Breaking: ನಡ್ಡಾ ಸೂಚನೆಯಂತೆ ರಾಜ್ಯದ 6 ಕಡೆ ರ್‍ಯಾಲಿ; ಸಿಎಂ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 29: ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಆರು ಕಡೆಗಳಲ್ಲಿ ರ್‍ಯಾಲಿ ನಡೆಸಲು ಬಿಜೆಪಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಿದ್ದು , ಆರು ಕಡೆ ದೊಡ್ಡ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದೆಹಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ ಎಂದರು.
ನಮ್ಮ ಪ್ರಧಾನಮಂತ್ರಿಗಳು ಸೆಪ್ಟೆಂಬರ್ 02 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ಇನ್ನೊಂದು ಸಭೆಯನ್ನು ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೆಪ್ಟೆಂಬರ್ 08 ರಂದು ದೊಡ್ಡ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ. ಸಚಿವ ಡಾ. ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್‌ಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ವೇಳೆ 2020 ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ , ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22 ನೆ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಹಾಗೂ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಾಜನೀಶ್ ಉಪಸ್ಥಿತರಿದ್ದರು.
ಇನ್ನು, ರಾಮನಗರ ಜಿಲ್ಲೆಯಲ್ಲಿ ಮಳೆಯಿಂದ ಭಾರಿ ಹಾನಿಯುಂಟಾಗಿದ್ದು, ಪರಿಸ್ಥಿತಿ ಅವಲೋಕಿಸಲು ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿಗಳಲ್ಲಿನ ಮಳೆ ಹಾನಿ ವೀಕ್ಷಿಸಲಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
"ರಾಮನಗರ, ಚನ್ನಪಟ್ಟಣದಲ್ಲಿ ಮಳೆಯಿಂದ ಉಂಟಾಗಿರುವ ದುಸ್ಥಿತಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿದ್ದೇನೆ. ಅವರು ಇನ್ನು ಸ್ವಲ್ಪ ಹೊತ್ತಿನಲ್ಲಿ ಜಿಲ್ಲೆಗೆ ಭೇಟಿ ನೀಡಿ, ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.












Click it and Unblock the Notifications