Karnataka Rain: ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಜುಲೈ 6: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಇನ್ನೂ ಹಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗಿದೆ. ಜುಲೈ 8ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆಯಾಗುತ್ತಿರುವ ಕರಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲೆಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರಾವಳಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಂಕಾಳ್ ವೈದ್ಯ ಅವರಿಗೂ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.
ಶೀಘ್ರ ಪರಿಹಾರಕ್ಕೆ ನಿರ್ದೇಶನ
ಸಿಎಂ ಸಿದ್ದರಾಮಯ್ಯ ಕರಾವಳಿ ಜಿಲ್ಲೆಗಳ ಪರಿಸ್ಥಿತಿಯ ಬಗ್ಗೆ ಮುಖ್ಯ ಕಾರ್ಯದರ್ಶಿಯವರಿಂದ ಮಾಹಿತಿ ಪಡೆದು ಶೀಘ್ರ ಪರಿಹಾರ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಕಳೆದ 48 ಗಂಟೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿವೆ. ಮೃತರ ಕುಟುಂಬಕ್ಕೆ ಅಧಿಕಾರಿಗಳು 5 ಲಕ್ಷ ಪರಿಹಾರ ನೀಡಿದ್ದಾರೆ. ಭಾರೀ ಮಳೆ ಹಾಗೂ ಗಾಳಿಯ ರಭಸಕ್ಕೆ ಹಲವು ಕಡೆಗಳಲ್ಲಿ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದಿದೆ.
ಗುರುವಾರ ಶಾಲಾ-ಕಾಲೇಜುಗಳಿಗೆ ಅಧಿಕಾರಿಗಳು ರಜೆ ಘೋಷಿಸಿಲಾಗಿತ್ತು, ಶುಕ್ರವಾರ ಕೂಡ ಮಳೆ ಪ್ರಮಾಣ ನೋಡಿಕೊಂಡು ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 30 ಮನೆಗಳು ಕುಸಿದಿದ್ದು, 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಎಂದು ವರದಿಗಳು ಹೇಳಿವೆ.
ಕಾರವಾರ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಕೆಲ ಭಾಗಗಳಲ್ಲಿ ನೀರು ಹರಿಯದೆ ರಸ್ತೆಗಳು ಜಲಾವೃತವಾಗಿದೆ. ಕಾರವಾರದ ಬಸ್ ಡಿಪೋಗೆ ಗುರುವಾರವೂ ಮತ್ತೆ ನೀರು ನುಗ್ಗಿದ್ದು ಬಸ್ ಓಡಾಟಕ್ಕೆ ಅಡಚಣೆಯಾಗಿದೆ.
ಕಾಫಿನಾಡಿನಲ್ಲೂ ಮಳೆ ಅಬ್ಬರ
ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಕಳಸ-ಕುದುರೆಮುಖ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಲವು ಕಡೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications