Heavy Rain: ಬೆಂಗಳೂರಲ್ಲಿ ಧಾರಾಕಾರ ಮಳೆ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ, ಇನ್ನೆಷ್ಟು ದಿನ ಮಳೆ!
ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆ ಮುಂದುವರಿದಿದೆ. ಕೆಲವು ತಗ್ಗು ಪ್ರದೇಶಗಳಲ್ಲಿ ಮಳೆಯಿಂದ ಜಲಾವೃತವಾಗಿವೆ. ಬೆಂಗಳೂರಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತ ಪ್ರಭಾವ ಹಾಗೂ ವಾಯುಭಾರ ಕುಸಿತ ಕಾರಣದಿಂದಾಗಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬಂಗಾಳಕೊಲ್ಲಿಯ ಪಶ್ಚಿಮ-ಮಧ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಅಥವಾ ಕಡಿಮೆ ತೀವ್ರತೆ ಎದುರಾಗಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಅವಧಿಗೆ ಮಳೆ ಆರ್ಭಟ ಇರಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ವಾಹನ ಸವಾರರ ಪರದಾಟ: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದು ಹಾಗೂ ರಸ್ತೆಗಳ ಗುಣಮಟ್ಟ ಕಳಪೆ ಆಗಿರುವುದು ವಾಹನ ಸಾವರರು ಹಾಗೂ ಬೆಂಗಳೂರಿಗರನ್ನು ಹೈರಾಣಾಗಿಸಿದೆ. ಬೆಂಗಳೂರಿನಲ್ಲಿ ಮಳೆ ಮುಂದುವರಿದಿದ್ದು ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ವಿವಿಧ ಭಾಗದಲ್ಲಿ ಪ್ರತಿ ದಿನ ಸಂಜೆಯ ವೇಳೆ ಮಳೆಯಿಂದಾಗಿ ಮೇಲ್ಸೇತುವೆ ಹಾಗೂ ಅಂಡರ್‌ಪಾಸ್ ಸೇರಿದಂತೆ ವಿವಿಧ ಭಾಗದಲ್ಲಿ ನೀರು ನಿಲ್ಲುತ್ತಿದ್ದು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಚರಂಡಿ ವ್ಯವಸ್ಥೆ ಹಾಳಾಗಿದೆ. ಬಹುತೇಕ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗಿದ್ದು. ಮಳೆಯಿಂದ ನೀರು ನಿಂತು ಅಪಘಾತಗಳು ಸಂಭವಿಸುತ್ತಿವೆ.
ಮುಖ್ಯವಾಗಿ ಬೆಂಗಳೂರಿನಲ್ಲಿ ಈ ಬಾರಿ ರಸ್ತೆ ಗುಂಡಿಗಳನ್ನು ಮುಂಚುವುದಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಯಾವುದೇ ಡೆಡ್‌ಲೈನ್ ನಿಗದಿ ಮಾಡಿಲ್ಲ. ಅಲ್ಲದೇ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಪ್ರಮುಖ ಸಭೆಗಳು ಸಹ ನಡೆದಿಲ್ಲ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು. ತಾಪಮಾನ ಇಳಿಕೆ ಆಗಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆ ಅವಧಿ: ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ಬೆಂಗಳೂರಿನ ವಿವಿಧ ಭಾಗದಲ್ಲಿ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಕನಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.











Click it and Unblock the Notifications