RCB vs CSK ಮ್ಯಾಚ್ ವೇಳೆ ಐಪಿಎಸ್ ಅಧಿಕಾರಿ ಪುತ್ರಿಗೆ ಲೈಂಗಿಕ ಕಿರುಕುಳ, ದೂರು ದಾಖಲು
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಹೈವೋಲ್ಟೇಜ್ ಮ್ಯಾಚ್ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವೆ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲೇ ಗೆದ್ದು ಬೀಗಿತು. ಈ ಪಂದ್ಯದ ವೇಳೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 3ರಂದು ರಾತ್ರಿ 9.40ರ ಸುಮಾರಿಗೆ ಪ್ರೀಮಿಯಂ ಡೈಮಂಡ್ ಬಾಕ್ಸ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತ ವ್ಯಕ್ತಿಗಳು ತಮ್ಮ ಮಗನನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಹಾಗೂ ತಮ್ಮ ಪುತ್ರಿಯನ್ನು ಅನುಚಿತವಾಗಿ ಮುಟ್ಟುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಆ ಪುಂಡರು ಜೋರಾಗಿ ಕೂಗಿದರು, ಬೆದರಿಕೆ ಹಾಕಿದರು ಹಾಗೂ ತಮ್ಮ ಮಕ್ಕಳನ್ನು ತೊಂದರೆಗೊಳಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತಮ್ಮ ಮಗಳನ್ನು ನಿಂದಿಸಿದಲ್ಲದೆ, ಮಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಇಡೀ ಘಟನೆಯನ್ನು ತಮ್ಮ ಮಗ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ ಎಂದು ದೂರುದಾರರು ಹೇಳಿಕೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಶಂಕಿತರಲ್ಲಿ ಒಬ್ಬರು ಆದಾಯ ತೆರಿಗೆ ಹಿರಿಯ ಅಧಿಕಾರಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್‌ಎಸ್ ಸೆಕ್ಷನ್‌ಗಳು 351(1)ರಡಿ ಕ್ರಿಮಿನಲ್ ಬೆದರಿಕೆ, 352ರಡಿ ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಆರೋಪ, 75(1)ರಡಿ ಲೈಂಗಿಕ ಕಿರುಕುಳ, 79ರಡಿ ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿದ ಕೃತ್ಯದ ಅಪರಾಧ ಸೇರಿದಂತೆ ಹಲವು ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ದೃಢಪಡಿಸಿದ್ದಾರೆ. ಆರೋಪಿಗಳ ಹೆಸರುಗಳನ್ನು ಇನ್ನೂ ಸಾರ್ವಜನಿಕರಿಗೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದ್ದು, ಈ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಅಸಲಿಗೆ ಆಗಿದ್ದೇನು?
ಕೆಲ ಮಾಧ್ಯಮಗಳಲ್ಲಿ ವರದಿಯಾಗಿರುವ ಪ್ರಕಾರ ಇದು ಎರಡು ಕುಟುಂಬಗಳ ನಡುವೆ ನಡೆದಿರುವ ಗಲಾಟೆ ಎನ್ನಲಾಗಿದೆ. ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿ ಕುಟುಂಬದ ನಡುವೆ ಮೊದಲಿಗೆ ಕುರ್ಚಿ ವಿಚಾರಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಬಳಿಕ ಇಬ್ಬರೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಅಲ್ಲಿಯೂ ಕಿತ್ತಾಡಿದ್ದಾರೆ. ಐಪಿಎಸ್ ಅಧಿಕಾರಿಯ ಪತ್ನಿ ಬೆದರಿಕೆ, ಲೈಂಗಿಕ ಕಿರುಕುಳ ಮತ್ತು ಮಗಳ ಮಾನಹಾನಿ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ಈ ಆರೋಪಗಳನ್ನು ಐಟಿ ಅಧಿಕಾರಿ ಕುಟುಂಬ ನಿರಾಕರಿಸಿದೆ.












Click it and Unblock the Notifications