ಅಂಬೇಡ್ಕರ್‌ಗೆ ಅವಮಾನ: ಜೈನ್ ವಿವಿಯ 7 ವಿದ್ಯಾರ್ಥಿಗಳ ಬಂಧನ
ಜೈನ್ ವಿವಿಯ ಐದನೇ ಸೆಮಿಸ್ಟರ್ ಬಿಬಿಎ ವಿದ್ಯಾರ್ಥಿಗಳಾದ ವಿದ್ಯಾರ್ಥಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ 13: ಜೈನ್ ವಿಶ್ವವಿದ್ಯಾನಿಲಯ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದ ಏಳು ವಿದ್ಯಾರ್ಥಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಜೈನ್ ವಿವಿಯ ಐದನೇ ಸೆಮಿಸ್ಟರ್ ಬಿಬಿಎ ವಿದ್ಯಾರ್ಥಿಗಳಾದ ವಿದ್ಯಾರ್ಥಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿವಿಯ ಪ್ರಾಂಶುಪಾಲರು ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದಲ್ಲದೇ ಕಾಲೇಜು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಹಲವು ದೂರುಗಳು ದಾಖಲಾಗಿವೆ.
ರಾಜ್ಯಾದ್ಯಂತ ವಿದ್ಯಾರ್ಥಿಗಳು ಮತ್ತು ಜೈನ್ ವಿಶ್ವವಿದ್ಯಾಲಯದ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದು, ಹಲವಾರು ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಫೆಬ್ರವರಿ 8 ರಂದು, ಜೈನ್ ವಿಶ್ವವಿದ್ಯಾನಿಲಯವು ಆಯೋಜಿಸಿದ್ದ ಫೆಸ್ಟ್‌ನ ಭಾಗವಾಗಿ ವಿದ್ಯಾರ್ಥಿಗಳ ಗುಂಪು ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸ್ಕಿಟ್ ಅನ್ನು ಪ್ರದರ್ಶಿಸಿತು.

ಈ ಸ್ಕಿಟ್‌ನಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಲಾಗಿತ್ತು. ಅಂಬೇಡ್ಕರ್ ಅವರನ್ನು ಅವಮಾನಿಸಿದ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ವಿಷಯ ಬೆಳಕಿಗೆ ಬಂದಿತ್ತು. ವಿಶ್ವವಿದ್ಯಾನಿಲಯವು ಸ್ಕಿಟ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದು, ಈ ಬಗ್ಗೆ ತನಿಖೆ ನಡೆಸಲು ಶಿಸ್ತು ಸಮಿತಿಯನ್ನು ಸಹ ರಚಿಸಿದೆ.
ಕಾರ್ಯಕ್ರಮದ ಪ್ರಾಂಶುಪಾಲರು, ಡೀನ್, ಸಂಘಟಕರು, ಕಿರುನಾಟಕ ಪ್ರದರ್ಶಿಸಿದ ವಿದ್ಯಾರ್ಥಿಗಳು ಹಾಗೂ ಲೇಖಕರ ವಿರುದ್ಧ ಸಮಾಜ ಕಲ್ಯಾಣ ಇಲಾಖೆಯಿಂದ ದೂರು ದಾಖಲಿಸಲಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಮಧುಸೂದನ್ ತಿಳಿಸಿದರು. ಈ ಸಂಬಂಧ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಿದ್ದಾಪುರ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸ್ಕಿಟ್ ವಿವಾದದ ಕೇಂದ್ರವಾಗಿದೆ. 20ಕ್ಕೂ ಹೆಚ್ಚು ದಲಿತ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಸ್ಕಿಟ್ ಕುರಿತು ಕೂಲಂಕುಷ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ ಮತ್ತು ಜನರು ಅವರನ್ನು ಅವಮಾನಿಸಿದರೆ ಅದನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದರು.












Click it and Unblock the Notifications