ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: 'ನಾ ನಾಯಕಿ' ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ ಸಾಧ್ಯತೆ
ಬೆಂಗಳೂರು, ಜ. 04: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಇದರ ಭಾಗವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ನಾ ನಾಯಕಿ' ಸಮಾವೇಶವನ್ನು ನಡೆಸಲಿದೆ. ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸುವ ಸಾಧ್ಯತೆಯಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಸಮಾವೇಶಕ್ಕೆ ಅತಿಥಿಯಾಗಿ ಆಹ್ವಾನಿಸಲಾಗಿದೆ.
ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು 86 ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಕನಿಷ್ಠ 30 ಮಂದಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದ್ದಾರೆ.

ನಾ ನಾಯಕಿ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಅವರಿಗೆ ಮತ್ತೊಂದು ಕಾರ್ಯಕ್ರಮ ನಿಗದಿಯಾಗಿದೆ. ಹೀಗಾಗಿ ಅವರು ಜನವರಿ 8 ಅಥವಾ 9 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಸಮಾವೇಶದ ಜೊತೆಗೆ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣ ಆಗಿರುವ ಕಾಂಗ್ರೆಸ್ ಭವನದ ಉದ್ಘಾಟನೆಯನ್ನು ಪ್ರಿಯಾಂಕಾ ಗಾಂಧಿ ಅವರಿಂದ ನೆರವೇರಿಸುವ ಚಿಂತನೆ ರಾಜ್ಯ ಕಾಂಗ್ರೆಸ್ ನಾಯಕರದ್ದಾಗಿದೆ.
ಇನ್ನು, ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸುತ್ತಿರುವ ಬೆನ್ನಲ್ಲೇ, ಸಮುದಾಯಗಳನ್ನು ಓಲೈಸಲು ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

"ಡಬಲ್ ಎಂಜಿನ್ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಜನರು, ವಿಶೇಷವಾಗಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದವರು ಸಂಕಷ್ಟದಲ್ಲಿದ್ದಾರೆ. ನೋಟು ಅಮಾನ್ಯೀಕರಣದ ನಂತರ ಜನರು ಖರೀದಿಸುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ" ಎಂದು ತುಮಕೂರಿನಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದರು.
"ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳು ಕ್ರಮೇಣ ಪಕ್ಷದಿಂದ ದೂರ ಸರಿದ ಕಾರಣ ಕಾಂಗ್ರೆಸ್ ಹೈಕಮಾಂಡ್ ಸಂಕಷ್ಟದಲ್ಲಿದೆ ಎಂದು ಅರಿತುಕೊಂಡಿದೆ. ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಸಮುದಾಯದ ಸದಸ್ಯರು ಪಕ್ಷದೊಂದಿಗಿದ್ದಾರೆ ಎಂಬ ಸಂದೇಶವನ್ನು ಚಿತ್ರದುರ್ಗ ಸಮಾವೇಶವು ರವಾನಿಸುತ್ತದೆ" ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.












Click it and Unblock the Notifications