ಸರ್ಕಾರಿ ಸಭೆಗಳಲ್ಲಿ ಹೂಗುಚ್ಛ, ಹಾರ, ತುರಾಯಿ ತರುವಂತಿಲ್ಲ: ಸರ್ಕಾರದ ಆದೇಶ
ಬೆಂಗಳೂರು, ಆಗಸ್ಟ್ 10: ರಾಜ್ಯ ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ ಸರ್ಕಾರ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ರಾಜ್ಯದ ಬೊಕ್ಕಸವನ್ನು ಬಿಗಿಗೊಳಿಸುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಕೋವಿಡ್ ವಾರಾಂತ್ಯ ಹಾಗೂ ರಾಥ್ರಿ ಕರ್ಫ್ಯೂ ಜಾರಿಯಲ್ಲಿದ್ದು, ಆದಾಯ ಕಡಿಮೆಯಾಗುತ್ತಿದೆ. ಸರ್ಕಾರದ ಖರ್ಚು ಕೂಡ ಕಡಿಮೆ ಮಾಡಲು ನಿರ್ಧಾರ ಮಾಡಿದಂತಿದೆ.
ಈಗ ಅದರ ಭಾಗವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲು ಸೇರಿದಂತೆ ಅನಗತ್ಯ ಖರ್ಚುಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಸರ್ಕಾರದ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ, ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಿಎಂ ಬೊಮ್ಮಾಯಿ ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹೂಗುಚ್ಚ ಸ್ವೀಕರಿಸಿದ ಸಿಎಂ ಬೊಮ್ಮಾಯಿ
ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಹೂಗುಚ್ಛ ಸ್ವೀಕರಿಸಿದರು. ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರೊಂದಿಗೆ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದಿದ್ದಾರೆ. ಆದೇಶ ಹೊರಡಿಸಿದ ಮೊದಲ ದಿನವೇ ಖುದ್ದು ಮುಖ್ಯಮಂತ್ರಿಗಳೇ ಆದೇಶ ಉಲ್ಲಂಘಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ದಕ್ಷತೆ, ಪ್ರಾಮಾಣಿಕತೆ ಹೆಚ್ಚಾಗಬೇಕು
"ಪೊಲೀಸ್ ಇಲಾಖೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಅಲ್ಲದೆ ಪೊಲೀಸ್ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಹೊಸ ಸರ್ಕಾರದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳಿಸಿದ್ದೇವೆ. ರಾಜ್ಯದಲ್ಲಿ ಪೊಲೀಸರ ದಕ್ಷತೆ ಹಾಗೂ ಪ್ರಾಮಾಣಿಕತೆ ಇನ್ನೂ ಹೆಚ್ಚಾಗಬೇಕೆಂದು ಸೂಚಿಸಿದ್ದೇವೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ,'' ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
"ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ಮಾಡಬೇಕು. ಅಪರಾಧ ನಡೆಯುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು. ಅಲ್ಲದೇ ಈಗ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಮಯ. ಹೀಗಾಗಿ ಕೋವಿಡ್ ನಿರ್ವಹಣೆ ಸಂದರ್ಭದಲ್ಲಿನ ಸವಾಲಿನ ಬಗ್ಗೆ ಹೇಳಿದ್ದೇನೆ,'' ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮೈಸೂರು ದಸರಾ ಬಗ್ಗೆ ಚರ್ಚೆ ಮಾಡಿ ನಿರ್ಧಾರ
"ಮುಂದಿನ ಒಂದೆರಡು ವಾರಗಳಲ್ಲಿ ಕೋವಿಡ್ ಹೆಚ್ಚಾಗಲಿದೆಯೋ ಅಥವಾ ಕಡಿಮೆ ಆಗಲಿದೆಯೇ ನೋಡುತ್ತೇವೆ. ಹೈಪವರ್ ಕಮಿಟಿಯಲ್ಲಿ ಮೈಸೂರು ದಸರಾ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಕೊರೊನಾ ಸ್ಥಿತಿಗತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಆನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.''
"ಕೊರೊನಾ 3ನೇ ಅಲೆ ಬರದಂತೆ ಪ್ರಾರ್ಥನೆ ಮಾಡೋಣ. 3ನೇ ಅಲೆ ಬರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಾಗುತ್ತಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಕಡ್ಡಾಯವಾಗಿ ಕೊವಿಡ್-19 ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇನೆ,'' ಎಂದು ದಸರಾ ಆಚರಣೆ ಕುರಿತು ಸಿಎಂ ಬೊಮ್ಮಾಯಿ ತಿಳಿಸಿದರು.
Recommended Video

64 ಲಕ್ಷ ಡೋಸ್ ಕೊರೊನಾ ಲಸಿಕೆ ಬರುತ್ತಿದೆ
"ರಾಜ್ಯಕ್ಕೆ 63ರಿಂದ 64 ಲಕ್ಷ ಡೋಸ್ ಕೊರೊನಾ ಲಸಿಕೆ ಬರುತ್ತಿದೆ. ಮುಂದಿನ ತಿಂಗಳಿಂದ 1.5 ಕೋಟಿ ಡೋಸ್ ಲಸಿಕೆಗೆ ಮನವಿ ಮಾಡಿದ್ದೇನೆ. ಮೈಸೂರು, ಕೊಡಗು ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಿಸಬೇಕು. ಮೈಸೂರು ಜಿಲ್ಲೆಗೆ 14 ಆಕ್ಸಿಜನ್ ಜನರೇಟರ್ ಮಂಜೂರು ಮಾಡಲಿದ್ದೇವೆ. ತಜ್ಞರ ಸಲಹೆಯಿಂದ ಗಡಿ ಭಾಗದಲ್ಲಿ ಎಲ್ಲರಿಗೂ ತಪಾಸಣೆ ಮಾಡಲಿದ್ದೇವೆ. ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಮತ್ತು ಗಡಿ ಭಾಗದ ಗ್ರಾಮಗಳ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಿಸುತ್ತೇವೆ,'' ಎಂದು ತಿಳಿಸಿದರು.












Click it and Unblock the Notifications