Pulikeshi Nagara: ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಬಿಎಸ್‌ಪಿ ಪಕ್ಷ ಸೇರ್ಪಡೆಯಾದ ಅಖಂಡ ಶ್ರೀನಿವಾಸಮೂರ್ತಿ
ಬೇಸಿಗೆಯ ಬಿಸಿಲು ಏರಿಕೆಯಾಗುತ್ತಿರುವಂತೆಯೇ 2023ರ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಸಿದ ನಂತರ ಅಭ್ಯರ್ಥಿಗಳು ಮತದಾರರ ಬಳಿ ದೌಡಾಯಿಸುತ್ತಿದ್ದಾರೆ. ಕೆಲವು ಅಭ್ಯರ್ಥಿಗಳು ಆ ಪಕ್ಷದಿಂದ ಈ ಪಕ್ಷಕ್ಕೆ, ಈ ಪಕ್ಷದಿಂದ ಆ ಪಕ್ಷಕ್ಕೆ ಜಂಪಿಂಗ್ ಮಾಡುತ್ತಿದ್ದಾರೆ.
ಇದೇ ವೇಳೆ 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಪುಲಿಕೇಶಿ ನಗರ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ತೊರೆದು ಬಿಎಸ್‌ಪಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂದರೆ, 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಬದಲಾಗಿ ಎ.ಸಿ. ಶ್ರೀನಿವಾಸ್ ಎಂಬುವವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
2016ರಲ್ಲಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ವಲಸೆ ಬಂದ ವಲಸೆ ಬಂದ 7 ಶಾಸಕರಲ್ಲಿ ಪುಲಿಕೇಶಿ ನಗರದ ಅಖಂಡ ಶ್ರೀನಿವಾಸಮೂರ್ತಿ ಕೂಡ ಒಬ್ಬರಾಗಿದ್ದು, 2018ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಅಖಂಡ ಶ್ರೀನಿವಾಸಮೂರ್ತಿಗೆ ಪುಲಿಕೇಶಿ ನಗರ ಟಿಕೆಟ್ ನೀಡಿದ್ದು, ಮೂಲ ಕಾಂಗ್ರೆಸ್ಸಿಗನಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಹಿಸಿಕೊಳ್ಳಲಾಗಲಿಲ್ಲ. ನಂತರ 2020ರಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಕೆಲವು ಮುಸ್ಲಿಂ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದರು. ಇದರಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಇದರಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದರು.
ತಮ್ಮದೆ ಪಕ್ಷದ ದಲಿತ ಶಾಸಕನ ಮನೆಗೆ ಬೆಂಕಿ ಇಟ್ಟ ರೂವಾರಿಯಾದ ಸಂಪತ್ ರಾಜ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಸಹ ಮಾಡಲಿಲ್ಲ. ಏಕೆಂದರೆ, ಸಂಪತ್ ರಾಜ್ ಅವರು ಈಗಿನ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿದ್ದಾರೆ. ಅಲ್ಲದೇ, ಸಂಪತ್ ರಾಜ್ ಕೂಡ ಪುಲಿಕೇಶಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಇನ್ನು ಈ ಬಾರಿ ಅಖಂಡ ಶ್ರೀನಿವಾಸಮೂರ್ತಿ ಮತ್ತು ಸಂಪತ್ ರಾಜ್ ನಡುವೆ ಪುಲಿಕೇಶಿ ನಗರ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಆದರೆ ಇಬ್ಬರಿಗೂ ಟಿಕೆಟ್ ನಿರಾಕರಿಸಿ, ಕೆಪಿಸಿಸಿ ಮಾಜಿ ಅಧ್ಯಕ್ಷ ಜಿ. ಪರಮೇಶ್ವರ್ ಅವರ ಆಪ್ತನಾಗಿರುವ ಎ.ಸಿ. ಶ್ರೀನಿವಾಸ್‌ಗೆ ಟಿಕೆಟ್ ನೀಡಲಾಗಿದೆ. ಇಬ್ಬರ ಜಗಳದಲ್ಲಿ ಮೂರನೇಯವರು ಲಾಭ ಪಡೆದಂತಾಗಿದೆ.
2023ರ ಚುನಾವಣೆಗಾಗಿ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಟಿಕೆಟ್ ಕೊಡಿಸುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೈಚೆಲ್ಲಿದರು. ಜೆಡಿಎಸ್‌ನಿಂದ ತಮ್ಮ ಜೊತೆ ಕರೆದುಕೊಂಡು ಪಕ್ಕದ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಒತ್ತಡ ಹಾಕಿದರೂ ಕಾಂಗ್ರೆಸ್ ಟಿಕೆಟ್ ನೀಡಲಿಲ್ಲ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮತ್ತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯವಾಗಿದೆ. ಇನ್ನು ನಾಮಪತ್ರ ವಾಪಸ್ ಪಡೆಯಲು ಇಂದು (ಏಪ್ರಿಲ್ 24) ಕೊನೆಯ ದಿನಾವಾಗಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications