ರಾಜ್ಯದಲ್ಲಿ ಮುಂದುವರಿದ ಧಾರಾಕಾರ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು ಮೇ 20: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮೂರನೇ ದಿನವೂ ಮಳೆಯ ಅಬ್ಬರ ಮುಂದುವರಿದಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳವಾರ ಆರಂಭಗೊಂಡಿರುವ ಮಳೆಯು ಬಿಟ್ಟು ಬಿಟ್ಟು ಸುರಿಯುತ್ತಿದ್ದು, ರಾಜ್ಯದ ಅನೇಕ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಎರಡನೇ ದಿನವೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ ಕಾರಣ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಎಡಬಿಡದೇ ಮಳೆಯು ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಜೆಗೆ ಸಂಬಂಧಿಸಿದಂತೆ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯೇ ನಿರ್ಧಾರ ತೆಗೆದುಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಎಂ.ಕುಮಾರ್ ರಾವ್ ಸೂಚಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಮೂರನೇ ದಿನವೂ ಮಳೆ ಮುಂದುವರಿದಿದ್ದು, ಬಿಟ್ಟು ಬಿಟ್ಟು ಮಳೆ ಬರುತ್ತಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಇದರಿಂದ ಅಲ್ಲಿನ ನಿವಾಸಿಗಳು ಸಂಕಷ್ಟ ಅನುಭವಿಸುವಂತಾಗಿದೆ. ಬೆಂಗಳೂರಿನ ಹಲವು ಭಾಗಗಳ ತಗ್ಗು ಪ್ರದೇಶಗಳಲ್ಲಿ ನೀರು ಆವರಿಸಿದೆ. ನಗರದ ಅನೇಕ ರಸ್ತೆಗಳು ಹಾಳಾಗಿವೆ. ಮಳೆಯು ರಸ್ತೆ ಗುಂಡಿಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿದೆ. ಮಳೆಯ ಹಿನ್ನೆಲೆಯಲ್ಲಿ ನಗರದ ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಕಂಡುಬಂತು.
ಡ್ಯಾಂಗಳಿಗೆ ನೀರು:
ಧಾರಾಕಾರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣರಾಜ ಸಾಗರ, ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ನಾರಾಯಣಪುರ, ಭದ್ರಾ, ತುಂಗಭದ್ರಾ, ಘಟಪ್ರಭಾ ಮತ್ತು ಮಲಪ್ರಭಾ ಅಣೆಕಟ್ಟುಗಳು ತುಂಬುವ ಹಂತ ತಲುಪಿವೆ.

ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಚಿಕ್ಕಮಗಳೂರು, ಮೈಸೂರು, ಹಾವೇರಿ, ಗದಗ, ರಾಯಚೂರು, ಚಿತ್ರದುರ್ಗ, ಮಂಡ್ಯ, ದಾವಣಗೆರೆ, ಕೊಪ್ಪಳ, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.