ಬೆಂಗಳೂರಿನಲ್ಲಿ ಫ್ಲೆಕ್ಸ್ ಹಾವಳಿ, ಹೈಕೋರ್ಟ್ ಗರಂ
ಬೆಂಗಳೂರು, ಅ.14 : ಬೆಂಗಳೂರು ನಗರದ ಅಂದವನ್ನು ಹಾಳು ಮಾಡುತ್ತಿರುವ ಬ್ಯಾನರ್, ಬಂಟಿಗ್ಸ್, ಫ್ಲೆಕ್ಸ್ ಸೇರಿದಂತೆ ಪ್ರಚಾರ ಸಾಮಾಗ್ರಿಗಳ ಹಾವಳಿಯನ್ನು ತಡೆಗಟ್ಟಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಮಸ್ಯೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಇದೆ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು ನಗರದ ಅಂದಗೆಡಿಸುತ್ತಿರುವ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ತೆರವು ಕುರಿತು ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರ ಪೀಠ ಸೋಮವಾರ ಅರ್ಜಿಯ ವಿಚಾರಣೆಯನ್ನು ಮುಂದುವರೆಸಿ, ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇರುವುದರಿಂದ ಪ್ರಧಾನಿಯವರ ಸ್ವಚ್ಛ ಭಾರತದಂತಹ ಯೋಜನೆಗಳು ಕುರೂಪಗೊಳ್ಳುತ್ತವೆ ಎಂದು ಅಭಿಪ್ರಾಯಪಟ್ಟಿತು. [ಬ್ಯಾನರ್ ಹಾಕಲು ಬಂತು ಮಾರ್ಗಸೂಚಿ]
ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎ.ಪೊನ್ನಣ್ಣ ಅವರು ನ್ಯಾಯಾಲಯಕ್ಕೆ ವಿವರಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿನ ಪ್ರಚಾರ ಸಾಮಗ್ರಿ ಹಾವಳಿ ತಡೆಯುವುದಕ್ಕಾಗಿ ಈಗಾಗಲೇ ಸರ್ಕಾರ ನಿಯಮಾವಳಿ ರೂಪಿಸಲು ಸಿದ್ಧತೆ ನಡೆಸಿದೆ. ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ-1981ರ ಅನುಸಾರ ನಗರಾಭಿವೃದ್ಧಿ ಇಲಾಖೆ ಮುಖ್ಯಮಂತ್ರಿಗಳಿಗೆ ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದರು.
ವಾರಕ್ಕೆ, ಎರಡು ವಾರಕ್ಕೆ ಅಥವ ತಿಂಗಳಿಗೊಮ್ಮೆ ಅಧಿಕಾರಿಗಳು ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಿರುವ ಕುರಿತು ಖುದ್ದಾಗಿ ಪರಿಶೀಲನೆ ನಡೆಸಬೇಕು. ಫ್ಲೆಕ್ಸ್ ಸಮಸ್ಯೆ ಕೇವಲ ಬೆಂಗಳೂರಿಗೆ ಸೀಮಿತವಲ್ಲ. ಇದು ರಾಜ್ಯದ ಜಿಲ್ಲಾ ಕೇಂದ್ರಗಳು ಮತ್ತು ನಗರ ಪ್ರದೇಶಗಳಲ್ಲೂ ಇದೆ. ಈ ಬಗ್ಗೆ ರಚಿಸಿದ ಕಾನೂನುಗಳನ್ನು ಅಧಿಕಾರಿಗಳು ಅನುಷ್ಠಾನಕ್ಕೆ ತರುತ್ತಿಲ್ಲ ಎಂದು ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿತು.
ಈ ಕುರಿತು ಅರ್ಜಿಯ ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿರುವ ಕೋರ್ಟ್ ಮುಂದಿನ ವಿಚಾರಣೆ ವೇಳೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರ ನೀಡುವಂತೆ ಬಿಬಿಎಂಪಿ ಮತ್ತು ಸರ್ಕಾರಕ್ಕೆ ಸೂಚನೆ ನೀಡಿತು.