ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಧರಣಿ, ಪ್ರತಿಭಟನೆ ನಿರ್ಬಂಧ ಮುಂದುವರಿಕೆಗೆ ಹೈಕೋರ್ಟ್ ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಆ.1. ಬೆಂಗಳೂರು ಮಹಾನಗರದಲ್ಲಿ ಧರಣಿ, ಪ್ರತಿಭಟನೆ,‌ ಮೆರವಣಿಗೆಗಳಿಂದ ಸಾರ್ವನಿಕರಿಗೆ ಆಗುವ ತೊಂದರೆಗಳನ್ನು ನಿವಾರಿಸಲು ಅವುಗಳಿಗೆ ಹೇರಲಾಗಿರುವ ನಿರ್ಬಂಧ ಮುಂದುವರಿಸುವಂತೆ ಹೈಕೋರ್ಟ್, ಸರ್ಕಾರಕ್ಕೆ ಆದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪಿಐಎಲ್ ಸೋಮವಾರ ಹಂಗಾಮಿ ಸಿಜೆ ಅಲೋಕ್ ಅರಾಧೆ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲ ಕಾಲ ವಿಚಾರಣೆ ನಡೆಸಿ, ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಪಿಐಎಲ್ ಇತ್ಯರ್ಥಪಡಿಸಿತು.

ಸರ್ಕಾರಿ ವಕೀಲರು, ಹೈಕೋರ್ಟ್ ಆದೇಶದಂತೆ ಕ್ರಮ ಕೈಗೊಂಡು ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.

HC asked state to continue restrictions on protest, rally and procession in Bangalore city

ಆ ರಾಜ್ಯ ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ನಿಗದಿತ ಜಾಗದಲ್ಲಿ ಮಾತ್ರ ಅವಕಾಶ ನೀಡಬೇಕು. ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತು.

ಫ್ರೀಡಂ ಪಾರ್ಕ್ ಬಿಟ್ಟು ಹೊರಗೆ ಪ್ರತಿಭಟನೆಗೆ ಬ್ರೇಕ್:

ಬೆಂಗಳೂರಿನ ಗಾಂಧಿನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನದಲ್ಲಿ (ಫ್ರೀಂ ಪಾರ್ಕ್) ಹೊರತುಪಡಿಸಿ ನಗರದ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಯದಂತೆ ಸರ್ಕಾರ ಖಾತರಿಪಡಿಸಬೇಕು ಎಂದು ಹೈಕೋರ್ಟ್ ಕಳೆದ ಮಾ.3ರಂದು ಮಹತ್ವದ ಆದೇಶ ಹೊರಡಿಸಿದೆ.

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ್ದ ನ್ಯಾಯಪೀಠ ಈ ಆದೇಶ ಮಾಡಿತ್ತು.

"ನಗರದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸುವುದರಿಂದ ಸಂಚಾರದ ದಟ್ಟಣೆ ಉಂಟಾಗುತ್ತಿದೆ. ನಗರ ಮತ್ತು ನಗರದಲ್ಲಿ ದಿನನಿತ್ಯದ ಚಟುವಟಿಕೆ ಗಂಭೀರ ಪರಿಣಾಮ ಬೀರುತ್ತಿದೆ. ಹಾಗಾಗಿ, ಯಾವುದೇ ರಾಜಕೀಯ ಪಕ್ಷ ಅಥವಾ ರಾಜಕೀಯೇತರ ಸಂಘಟನೆಗಳು ನಗರದ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸ್ವಾತಂತ್ರ್ಯ ಉದ್ಯಾನದಲ್ಲಿ ಹೊರತುಪಡಿಸಿ ನಗರದ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ, ಬಹಿರಂಗ ಸಭೆ ನಡೆಯದಂತೆ ಸರ್ಕಾರ ಖಾತರಿಪಡಿಸಬೇಕು'' ಎಂದು ಆದೇಶಿಸಿತು.

ಅಲ್ಲದೆ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆಗಳು ಕಂಡುಬಂದರೆ ತಕ್ಷಣ ಅದಕ್ಕೆ ನಿರ್ಬಂಧ ವಿಧಿಸಬೇಕು. ರಾಜ್ಯ ಸರ್ಕಾರವು ನ್ಯಾಯಾಲಯದ ಆದೇಶವನ್ನು ತಕ್ಷಣ ಜಾರಿ ಮಾಡಬೇಕು. ಈ ಆದೇಶ ಪಾಲನೆ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿತು.

ಹಾಗೆಯೇ, ಸಾರ್ವಜನಿಕ ಸಭೆ, ಪ್ರತಿಭಟನೆ ಇತ್ಯಾದಿ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ಅನುಮತಿ ನೀಡುವ ಸಂಬಂಧ ರಾಜ್ಯ ಸರ್ಕಾರವು ಇ ಗೆಜೆಟೆಡ್ ನಿಯಮಗಳನ್ನು ಸಲ್ಲಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆ-1967ರ ಸೆಕ್ಷನ್‌103 ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ)

ಸೆಕ್ಷನ್ 188ರ ಅಡಿ ಈ ನಿಯಮಗಳನ್ನು ಜಾರಿ ಮಾಡುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್ಸ್‌ಪೆಕ್ಟರ್ ಕ್ರಮಕೈಗೊಳ್ಳಬಹುದು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ :

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಯಿಂದ ಸಂಚಾರ ದಟ್ಟಣೆ
ಉಂಟಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿರುವ ವಿಚಾರ ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಹಾಲಿ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಅರವಿಂದ್ ಕುಮಾರ್ ಅವರು 2019ರ ಮಾರ್ಚ್‌ನಲ್ಲಿ ಹೈಕೋರ್ಟ್ ನ ಅಂದಿನ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರ ಬರೆದಿದ್ದರು. ಅದನ್ನು ಪರಿಗಣಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿತ್ತು.

English summary
High Court has ordered the government to continue the ban imposed on sit-ins, protests and processions in Bengaluru city to alleviate the problems caused to the common people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X