ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ: ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು, ಜನವರಿ 31: ಘನ ತ್ಯಾಜ್ಯ ವಿಲೇವಾರಿಯನ್ನು ಸೂಕ್ತವಾಗಿ ನಿರ್ವಹಿಸದೇ ಹೋದರೆ ನಗರದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ವಿಷೇಧ ಹೇರಬೇಕಾಗುತ್ತದೆ ಎಂದು ಹೈಕೋರ್ಟ್ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೇ ಇರುವ ಬಗ್ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಪೀಠವು ಮೇಲಿನಂತೆ ಎಚ್ಚರಿಕೆ ನೀಡಿದೆ.
ಬಿಬಿಎಂಪಿ ಕಾರ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, 'ನಗರ ವ್ಯಾಪ್ತಿಯಲ್ಲಿ ಪ್ರತಿದಿನ 4200 ಟನ್ ಕಸ ಸಂಗ್ರಹವಾಗುತ್ತಿದ್ದು, ಅದರಲ್ಲಿ 1500 ಟನ್ ಮಾತ್ರವೇ ಸಂಸ್ಕರಣೆಗೆ ಒಳಗಾಗುತ್ತಿದೆ. ಉಳಿದ 2700 ಟನ್ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯಲಾಗುತ್ತಿದೆ' ಎಂದು ಹೈಕೋರ್ಟ್ ಹೇಳಿದೆ.

'ಘನ ತ್ಯಾಜ್ಯ ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ಬಿಬಿಎಂಪಿ ಗೆ ಸೂಕ್ತ ನೆರವು ನೀಡುವಂತೆ ಈ ಹಿಂದೆಯೇ ಸೂಚಿಸಲಾಗಿತ್ತು, ಆದರೆ ಹಾಗೇನೂ ಆದಂತೆ ಕಾಣುತ್ತಿಲ್ಲ' ಎಂದು ಸರ್ಕಾರದ ಮೇಲೂ ಅಸಮಾಧಾನ ವ್ಯಕ್ತಪಡಿಸಿದೆ ಹೈಕೋರ್ಟ್.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ ಪರ ವಕೀಲರು 'ಬಿಬಿಎಂಪಿ ಗೆ ಸೂಕ್ತ ನೆರವು ನೀಡಲಾಗುವುದು ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು' ಎಂದು ಮನವಿ ಮಾಡಿದರು.
ಮನವಿಗೆ ಒಪ್ಪಿದ ಹೈಕೋರ್ಟ್, ಮುಂದಿನ ವಿಚಾರಣೆ ವೇಳೆಗೆ ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ, ಹೊಸ ಕಟ್ಟಡಗಳ ನಿರ್ಮಾಣದ ಮೇಲೆ ನಿರ್ಬಂಧ ಹೇರಲಾಗುವುದು' ಎಂದರು.











Click it and Unblock the Notifications