Breaking; ಬೆಂಗಳೂರಲ್ಲಿ ಸಂಜೆ ಮಳೆ, ಜನರ ಪರದಾಟ
ಬೆಂಗಳೂರು, ಅಕ್ಟೋಬರ್ 10; ಉದ್ಯಾನ ನಗರಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗುತ್ತಿದೆ. ಕಚೇರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಜನರು ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸೋಮವಾರ ಸಂಜೆ 5.30ರ ಸುಮಾರಿಗೆ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಆರು ಗಂಟೆ ಸುಮಾರಿಗೆ ಮಳೆ ಆರಂಭವಾಗಿದೆ, ಗುಡುಗು ಸಹಿತ ಮಳೆ ಸುರಿಯುತ್ತಿದೆ. ಹಬ್ಬದ ರಜೆ ಮುಗಿಸಿ ಬೆಂಗಳೂರಿಗೆ ಬಂದಿದ್ದ ಜನರು ವಾರದ ಮೊದಲ ದಿನವೇ ಮಳೆಗೆ ಸಿಲುಕಿದ್ದಾರೆ.
ಜಯನಗರ, ಹನುಂತನಗರ, ಜೆ. ಪಿ. ನಗರ, ವಿಜಯನಗರ, ವಿದ್ಯಾಪೀಠ ವೃತ್ತ, ರಾಜಾಜಿನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮಳೆಯಾಗುತ್ತಿದೆ. ಭಾನುವಾರ ಸಂಜೆ ಸಹ ನಗರದಲ್ಲಿ ಸುಮಾರು ಮೂರು ತಾಸು ಮಳೆಯಾಗಿತ್ತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಫರಿತ್ಯದ ಪರಿಣಾಮ ಕರ್ನಾಟಕದಲ್ಲಿ ಇನ್ನೂ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ಐಎಂಡಿ ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗುತ್ತಿದೆ. ಇಂದು ಬೆಳಗ್ಗೆಯೇ ಶಿವಮೊಗ್ಗ ನಗರದಲ್ಲಿ ಮಳೆ ಸುರಿದಿತ್ತು.












Click it and Unblock the Notifications