'ವಿಧಾನಸಭಾ ಉಪಚುನಾವಣೆ: ಜೆಡಿಎಸ್ ನಿಂದ ಮೈತ್ರಿ ಇಲ್ಲ'
ಬೆಂಗಳೂರು, ಜ.17: 'ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಯಾವುದೇ ಕ್ಷೇತ್ರದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಫೆ.13ರಂದು ನಡೆಯಲಿರುವ ಹೆಬ್ಬಾಳ, ಬೀದರ್ ಗ್ರಾಮಾಂತರ ಮತ್ತು ದೇವದುರ್ಗ ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದರು.

ಜೆಡಿಎಸ್ ನಲ್ಲಿ ಸದ್ಯಕ್ಕೆ ಆಂತರಿಕ ಭಿನ್ನಮತ ಸಮಸ್ಯೆ ಇರುವುದನ್ನು ಒಪ್ಪಿಕೊಂಡ ಕುಮಾರಸ್ವಾಮಿ ಅವರು, ಈ ಮೂರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಪ್ರತ್ಯೇಕ ತಂಡವನ್ನು ತಯಾರಿ ಮಾಡುವ ಸುಳಿವು ನೀಡಿದರು. ಪಕ್ಷದಲ್ಲಿ ಆಂತರಿಕ ಸಮಸ್ಯೆಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಬೇಕಾಗಿದೆ. ಆದರೆ, ಇದು ಅನಿವಾರ್ಯ. ಪಕ್ಷದ ಸಿದ್ಧಾಂತಕ್ಕೆ ತಲೆಬಾಗಿ ಕಾರ್ಯ ನಿರ್ವಹಿಸುವ ಕಾರ್ಯಕರ್ತರನ್ನು ಸಂಘಟಿಸುವ ಕಾರ್ಯ ಆಗಬೇಕಿದೆ ಎಂದರು.
ಇತ್ತ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಸೋಮವಾರ ಸಭೆ ಸೇರಿ ತೀರ್ಮಾನ ಕೈಗೊಳ್ಳಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಚ್ ಎಂ ರೇವಣ್ಣ ಅವರ ನಡುವೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಮನಸ್ತಾಪ ಉಂಟಾಗಿದೆ.












Click it and Unblock the Notifications