ಟ ಸಂಸ್ಕರಣಾ ಹಾಗೂ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಲು ಕ್ರಮ ಕೈಗೊಳ್ಳುವಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ಗಣೇಶೋತ್ಸವದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟಿಕ್‌ನ ಬಳಕೆ ಮತ್ತು ಮಾರಾಟದ ವಿರುದ್ಧ ನಗರ ಪಾಲಿಕೆಗಳ ಮಟ್ಟದಲ್ಲಿ ಪ್ರತಿದಿನ ತಪಾಸಣೆ ನಡೆಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಳ್ಳಲಾಗುವುದು. ತಪಾಸಣೆಯ ಸಂದರ್ಭದಲ್ಲಿ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಪಡೆಯಲಾಗುವುದು ಎಂದೂ ಹೇಳಿದ್ದಾರೆ.
Ganesh Chaturthi 2026: ಎನ್‌ಜಿಟಿ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅನುಮತಿ
ಗಣೇಶೋತ್ಸವ ಆಚರಣೆಗೆ ಪಾಲಿಕೆ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಪರಿಸರ ಇಲಾಖೆಗಳ ಸಮನ್ವಯದೊಂದಿಗೆ ಏಕಗವಾಕ್ಷಿ ವ್ಯವಸ್ಥೆಯ ಮೂಲಕ ಅನುಮತಿ ನೀಡಲಾಗುವುದು. ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, 24 ಗಂಟೆಗಳ ಒಳಗಾಗಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ನಿಯಮಗಳು ಹಾಗೂ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ಅನುಮತಿ ನೀಡಲಾಗುವುದು. ಧ್ವನಿವರ್ಧಕ ಬಳಕೆಗೆ ನಿಗದಿತ ಶುಲ್ಕ ಪಾವತಿಸಿ, ಅಗತ್ಯ ದಾಖಲೆಗಳೊಂದಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲ ಕ್ರಮಗಳ ಅನುಷ್ಠಾನವನ್ನು ನಗರ ಪಾಲಿಕೆಗಳ ಆಯುಕ್ತರು ಹಾಗೂ ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.


Click it and Unblock the Notifications
