ಇದ್ರೀಸ್ ಪಾಷಾ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿ ನಾಲ್ವರಿಗೆ ಜಾಮೀನು
ಬೆಂಗಳೂರು, ಮೇ 17: ಅಕ್ರಮ ಜಾನುವಾರು ಸಾಗಾಣೆ ಪ್ರಕರಣದ ಸಂದರ್ಭದಲ್ಲಿ ಇದ್ರೀಶ್ ಪಾಷಾ ಎಂಬುವವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಮಂಗಳವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು ಜತೆಗೆ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ನೇತೃತ್ವದ ರಜಾಕಾಲದ ಏಕಸದಸ್ಯಪೀಠವು ಆದೇಶ ಮಾಡಿದೆ. ಆರೋಪಿಗಳಾದ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ ಎನ್, ಪಿ ಲಿಂಗಪ್ಪಗೆ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರು "ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದ್ದು, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗಲೇಬೇಕಿತ್ತು" ಎಂಮದು ವಾದಿಸಿದ್ದರು.
"ಅಲ್ಲದೆ, ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ಏನೇನು ವಶಪಡಿಸಿಕೊಳ್ಳಬೇಕು ಎಲ್ಲವೂ ಪೂರ್ಣಗೊಂಡಿದೆ. ಇನ್ನೂ ಆರೋಪ ಪಟ್ಟಿ ಸಲ್ಲಿಕೆಯಾಗಿ, ವಿಚಾರಣೆ ನಡೆಯಬೇಕಿದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು" ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಏನಿದು ಪ್ರಕರಣ?: ಮಾರ್ಚ್ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್ ಠಾಣೆ ಸಮೀಪ ಅಡ್ಡಗಟ್ಟಿದ್ದ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಏಪ್ರಿಲ್ 1ರಂದು ಬೆಳಿಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಸಹಚರರಿಂದ ಹಲ್ಲೆ ನಡೆಸಿದ್ದಾರೆ ಎಂದು ಇದ್ರೀಶ್ ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು. ಇದನ್ನು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 324, 341, 504, 506 ಜೊತೆಗೆ 34 ಅಡಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಏಪ್ರಿಲ್ 5 ರಂದು ಆರೋಪಿಗಳನ್ನು ರಾಜಸ್ಥಾನದ ಬನ್ಸ್ವಾರ ಬಳಿ ರಾಮನಗರ ಪೊಲೀಸರು ಬಂಧಿಸಿದ್ದರು.












Click it and Unblock the Notifications