ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಸಿದ್ಧತೆ: ತ್ವರಿತ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ & ನೋಡೆಲ್ ಅಧಿಕಾರಿಗಳ ನೇಮಕ: ಜಿಬಿಎ

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ತ್ವರಿತ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ & ನೋಡೆಲ್ ಅಧಿಕಾರಿಗಳ ನೇಮಕ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2026ನೇ ಸಾಲಿನ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಅನುಮತಿ ನೀಡಲು ಏಕಗವಾಕ್ಷಿ ವ್ಯವಸ್ಥೆ ರೂಪಿಸಲಾಗಿದ್ದು, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಅನುಮತಿ ನೀಡುವ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರು ತಿಳಿಸಿದ್ದಾರೆ.

Ganesh Chaturthi Eco-Friendly Celebrations in Bengaluru GBA Sets Up Single-Window Permission System

ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪಿಓಪಿ, ರಾಸಾಯನಿಕ ಬಣ್ಣಗಳು ಹಾಗೂ ಥರ್ಮಕೋಲ್ ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳ ತಯಾರಿಕೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದಲ್ಲಿ ಸ್ಥಳ ಪರಿಶೀಲನೆ ನಡೆಸಿ, ನಿಯಮಾನುಸಾರ ದಂಡ ವಿಧಿಸುವುದು, ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಹಾಗೂ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

Ganesh Chaturthi: ತ್ವರಿತ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ

ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ಪಡೆಯುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾರ್ಡ್‌ವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲಿದ್ದಾರೆ. ಅನುಮತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪರಿಶೀಲಿಸಿ, 24 ಗಂಟೆಗಳ ಒಳಗಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅನುಮತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಅಥವಾ ತೊಂದರೆ ಉಂಟಾದಲ್ಲಿ ಸಂಬಂಧಪಟ್ಟ ಇಲಾಖೆಗಳ ವರದಿಯನ್ನು ಪಡೆದು ಅದೇ ದಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಹೇಳಿದರು.

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಆದ್ಯತೆ

ಗಣೇಶ ಮೂರ್ತಿ ತಯಾರಕರು ಮಣ್ಣಿನಿಂದ ಹಾಗೂ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಮೂರ್ತಿಗಳನ್ನು ಮಾತ್ರ ತಯಾರಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವಂತೆ ನಗರ ಪಾಲಿಕೆ ವತಿಯಿಂದ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ. ಮನೆಯಲ್ಲಿಯೇ ಮಣ್ಣಿನ ಗಣೇಶ ಮೂರ್ತಿಗಳನ್ನು ಬಕೆಟ್‌ಗಳಲ್ಲಿ ವಿಸರ್ಜಿಸಿ, ವಿಸರ್ಜನೆಯ ನಂತರ ದೊರೆಯುವ ಮಣ್ಣನ್ನು ಕೈತೋಟ ಹಾಗೂ ಹೂವಿನ ಕುಂಡಗಳಿಗೆ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Ganesh Chaturthi: ಗಣೇಶ ಮೂರ್ತಿ ವಿಸರ್ಜನೆಗೆ ಪರ್ಯಾಯ ವ್ಯವಸ್ಥೆ

ಕೆರೆ ಹಾಗೂ ಕಲ್ಯಾಣಿಗಳಲ್ಲಿ ನೇರವಾಗಿ ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟಲು ವಿವಿಧೆಡೆ ತಾತ್ಕಾಲಿಕ ವಿಸರ್ಜನಾ ಕಲ್ಯಾಣಿಗಳು ಹಾಗೂ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ ಮಾಡಲಾಗಿದೆ. ದೊಡ್ಡ ಗಾತ್ರದ ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಲಾದ ಸ್ಥಳಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಚಾರ ಮಾಡಲಾಗುತ್ತಿದೆ. ಅಗತ್ಯವಿರುವ ಕಡೆ ವಾರ್ಡ್ ವ್ಯಾಪ್ತಿಯಲ್ಲಿ ಸಂಚಾರಿ ವಾಹನಗಳ ಮೂಲಕವೂ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಯುಕ್ತರು ಹೇಳಿದರು.

ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಣ್ಣು, ಪೂಜಾ ಹೂವು ಹಾಗೂ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ, ಹಸಿ ತ್ಯಾಜ್ಯವನ್ನು ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಹಾಗೂ ಒಣ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಗಳಿಗೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಪಾಲಿಕೆ ಆರೋಗ್ಯ ಇಲಾಖೆಯ ವತಿಯಿಂದ ದಿನನಿತ್ಯ ತಪಾಸಣಾ ಕಾರ್ಯಾಚರಣೆಗಳನ್ನು ನಡೆಸಲು ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ನಿಷೇಧಿತ ಪ್ಲಾಸ್ಟಿಕ್ ಮಾರಾಟ ಅಥವಾ ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ, ಪ್ಲಾಸ್ಟಿಕ್ ವಶಪಡಿಸಿಕೊಂಡು ಮರುಬಳಕೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Ganesh Chaturthi: ಸಾರ್ವಜನಿಕರಿಗೆ ಮನವಿ

ನಗರದ ಪರಿಸರ ಹಾಗೂ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಹಬ್ಬದ ಆಯೋಜಕರು ಪಾಲಿಕೆಯೊಂದಿಗೆ ಕೈಜೋಡಿಸಿ. ಮಣ್ಣಿನಿಂದ ತಯಾರಿಸಿದ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನಷ್ಟೇ ಪ್ರತಿಷ್ಠಾಪಿ, ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ. ಗಣೇಶೋತ್ಸವದ ಸಂದರ್ಭದಲ್ಲಿ ಪಾಲಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳು ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸುರಕ್ಷಿತ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಸಾರ್ವಜನಿಕರು ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+