Greater Bengaluru: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ; ಯಾರಿಗೆಲ್ಲ ಸ್ಥಾನ?
ಭವಿಷ್ಯದ ಬೆಂಗಳೂರು ನಿರ್ಮಾಣದ ಆಶಯದೊಂದಿಗೆ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (Greater Bengaluru Authority) ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಐದು ಪಾಲಿಕೆಗಳಾಗಿ ವಿಭಜಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದೀಗ ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇಮಕಗೊಂಡಿದ್ದಾರೆ. ಇದರೊಂದಿಗೆ 75 ಸದಸ್ಯರನ್ನು ಸಹ ನೇಮಕ ಮಾಡಲಾಗಿದೆ.
ಬಿಬಿಎಂಪಿಯನ್ನ ಐದು ಭಾಗಗಳನ್ನಾಗಿ ವಿಂಗಡಿಸಿ, ಈಗಿನ ಬಿಬಿಎಂಪಿ ಕೇಂದ್ರ ಕಚೇರಿಯನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯಾಗಿ ಬದಲಾಯಿಸುವುದಾಗಿ ಸರ್ಕಾರ ಘೋಷಿಸಿತ್ತು. ಅದರಂತೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಲಾಗಿದೆ. ಇದರಲ್ಲಿ ಕೇಂದ್ರದಲ್ಲಿರುವ ಬೆಂಗಳೂರಿನ ಸಚಿವರು, ಬೆಂಗಳೂರಿನ ಕ್ಷೇತ್ರಗಳನ್ನು ಪ್ರತಿನಿಧಿಸುವ ಸಚಿವರು, ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನ ಪದನಿಮಿತ್ತ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

ಯಾರಿಗೆಲ್ಲ ಸದಸ್ಯ ಸ್ಥಾನ?
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಪದನಿಮಿತ್ತ ಸದಸ್ಯರಾಗಿ ಪ್ರಾಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ಪಾಲಿಕೆಗಳ ಮೇಯರ್‌ಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿದಂತೆ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ.
ಬಿಬಿಎಂಪಿಯನ್ನು ವಿಭಜಿಸಿ, ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ, ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ ಎಂದು ಐದು ಭಾಗ ಮಾಡಲಾಗಿದೆ.

ವಿಧಾನಸಭೆಯಿಂದ ಅಂಗೀಕೃತಗೊಂಡಿದ್ದ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದ್ದರು. ಬಳಿಕ ಅಲ್ಲಿಯೂ ಅನುಮೋದನೆ ನೀಡಲಾಯಿತು. ಆದರೆ ಬಿಜೆಪಿ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಕಾಯ್ದೆ ಜಾರಿಯಾಗಲಿದೆ. ಇನ್ನು ಮುಂದೆ ಬೆಂಗಳೂರು ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಐದು ಪಾಲಿಕೆಗಳು ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಯಾದ ನಾನು ಪ್ರಾಧಿಕಾರದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಕೊನೆಗೂ ಪ್ರಾಧಿಕಾರ ಅಧಿಕೃತವಾಗಿ ರಚನೆಯಾಗಿದೆ.












Click it and Unblock the Notifications