ಮತದಾರರೇ ಮತಗಟ್ಟೆ ಕೇಂದ್ರದ ಸುತ್ತಲಿನ ನಿಯಮಗಳನ್ನು ತಿಳಿಯಿರಿ
ಬೆಂಗಳೂರು, ಮೇ. 08: ಇದೇ ಮೇ 10 ರಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 8ರ ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನವು ಮುಕ್ತಾಯವಾಗುವವರೆಗೆ ಮತಗಟ್ಟೆ ಸುತ್ತಮುತ್ತ ಪ್ರತಿಬಂಧಕಾಜ್ಞೆ ಹೊರಡಿಸಲಾಗಿದೆ. ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ-1973ರ ಕಲಂ 144 ರನ್ವಯ ಕೆಲವೊಂದು ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮತಗಟ್ಟೆ ಸುತ್ತಮುತ್ತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಮತ್ತು ಬೆಂಬಲಿಗರು 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು. ಮತಗಟ್ಟೆ 100 ಮೀಟರ್ ವ್ಯಾಪ್ತಿಯಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆಗೆ ಕಲ್ಲುಗಳನ್ನು, ಖಾರ ಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ಸುಡುವ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು, ಮನುಷ್ಯನ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಮತಗಟ್ಟೆ ಸುತ್ತಮುತ್ತ ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ಚುನಾವಣಾ ನೀತಿಯನ್ನು ಉಲ್ಲಂಘಿಸಬಹುದಾಗ ಕೃತ್ಯಗಳನ್ನು ಮಾಡುವುದನ್ನು ಸಹ ನಿರ್ಬಂಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳುಳನ್ನು ಹಾಡುವುದು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವಂತಿಲ್ಲ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದನ್ನು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಈ ಆದೇಶ ಉಲ್ಲಂಘಿಸಿದಲ್ಲಿ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಈ ಆದೇಶವು ಮತದಾನ ಸಿಬ್ಬಂದಿ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
100 ಮೀಟರ್ ಒಳಗೆ ಪ್ರಚಾರ ನಿಷೇಧ: ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದ್ದು, ಈ ಪರಿಮಿತಿಯಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಜೆರಾಕ್ಸ ಅಂಗಡಿ, ಬುಕ್ಸ್ ಸ್ಟಾಲ್ ಹಾಗೂ ಸೈಬರ್ ಕೆಫೆಗಳಿಗೂ ನಿರ್ಬಂಧಿಸಲಾಗಿದ್ದು, ಧ್ವನಿವರ್ಧಕ ಸಹ ಬಳಸುವಂತಿಲ್ಲ.
ಧಾರ್ಮಿಕ ಕಾರ್ಯಗಳಿಗೆ ತೊಂದರೆಯಿಲ್ಲ: ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಪಾಲಿಸಬೇಕು.
ಮೊಬೈಲ್ ನಿಷೇಧ: ಚುನಾವಣಾ ಕಾರ್ಯದಲ್ಲಿ ನಿರತ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಹಾಗೂ ಅವರಿಂದ ಅನುಮತಿ ಪಡೆದ ಅಧಿಕಾರಿಗಳು, ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆಗಳ ಸುತ್ತಲೂ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಪೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.












Click it and Unblock the Notifications