Ramesh Jarkiholi: ಸಿಐಡಿ ತನಿಖೆಗೆ ಸಹಕರಿಸುವಂತೆ ರಮೇಶ್ ಜಾರಕಿಹೊಳಿಗೆ ಕೋರ್ಟ್ ಸೂಚನೆ
ಬೆಂಗಳೂರು, ಮಾರ್ಚ್ 16: ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರು ಪಾವತಿಸದ ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೆ ಸಹಕರಿಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚಿಸಿದೆ. ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ರಾಜ್ಯ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿ, 'ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅರ್ಜಿದಾರರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ. ಆದರೆ, ಅರ್ಜಿದಾರರು ಮಾತ್ರ ವಿಚಾರಣೆಗೆ ಹಾಜರಾಗುತ್ತಿಲ್ಲ. ಇದರಿಂದ ಪ್ರಕರಣದ ತನಿಖೆ ಸ್ಥಗಿತವಾಗಿದೆ' ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿಗಳು, ಸಿಐಡಿ ವಿಚಾರಣೆಗೆ ಹಾಜರಾಗಿ ತನಿಖೆ ಮುಂದುವರಿಯಲು ಸಹಕರಿಸುವಂತೆ ಅರ್ಜಿದಾರರಿಗೆ ಸೂಚಿಸಿತು. ಜೊತೆಗೆ, ಅರ್ಜಿದಾರರು ವಿಚಾರಣೆಗೆ ಹಾಜರಾದಲ್ಲಿ, ಅವರನ್ನು ಕೋರ್ಟ್ ಅನುಮತಿಯಿಲ್ಲದೆ ಬಂಧಿಸಬಾರದು ಎಂದು ಸಿಐಡಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು..?
ಬೆಳಗಾವಿಯ ಗೋಕಾಕ್‌ದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಿಂದ 2011ರಿಂದ 2017ರ ಅವಧಿಯಲ್ಲಿ 232.88 ಕೋಟಿ ರೂಪಾಯಿ ಸಾಲ ಪಡೆಯಲಾಗಿತ್ತು. ಸಕಾಲಕ್ಕೆ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಅಸಲು ಹಾಗೂ ಬಡ್ಡಿ ಸೇರಿ 439.7 ಕೋಟಿ ರೂಪಾಯಿ ಆಗಿದೆ. ಸಾಲ ಪಡೆಯುವ ವೇಳೆ ಸಕ್ಕರೆ ಕಾರ್ಖಾನೆಗೆ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಆದರೆ, ಸಾಲ ಬಾಕಿಯಿರುವ ಅವಧಿಯಲ್ಲೇ ರಮೇಶ್ ಜಾರಕಿಹೊಳಿ ನಿರ್ದೇಶಕರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಹುದ್ದೆಗಳಿಗೆ ಬೇರೆಯವರು ನೇಮಕಗೊಂಡಿದ್ದಾರೆ. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಹಾಗೂ ಸಾಲ ಮರು ಪಾವತಿಸದೆ ವಂಚಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರು ಜ.5ರಂದು ಬೆಂಗಳೂರಿನ ವಿ.ವಿ ಪುರಂ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಗೃಹ ಇಲಾಖೆ ಆದೇಶಿಸಿತ್ತು. ಇದರಿಂದ ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ಸಿಐಡಿ ತನಿಖೆ ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ 2024ರ ಫೆ.9ರಂದು ವಿಚಾರಣೆಗೆ ಬಂದಿದ್ದಾಗ ಸಿಐಡಿಯ ಡಿವೈಎಸ್‌ಪಿ ಹಾಜರಾಗಿ, ರಮೇಶ್ ಜಾರಕಿಹೊಳಿ ಪುತ್ರನ ಮದುವೆ ಫೆ.27ರಂದು ನಡೆಯಲಿದೆ. ಅಲ್ಲಿಯವರೆಗೆ ಅವರ ವಿರುದ್ಧದ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು.












Click it and Unblock the Notifications