Breaking: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕಾರಣ ಬಿಚ್ಚಿಟ್ಟ ಸಿ ಟಿ ರವಿ
ಬೆಂಗಳೂರು, ಏಪ್ರಿಲ್ 04: ರಾಜ್ಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ನಡೆದಿದೆ. ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನಯ್ ಸೋಮಯ್ಯ (39) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗೆ 4.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿನಯ್ ಸೋಮಯ್ಯ ಅವರಿಗೆ ಮದುವೆ ಆಗಿತ್ತು, ಒಂದು ಮಗು ಕೂಡ ಇದೆ.ವಿನಯ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಶುರುವಾಗಿವೆ.

ವಿನಯ್ ಸೋಮಯ್ಯ ಅವರು 'ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು' ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗಿಗಳ ದ್ವೇಷದ ರಾಜಕಾರಣಕ್ಕೆ ಅಂತ್ಯ ಇಲ್ಲವೇ? : ಸಿ ಟಿ ರವಿ
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ಕುರಿತು ಸಿ ಟಿ ರವಿ ಕಿಡಿಕಾರಿದ್ದು, ಕಾಂಗಿಗಳ ದ್ವೇಷದ ರಾಜಕಾರಣಕ್ಕೆ ಅಂತ್ಯ ಇಲ್ಲವೇ? ಕೊಡಗಿನ ನಮ್ಮ ಕಾರ್ಯಕರ್ತನ ಮೇಲೆ ರಾಜಕೀಯ ಅಧಿಕಾರ ಬಳಸಿ ಕಿರುಕುಳ ನೀಡುತಿದ್ದ ಕಾಂಗ್ರೆಸ್ ಪಕ್ಷದ ನಡೆ ಅಕ್ಷಮ್ಯ . ಅಧಿಕಾರದ ಮದ ಏರಿದ ಕಾಂಗ್ರೆಸ್ ನಾಯಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಬಿಜೆಪಿ ಕಾರ್ಯಕರ್ತ ವಿನಯ್ ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ ಅವರು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಆತ್ಯಹತ್ಯೆ ಕುರಿತು ಬಿ ವೈ ವಿಜಯೇಂದ್ರ ಕಿಡಿಕಾರಿದ್ದಯ, ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಲಂಕುಶವಾಗಿ ಪಾರದರ್ಶಕ ತನಿಖೆ ನಡೆದು ಸತ್ಯ ಹೊರಬರಬೇಕಿದೆ ಎಂದು ಹೇಳಿದರು.
ರಾಜಕೀಯ ಕಾರಣಗಳು ಹಾಗೂ ಒತ್ತಡಗಳ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ನಿಂದಾಗಿ ವಿನಯ್ ಆತ್ಮಹತ್ಯೆಗೆ ಶರಣಾಗಿರಬಹುದಾದ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಿರುಕುಳ, ಒತ್ತಡ, ದೌರ್ಜನ್ಯಗಳು ನಡೆಯುತ್ತಿದ್ದು ಈ ನಿಟ್ಟಿನಲ್ಲಿ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯು ಅತ್ಯಂತ ಪಾರದರ್ಶಕವಾಗಿ ನಡೆಯಬೇಕೆಂದು ಬಿಜೆಪಿ ಆಗ್ರಹಪಡಿಸುತ್ತದೆ.
ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಮಾನಸಿಕ ಒತ್ತಡ ಉಂಟಾಗಲು ಕಾರಣರಾದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವೆ. ಮೃತ ಕಾರ್ಯಕರ್ತ ವಿನಯ್ ಅವರ ನಿಧನದ ನೋವಿನಲ್ಲಿರುವ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ವಿನಯ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.












Click it and Unblock the Notifications