ಬೆಂಗಳೂರಿನ ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ, ತೆರವು ಕಾರ್ಯಾಚರಣೆ: ಮಹೇಶ್ವರ್ ರಾವ್
ಬೆಂಗಳೂರು: ಬೆಂಗಳೂರಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮುಂದಾಗಿವೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿ, ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ನಡೆಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಿದ ನಂತರ ನಿಯಮಾನುಸಾರ ತೆರವು ಆದೇಶಗಳನ್ನು ಹೊರಡಿಸಲು ಸೂಚಿಸಿದ್ದಾರೆ. ಅನಧಿಕೃತ ಕಟ್ಟಡಗಳ ಪರಿಶೀಲನೆ ನಡೆಸಿ, ಹೆಚ್ಚುವರಿ ಮಹಡಿಗಳನ್ನು ನಿರ್ಮಿಸಿದ್ದಲ್ಲಿ ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳನ್ನು ಒಳಗೊಂಡ ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ.

ಕಟ್ಟಡ ನಕ್ಷೆ ಮಂಜೂರಾತಿ ಪಡೆಯದಿದ್ದರೆ ಕ್ರಮ
ಇನ್ನು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಾಣವಾಗುತ್ತಿರುವ ಕಟ್ಟಡಗಳಿಗೆ ಸೀಲ್ ಮಾಡಿ, ಕಾಮಗಾರಿ ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಟ್ಟಡ ನಿರ್ಮಾಣದ ಪ್ರಾರಂಭದಲ್ಲೇ ನಿಯಮ ಉಲ್ಲಂಘನೆ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಆರಂಭದಲ್ಲೇ ಶಿಸ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಧಿಕೃತ ಕಟ್ಟಡ ನಿರ್ಮಾಣವನ್ನು ತಡೆಯಬೇಕೆಂದು ತಿಳಿಸಿದರು. ಜೊತೆಗೆ ರಸ್ತೆ ಬದಿಯಲ್ಲಿ ಕಟ್ಟಡ ನಿರ್ಮಾಣದಿಂದ ಉಂಟಾಗುವ ಭಗ್ನಾವಶೇಷಗಳನ್ನು ಕೂಡಲೇ ತೆರವುಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹಕ್ಕೆ ಆದ್ಯತೆ
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳು ಹಾಗೂ 21 ಉಪವಿಭಾಗಗಳಿದ್ದು, ಸುಮಾರು 6 ಲಕ್ಷ ಆಸ್ತಿಗಳು ಒಳಗೊಂಡಿವೆ. ಈ ಪೈಕಿ 1,281 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದ್ದು, ಇದುವರೆಗೆ 733 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ. ಉಳಿದ ಬಾಕಿ ಆಸ್ತಿ ತೆರಿಗೆಯನ್ನು ನಿಗದಿತ ಕಾಲಮಿತಿಯೊಳಗೆ ಸಂಗ್ರಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ಆಸ್ತಿ ಪರಿಷ್ಕರಣೆ ಹಾಗೂ ಸುಸ್ತಿದಾರರಿಂದ ಬಾಕಿ ಆಸ್ತಿ ತೆರಿಗೆಯನ್ನು ತ್ವರಿತಗತಿಯಲ್ಲಿ ಸಂಗ್ರಹಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮನೆಗಳ ಮುಂದೆ ಬಾಕಿ ಆಸ್ತಿ ತೆರಿಗೆ ಪಾವತಿಗೆ ನೋಟಿಸ್‌ಗಳನ್ನು ಅಂಟಿಸುವ ಕಾರ್ಯ ನಡೆಯುತ್ತಿದ್ದು, ಕರ್ತವ್ಯ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ವಾಣಿಜ್ಯ ಸ್ವತ್ತುಗಳಿರುವ ಪ್ರದೇಶಗಳಲ್ಲಿ ಎಲ್ಲಾ ಕಂದಾಯ ಅಧಿಕಾರಿಗಳು ಸೇರಿ ದಿನಕ್ಕೆ 50 ರಿಂದ 80 ಆಸ್ತಿಗಳ ಪರಿಷ್ಕರಣೆ ನಡೆಸಲಾಗುತ್ತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಸಲ್ಲಿಸಿದ ಅರ್ಜಿಗಳನ್ನೂ ಪರಿಶೀಲಿಸಿ ಎ-ಖಾತಾ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ನೀಡಿದ ಇತರೆ ಪ್ರಮುಖ ನಿರ್ದೇಶನಗಳು
1. ಎಜಿಎಂಗಳಿಗೆ ಆಯಾ ವಾರ್ಡ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳ ಮೇಲ್ವಿಚಾರಣೆಗೆ ಸೂಚನೆ
2. ಡಾಂಬರೀಕರಣಗೊಂಡ ರಸ್ತೆಗಳಲ್ಲಿ ಟಿವಿಸಿಸಿ ಮೂಲಕ ಗುಣಮಟ್ಟ ಪರಿಶೀಲನೆ ನಡೆಸಲು ಸೂಚನೆ
3. ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚುವಂತೆ ಸೂಚನೆ
4. ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತೆರವುಗೊಳಿಸಲು ಸೂಚನೆ
5. ಟ್ರಾನ್ಸ್‌ಫರ್ ಸ್ಟೇಷನ್‌ಗಳಿಗೆ ಜಾಗ ಗುರುತಿಸಲು ಸೂಚನೆ












Click it and Unblock the Notifications