Bengaluru Rains: ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಸುರಿಯಲಿದೆ ರಣಮಳೆ
ಬೆಂಗಳೂರು, ಜೂನ್, 24: ಜೂನ್ ಅಂತ್ಯದಲ್ಲಿ ಅಂದರೆ ಇದೇ ತಿಂಗಳಿನಲ್ಲಿ ದಾಖಲೆ ಮಟ್ಟದಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಭಾನುವಾರ ಬೆಳಗ್ಗೆ 8.30ರ ವೇಳೆಗೆ ನಗರದಲ್ಲಿ 203 ಮಿ.ಮೀ ಮಳೆ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಮುಂದಿನ ದಿನಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗುರುವಾರದವರೆಗೆ ವ್ಯಾಪಕವಾದ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಈ ವರ್ಷದ ಜೂನ್ 2ರಂದು 111.11 ಮಿ.ಮೀ. ಮಳೆ ಪಡೆದಿದ್ದು, ಇದು 133 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ಅಲ್ಲದೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಶನಿವಾರದವರೆಗೆ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಈಶಾನ್ಯ ಮತ್ತು ಪಕ್ಕದ ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿಲೋ ಮೀಟರ್ ನಡುವೆ ಇರುತ್ತದೆ ಎಂದು IMD ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ. ಅದರಲ್ಲೂ ದಕ್ಷಿಣ ಮಹಾರಾಷ್ಟ್ರ, ಉತ್ತರ ಕೇರಳ ಕರಾವಳಿಯಿಂದ ಹಾದು ಈ ಚಂಡಮಾರುತ ಹಾದು ಹೋಗದ್ದು, ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಆರೆಂಜ್ ಅಲರ್ಟ್ ಘೋಷಣೆ: ಗುರುವಾರದವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ, ಉತ್ತರ ಒಳನಾಡಿನ ಅನೇಕ ಸ್ಥಳಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಪಾಟೀಲ್ ಹೇಳಿದರು.
ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?: ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮಂಗಳವಾರದವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗಂಟೆಗೆ 35-45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಇನ್ನು ಕರ್ನಾಟಕದ ಕರಾವಳಿ ಭಾಗದಲ್ಲು ಗಂಟೆಗೆ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಹಿನ್ನೆಲೆ ಬುಧವಾರದವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.












Click it and Unblock the Notifications