BREAKING: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಬೆಂಗಳೂರು ಪೊಲೀಸರ ವಶಕ್ಕೆ!
ಬೆಂಗಳೂರು, ಜು. 12: ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರು ಪಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಹೆಬ್ಬಾಳದ ಬಾಪ್ಟಿಸ್ಟ್ ಆಸ್ಪತ್ರೆಯಿಂದ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದವರೆಗೆ ರಾಜ್ಯ ಯುವ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿತ್ತು. ಆದರೆ ಸೈಕಲ್ ಜಾಥಾ ನಡೆಸದಂತೆ ಪೊಲೀಸರು ತಡೆದರು ಎಂದು ಯುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಆರೋಪಿಸಿದ್ದಾರೆ.
"ಸೈಕಲ್ ಜಾಥಾ ನಡೆಸಲು ಪೊಲೀಸರು ಮೊದಲು ಅನುಮತಿ ನೀಡಿದ್ದರು. ಆದರೂ ಸಹ ನಮ್ಮನ್ನು ತಡೆದಿದ್ದಾರೆ" ಎಂದು ಜಾಥದಲ್ಲಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಆರೋಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಬಿ.ವಿ. ಶ್ರೀನಿವಾಸ್ ಸೇರಿದಂತೆ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಅನಿಲ್ ಕುಮಾರ್ ಯಾದವ್, ಸುರಭಿ ದ್ವಿವೇದಿ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸೈಕಲ್ ಜಾಥಾ ಹಮ್ಮಿಕೊಂಡಿತ್ತು.












Click it and Unblock the Notifications