ಬೆಂಗಳೂರಿನ ಈ ಭಾಗದ ಆಸ್ತಿ ಬಾಕಿದಾರರಿಗೆ ಜಿಬಿಎಯಿಂದ ಶಾಕ್: ಇ - ಖಾತಾ ಗೊಂದಲ ಪರಿಹಾರ
ಬೆಂಗಳೂರಿನ ಪಾಲಿಕೆಗಳಿಗೆ ಆಸ್ತಿ ತೆರಿಗೆಯು ಪ್ರಮುಖ ಆದಾಯ ಮೂಲವಾಗಿದೆ. ಇದೀಗ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪಾಲಿಕೆಗಳು ಹೆಚ್ಚು ಒತ್ತು ನೀಡುತ್ತಿವೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಕಂದಾಯ ವಿಭಾಗದ ಕಾರ್ಯವೈಖರಿಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳು / ನೌಕರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಸೂಚನೆ ನೀಡಿದ್ದಾರೆ.
ಯಲಹಂಕ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಗುರುವಾರ (ಸೆಪ್ಟೆಂಬರ್ 18)ದಂದು ಕಂದಾಯ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಂದಾಯ ಸಂಗ್ರಹಣೆಯಲ್ಲಿ ಒಂದು ವಾರದೊಳಗಾಗಿ ತಮ್ಮ ಕಾರ್ಯವೈಖರಿಯನ್ನು ಸುಧಾರಿಸಿಕೊಳ್ಳದೇ ನಿರ್ಲಕ್ಷ್ಯ ತೋರಿದಲ್ಲಿ, ಅಂತಹ ಅಧಿಕಾರಿಗಳು ಮತ್ತು ನೌಕರರುಗಳಿಗೆ ಕಾರಣ ಕೇಳಿ ನೊಟೀಸ್ ಜಾರಿ ಮಾಡಿ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

1,242 ಕೋಟಿ ಆಸ್ತಿ ತೆರಿಗೆ ಸಂಗ್ರಹಣೆ ಗುರಿ: ಇನ್ನು ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 4,87,292 ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಒಳಪಟ್ಟಿದ್ದೆ. 1,242 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಇದೆ. ಈವರೆಗೆ ರೂ.542.32 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ. ಬಾಕಿ 700 ಕೋಟಿ ರೂ. ತೆರಿಗೆ ಸಂಗ್ರಹಿಬೇಕಾಗಿದ್ದು, ಕಂದಾಯ ವಸೂಲಿಗಾರರು / ಕಂದಾಯ ಪರಿವೀಕ್ಷಕರವಾರು / ಸಹ ಕಂದಾಯ ಅಧಿಕಾರಿಗಳವಾರು / ಕಂದಾಯ ಅಧಿಕಾರಿಗಳವಾರು ಕಾರ್ಯವೈಖರಿಯನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುವುದೆಂದು ತಿಳಿಸಿದ್ದಾರೆ.
ಮುಂದುವರಿದು ಹೆಚ್ಚು ಬಾಕಿ ಉಳಿಸಿಕೊಂಡಿರುವ ಎಲ್ಲಾ ಸುಸ್ತಿದಾರರಿಂದ ಕೂಡಲೇ ಆಸ್ತಿ ತೆರಿಗೆ ಸಂಗ್ರಹಿಸಬೇಕು. ಜೊತೆಗೆ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಪೂರ್ಣ ಪ್ರಮಾಣದಲ್ಲಿ ಗುರುತಿಸಿ, ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು. ಜನಪರ ಕಾಳಜಿಯಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತರು ನೀಡಿರುವ ಗುರಿಯನ್ನು ತಲುಪುವಲ್ಲಿ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.
ಮುಖ್ಯವಾಗಿ ಇ -ಖಾತಾ ಸಂಬಂಧಪಟ್ಟ ಕುಂದು ಕೊರತೆಗಳನ್ನು ನಿವಾರಿಸಲು ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ಲತಾ ಆರ್ ರವರು ಮಾತನಾಡಿ, ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಗುರಿ ಸಾಧಿಸುವ ವಿಚಾರದಲ್ಲಿ ಯಾವುದೇ ಲೋಪದೋಷಗಳಾಗದಂತೆ ಮಾನ್ಯ ಆಯುಕ್ತರು ಸೂಚಿಸಿದಂತೆ ಒಂದು ವಾರದೊಳಗೆ ಎಲ್ಲಾ ಅಧಿಕಾರಿ / ನೌಕರರು ತಮ್ಮತಮ್ಮ ಕಾರ್ಯವೈಖರಿಯನ್ನು ಸುಧಾರಿಸಿಕೊಂಡು, ಶಿಸ್ತು ಕ್ರಮಕ್ಕೊಳಗಾಗದಂತೆ ಪ್ರಾಮಾಣಿಕವಾಗಿ ಆಸ್ತಿ ತೆರಿಗೆ ಗುರಿಯನ್ನು ತಲುಪಲು ಶ್ರಮಿಸಬೇಕಾಗಿ ತಿಳಿಸಿದರು.
ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ: ಆಯುಕ್ತರು ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ನಂತರ ಆಕ್ರಮಣಕಾರಿ ಬೀದಿ ನಾಯಿಗಳ ವೀಕ್ಷಣೆ ಕೇಂದ್ರಕ್ಕೆ (Observatory centre)ಭೇಟಿ ನೀಡಿ ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ನಗರ ಪಾಲಿಕೆ ವ್ಯಾಪ್ತಿಯ ಬೀದಿ ಬದಿಯಲ್ಲಿರುವ ಅಕ್ರಮಣಕಾರಿ ನಾಯಿಗಳನ್ನು ಗುರುತಿಸಿ, ಎಬಿಸಿ ಕೇಂದ್ರಕ್ಕೆ ಕರೆತಂದು ಸೂಕ್ತ ಚಿಕಿತ್ಸೆ ನೀಡಿ, ನಾಯಿಗಳು ಸಾರ್ವಜನಿಕರಿಗೆ ತೊಂದರೆ ನೀಡದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲು ಸೂಚಿಸಿದರು.
ನಂತರ ವಿದ್ಯುತ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರೊಂದಿಗೆ ನಗರ ಪಾಲಿಕೆ ವ್ಯಾಪ್ತಿಯ ಮೇಡಿ ಅಗ್ರಹಾರದ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಹಾಗೂ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.












Click it and Unblock the Notifications