Bengaluru Rain: ಮಳೆ; ಬಿಬಿಎಂಪಿ ಹೈಅಲರ್ಟ್, ಕಮಿಷನರ್ ವಾರ್ನಿಂಗ್!
ಬೆಂಗಳೂರಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಮಂಗಳವಾರ ಬೆಳಿಗ್ಗೆಯಿಂದ 12 ಗಂಟೆಯ ವರೆಗೂ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತಿದೆ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಇದೀಗ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಬಿಎಂಪಿಯ ಅಧಿಕಾರಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಬೆಂಗಳೂರಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ವಲಯಗಳಲ್ಲಿ ಅಧಿಕಾರಿಗಳು ಹೈಅಲರ್ಟ್‌ನಲ್ಲಿ ಇರಬೇಕು. ಸನ್ನದ್ಧ ಸ್ಥಿತಿಯಲ್ಲಿ ಇರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಕಮಿಷನರ್ ಅಲರ್ಟ್ ಕೊಟ್ಟಿದ್ದಾರೆ.

ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ವಿವಿಧ ಭಾಗದಲ್ಲಿ ಸುಮಾರು 2 ಗಂಟೆಗೂ ಹೆಚ್ಚು ಅವಧಿ ಮಳೆಯಾಗಿದೆ. ಹೀಗಾಗಿ, ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಹಲವು ಭಾಗದ ರಸ್ತೆಗಳು ಕೆರೆಯಂತಾಗಿವೆ. ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಾಗಿರುವ ಬಗ್ಗೆಯೂ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎಲ್ಲಿಯೂ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶ ಹಾಗೂ ನಗರದ ತಗ್ಗು ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಯಾವುದಾದರೂ ಸಮಸ್ಯೆಯಾಗುವಂತೆ ಇದ್ದರೆ, ಕೂಡಲೇ ಸ್ಥಳೀಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕೆ ಕರೆದೊಯ್ಯುವ ವ್ಯವಸ್ಥೆ ಮಾಡಬೇಕೆಂದು ಅವರು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ನೀರು ನಿಲ್ಲಬಾರದು: ಬೆಂಗಳೂರಲ್ಲಿ ಧಾರಾಕಾರ ಮಳೆಯಾಗ್ತಿದೆ. ಹೀಗಾಗಿ, ರಸ್ತೆಯಲ್ಲಿ ಕೆಲವು ಕಡೆ ನೀರು ನಿಲ್ಲುವ ಸಾಧ್ಯತೆ ಇದೆ. ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಗಳಲ್ಲಿ ನೀರು ನಿಂತು ಜಲಾವೃತವಾಗುವ ಸಾಧ್ಯತೆ ಇದೆ. ಇದರಿಂದ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. ಹೀಗಾಗಿ, ಬಿಬಿಎಂಪಿಯ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕು. ಪಾಲಿಕೆ ಸಿಬ್ಬಂದಿಯೊಂದಿಗೆ ಗ್ರೇಟಿಂಗ್ಸ್ ಗಳ ಬಳಿ ಕಸ ಸ್ವಚ್ಛಗೊಳಿಸಿ ಸೈಡ್ ಡ್ರೈನ್‌ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಿ ಎಂದೂ ಸೂಚನೆ ನೀಡಿದ್ದಾರೆ.
ನಿಯಂತ್ರಣ ಕೊಠಡಿಗೆ ದೂರು: ಬೆಂಗಳೂರಲ್ಲಿ ಮಳೆಯಾಗುತ್ತಿರುವುದರಿಂದ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜಲಾವೃತವಾಗಿರುವ, ಮರ, ಮರದ ರೆಂಬೆ-ಕೊಂಬೆಗಳು ಧರೆಗುರುಳಿರುವುದು ಸೇರಿದಂತೆ ಬೆಂಗಳೂರಿಗರಿಂದ ಯಾವುದೇ ಸಮಸ್ಯೆಗಳ ಬಗ್ಗೆ ದೂರು ಬಂದರೂ, ಕೂಡಲೇ ಬಗೆಹರಿಸಬೇಕು. ಬಿಬಿಎಂಪಿಯ ನಿಯಂತ್ರಣ ಕೊಠಡಿಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ ಇರುವ ಸಮಸ್ಯೆಗಳನ್ನು ಬಗೆಹರಸಬೇಕೆಂದು ಸೂಚನೆ ನೀಡಿದ್ದಾರೆ.

ರಾಜಕಾಲುವೆ: ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ, ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೊಗುವಂತೆ ನೋಡಿಕೊಳ್ಳಬೇಕು. ಮಳೆಯಿಂದ ಧರೆಗುರುಳುವ ಮರ, ಮರದ ರೆಂಬೆ-ಕೊಂಬೆಗಳನ್ನು ಮರ ತೆರವುಗೊಳಿಸುವ ತಂಡಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಸಾರ್ವಜನಿಕರಿಂದ ದೂರು ಬಂದರೆ, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದ್ದಾರೆ.
ಪಾಲಿಕೆ ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ: ಬೆಂಗಳೂರಿನ ಪಾಲಿಕೆ ವ್ಯಾಪ್ತಿಯ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ (ಸಹಾಯ) ಕೊಠಡಿಗಳಿವೆ. ಪಾಲಿಕೆ ಕೇಂದ್ರ ಕಚೇರಿಯಲ್ಲಿ ಒಂದು ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ಸಾರ್ವಜನಿಕರು ಕೂಡಲೇ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ಕೊಡಬಹುದಾಗಿದೆ. ಈ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications