Heavy Rain: ಬೆಂಗಳೂರಿನಲ್ಲಿ ಮಳೆ ಅವಾಂತರ: ಮಳೆ ನಿರೀಕ್ಷೆ ಇಲ್ಲದೆ ರಸ್ತೆಗಿಳಿದ ವಾಹನ ಸವಾರರು ಹೈರಾಣ- ಟ್ರಾಫಿಕ್ ಜಾಮ್!
ಬೆಂಗಳೂರು ಅಕ್ಟೋಬರ್ 15: ನಿನ್ನೆಯಿಂದ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಹೆಚ್ಚಾಗಿದೆ. ನಿರಂತರ ಮಳೆಗೆ ಜನ ಕಂಗಾಲಾಗಿ ಹೋಗಿದ್ದಾರೆ. ಬೆಳಿಗ್ಗೆ ಎಲ್ಲಂದರಲ್ಲಿ ರಸ್ತೆಗಳು ಜಾಲಾವೃತಗೊಂಡು ರೈಲ್ವೆ ಅಂಡರ್ ಪಾಸ್‌ಗಳು, ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿ ಹೋಗಿವೆ. ಇಂದು ಬೆಳಗ್ಗೆ ಕೆಲಸಕ್ಕೆ ಹೋಗುವವರಿಗೆ ಭಾರೀ ಮಳೆ ಹೈರಾಣಾಗಿಸಿದೆ.
ಇನ್ನೂ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ಕಚೇರಿಗಳಿಗೆ ಹೋಗುವ ಉದ್ಯೋಗಿಗಳಿಗೆ ಮಳೆ ಸಾಕಷ್ಟು ಸಮಸ್ಯೆಯನ್ನುಂಟು ಮಾಡಿದೆ. ಮಳೆ ನಿರೀಕ್ಷೆ ಇಲ್ಲದೆ ರಸ್ತೆಗಿಳಿದವರ ಪಾಡು ಹೇಳತೀರದ್ದಾಗಿದೆ. ಕಳೆದ ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಇನ್ನೂ ಮೂರು ದಿನ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹೌದು... ಇಂದಿನಿಂದ ಅಕ್ಟೋಬರ್ 18ರವರೆಗೆ ಜಿಟಿ ಜಿಟಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಸುರಿಯುತ್ತಿರುವ ಭಾರೀ ಮಳೆಗೆ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಿವೆ.
ಕಳೆದ ದಿನದಿಂದ ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಹೀಗಾಗಿ ನಗರದ ಬಹುತೇಕ ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ನಗರದ ಕೋರಮಂಗಲ, ಯಶವಂತಪುರ, ಸೆಂಟ್ ಜಾನ್ಸ್, ಕೆಆರ್ ಮಾರ್ಕೆಟ್, ಗಾಂಧಿ ಬಜಾರ್, ಜಯನಗರ, ಮೈಸೂರು ರಸ್ತೆ, ಜಾಲಹಳ್ಳಿ ಕ್ರಾಸ್ ಇತರೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೆ ರಸ್ತೆ ಗುಂಡಿಗಳಲ್ಲಿ ಮಳೆ ನೀರು ತುಂಬಿ ವಾಹನ ಚಲಾಯಿಸಲಾಗದೆ ವಾಹನ ಸವಾರರು ಕೆಸರಿನಲ್ಲಿ ಬಿದ್ದಿರುವ ವರದಿಗಳು ಆಗಿವೆ.

ನಗರದ ಬಹುತೇಕ ಅಂಡರ್‌ಪಾಸ್‌ಗಳಲ್ಲಿ ಮಳೆ ನೀರು ತುಂಬಿಕೊಂಡಿದ್ದು ಪ್ಲೈಓವರ್‌ಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಇನ್ನೂ ಆಗ್ನೇಯ ಬೆಂಗಳೂರಿನ ಕ್ರೋಮಾ ರೈಲ್ವೆ ಅಂಡರ್‌ಪಾಸ್ ಸಂಪೂರ್ಣ ಜಲಾವೃತವಾಗಿದೆ.
ಕರಾವಳಿ, ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗಿಲಿದೆ. ಐಎಂಡಿ ಸೂಚನೆ ಪ್ರಕಾರ, ನಾಳೆ ಬೆಳಗ್ಗೆವರೆಗೂ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಾವಣಗೆರೆ, ರಾಮನಗರ, ಶಿವಮೊಗ್ಗ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಇನ್ನೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನೂ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications