MUDA Scam: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಗರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೋಟಿಸ್‌ಗೆ ವಿವರವಾಗಿ ಉತ್ತರ ಕೊಟ್ಟ ಬಳಿಕವೂ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳು, ಸಚಿವರ ಜೊತೆ ತುರ್ತು ಸಭೆ ನಡೆಸಲಿದ್ದಾರೆ.
ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಸಚಿವರು ಸಿಎಂ ಸಿದ್ದರಾಮಯ್ಯ ಪರ ಬೆಂಬಲಕ್ಕೆ ನಿಂತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಮೇಲಿನಿಂದ ಒತ್ತಡವಿರುವ ಕಾರಣ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ, ಇದರ ಹಿಂದೆ ರಾಜಕೀಯ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವ ಕಾರಣ ಈಗ ನಾವು ಕೂಡ ಕಾನೂನು ಮುಖಾಂತರವೇ ಉತ್ತರ ಕೊಡುತ್ತೇವೆ. ಎಲ್ಲಾ ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ದಿನೇಶ್ ಗುಂಡೂರಾವ್ ಅಸಮಾಧಾನ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸಲಾಗಿದೆ, ರಾಜ್ಯಪಾಲರು ಅನುಮತಿ ನೀಡಿರುವ ಹಿಂದೆ ಬಿಜೆಪಿ ಒತ್ತಡವಿದೆ ಎಂದು ಆರೋಪಿಸಿದ್ದಾರೆ. ಇದು ಷಡ್ಯಂತ್ರ ಎನ್ನುವ ವಿಚಾರ ನಮಗೆ ಮೊದಲೇ ಗೊತ್ತಿತ್ತು. ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಐಟಿ, ಸಿಬಿಐ ಎಲ್ಲವನ್ನೂ ದುರುಪಯೋಗಪಡಿಸಿಕೊಂಡಿದೆ, ರಾಜ್ಯಪಾಲರ ಕಚೇರಿ ಕೂಡ ಇದೀಗ ಬಿಜೆಪಿ ಕಚೇರಿಯಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎನ್ನುವುದನ್ನು ತೋರಿಸಿದ್ದಾರೆ. ನಾವು ಕಾನೂನು ಮುಖಾಂತರವೇ ಹೋರಾಡುತ್ತೇವೆ, ಸಿಎಂ ಇದಕ್ಕೆಲ್ಲಾ ಜಗ್ಗುವುದಿಲ್ಲ ಎಂದು ಹೇಳಿದರು.












Click it and Unblock the Notifications