ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸಿಎಂ ಆದೇಶ
ಬೆಂಗಳೂರು, ಅ.8 : ಸರ್ಕಾರಿ ಭೂಮಿಯನ್ನು ಕಬಳಿಕೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ರಸ್ತೆ, ಉದ್ಯಾನವನ, ರಾಜಾಕಾಲುವೆ ಮುಂತಾದವುಗಳಿಗೆ ಮೀಸಲಿಟ್ಟ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿದ್ದರೆ, ಅವುಗಳನ್ನು ತಕ್ಷಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಆಗಿರುವ ಭೂ ಕಬಳಿಕೆ ಕುರಿತು ಚರ್ಚಿಸಲು ಉನ್ನತ ಮಟ್ಟದ ಸಭೆ ನಡೆಯಿತು. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡವರು ಎಷ್ಟು ಪ್ರಭಾವಿಗಳಾಗಿದ್ದರೂ ಅದನ್ನು ತೆರವುಗೊಳಿಸಿ, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯಿರಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. [ಭೂಗಳ್ಳರ ವಿರುದ್ಧ ಆಪ್ ಆಮರಣಾಂತ ಉಪವಾಸ]

ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚು ಭೂ ಕಬಳಿಕೆ ಆದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 34 ಸಾವಿರ ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದರು. [ಡಿಸೆಂಬರ್ ನಂತರ ಮಂಡೂರಲ್ಲಿ ಕಸ ಹಾಕಲ್ಲ]
ಮೂವರು ಜಿಲ್ಲಾಧಿಕಾರಿಗಳು : ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಇಬ್ಬರು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. ಪ್ರಸ್ತುತ ಇರುವ ಒಬ್ಬರು ಜಿಲ್ಲಾಧಿಕಾರಿಗಳಿಂದ ಒತ್ತುವರಿ ತೆರವು ಅಸಾಧ್ಯ. ಆದ್ದರಿಂದ, ಇಬ್ಬರನ್ನು ನೇಮಕ ಮಾಡಲಾಗುವುದು. ಎರಡು ದಿನದಲ್ಲಿ ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಜಯಚಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳಿಗೆ ನೆರವಾಗಲು ಹಿಂದೆಯೂ ವಿಶೇಷ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿತ್ತು. ಒಟ್ಟು ಮೂವರು ಜಿಲ್ಲಾಧಿಕಾರಿಗಳಿಗೂ ಪ್ರದೇಶಗಳ ವ್ಯಾಪ್ತಿಯನ್ನು ನೀಡಲಾಗುವುದು. 50 ಎಕರೆಗಿಂತ ಹೆಚ್ಚಿನ ಭೂಮಿ ಒತ್ತುವರಿಯಾಗಿರುವುದನ್ನು ಮೊದಲು ತೆರವುಗೊಳಿಸುವಂತೆ ಸೂಚನೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ವಿಶೇಷ ಕೋರ್ಟ್ ಸ್ಥಾಪನೆ : ಭೂ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಕುರಿತು ಪ್ರಸ್ತಾವನೆ ರಚಿಸಿ ಅದನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದೆ. ಅವರ ಒಪ್ಪಿಗೆ ದೊರೆತ ಬಳಿಕ ಕೋರ್ಟ್ ಸ್ಥಾಪನೆಯಾಗಲಿದೆ. ಭೂ ಒತ್ತುವರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಡೆಸುತ್ತಿರುವ ಧರಣಿಯನ್ನು ಕೈಬಿಡುವಂತೆ ಸಚಿವರು ಮನವಿ ಮಾಡಿದರು.












Click it and Unblock the Notifications