Breaking: ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಒಪ್ಪಿಗೆ, ರಾತ್ರಿ ಕರ್ಫ್ಯೂ ಹಿಂತೆಗೆತ
ಬೆಂಗಳೂರು, ಜನವರಿ 29: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್- 19ಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆದಿದ್ದು, ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಒಪ್ಪಿಗೆ ನೀಡಲಾಗಿದೆ.
ತಜ್ಞರ ಸಭೆಯ ನಂತರ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಜ.31ರಿಂದ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಹಿಂತೆಗೆದುಕೊಳ್ಳಲಾಗುವುದು. ಇನ್ನು ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಭರ್ತಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ದೇವಸ್ಥಾನಗಳಲ್ಲಿ ಪೂಜೆಗೆ ಮಾತ್ರ ಅವಕಾಶ ನೀಡಲಾಗಿದೆ. ಇದೇ ವೇಳೆ ಮಹಾರಾಷ್ಟ್ರ, ಗೋವಾ, ಕೇರಳದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯ ನೆಗೆಟಿವ್ ವರದಿ ತರಬೇಕು. ಪಬ್, ರೆಸ್ಟೋರಂಟ್, ಹೋಟೆಲ್‌ಗಳಲ್ಲಿ ಶೇ.50ರಷ್ಟು ಭರ್ತಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್
ಕಳೆದ ಕೆಲವು ವಾರಗಳ ಹಿಂದೆ ಕೊರೊನಾ ಸೋಂಕು ಪ್ರಕರಣಗಳ ಹೆಚ್ಚಳದಿಂದ ಬೆಂಗಳೂರಿನಲ್ಲಿ 1-9ನೇ ತರಗತಿ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ಶಾಲೆ ಆರಂಭಕ್ಕೆ ತಜ್ಞರು ಮತ್ತು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು, ಸೋಮವಾರದಿಂದ ಎಲ್ಲಾ ತರಗತಿಗಳು ಪ್ರಾರಂಭ ಆಗುತ್ತವೆ. ಆದರೆ ಕೋವಿಡ್ ನಿಯಮಾವಳಿ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ರಾಜ್ಯದ ಇತರೆ ಶಾಲೆಗಳಿಗೆ ಇರುವ ಮಾರ್ಗಸೂಚಿಗಳು ಬೆಂಗಳೂರಿನ ಶಾಲೆಗಳಿಗೂ ಇರುತ್ತವೆ. ಯಾವುದಾದರೂ ವಿದ್ಯಾರ್ಥಿಗೆ ಪಾಸಿಟಿವ್ ಬಂದರೆ ಆ ತರಗತಿ ಮಾತ್ರ ಮುಚ್ಚುತ್ತದೆ. ತರಗತಿಯ ಎಲ್ಲಾ ಮಕ್ಕಳಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಆ ತರಗತಿ ಎಷ್ಟು ದಿನ ಮುಚ್ಚಬೇಕು ಎಂದು ಸಂಬಂಧಿಸಿದ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಉಳಿದಂತೆ ಶಾಲೆ ತೆರೆದಿರುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯಂತೆ ನಿರ್ಧಾರ ಕೈಗೊಳ್ಳಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ ಸಚಿವ ಬಿ.ಸಿ. ನಾಗೇಶ್, ಶೇ.100ರಷ್ಟು ಮಕ್ಕಳು ಶಾಲೆಗೆ ಹಾಜರಾಗಲು ಅನುಮತಿ ನೀಡಲಾಗಿದೆ ಎಂದರು.
ಇನ್ನು ಮಾಧ್ಯಮದೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನೈಟ್ ಕರ್ಫ್ಯೂ ಜನವರಿ 31ರಿಂದ ಹಿಂತೆಗೆದುಕೊಳ್ಳಲಾಗುತ್ತದೆ. ಬಾರ್, ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್ಗಳಿಗೆ ಶೇ.100ರಷ್ಟು ಅವಕಾಶ ನೀಡಲಾಗಿದೆ. ಆದರೆ ಸಿನಿಮಾ ಥಿಯೇಟರ್ಗಳಿಗೆ ಶೇ.50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂತ ತಿಳಿಸಿದರು.
ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ ಎಂದು ಸಚಿವ ಆರ್. ಅಶೋಕ್ ಮಾಹಿತಿ ಹಂಚಿಕೊಂಡರು.
Recommended Video
ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಕೋವಿಡ್ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.












Click it and Unblock the Notifications