ಕರ್ನಾಟಕದಲ್ಲಿ ಹಲವೆಡೆ ಮುಂದುವರೆದ ಗುಡುಗು ಸಹಿತ ಮಳೆ
ಬೆಂಗಳೂರು, ಏಪ್ರಿಲ್ 26 : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಕೆಲವೆಡೆ ಬಿಡುವು ಕೊಟ್ಟಿದ್ದ ವರುಣ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಅದರಲ್ಲೂ ಕರಾವಳಿಯ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಿ ಆಗಲಿದ್ದು, ಇಂದು ಕೂಡ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ಈಶಾನ್ಯ ಭಾರತದಲ್ಲೂ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಜರಾತ್, ಚತ್ತೀಸ್‌ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳ ಸೇರಿದಂತೆ ದಕ್ಷಿಣ ಮಧ್ಯ ಮಹಾರಾಷ್ಟ್ರದಲ್ಲೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರ್ನಾಲ್ಕು ದಿನಗಳು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಒಡಿಶಾ, ಮಹಾರಾಷ್ಟ್ರ, ಗೋವಾ, ಚತ್ತೀಸ್‌ಗಢ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವುದ ಸಾಧ್ಯತೆ ಇದೆ. ಉತ್ತರಾಖಂಡದಲ್ಲಿ ಹಿಮದ ವಾತವರಣ ಮುಂದುವರೆಯಲಿದ್ದು, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ ಜಾರ್ಖಂಡ್ ನಲ್ಲಿ ಬಿಸಿಗಾಳಿ ಹೆಚ್ಚಾಗಲಿದೆ. ಸದ್ಯ ಕರ್ನಾಟಕದಲ್ಲೂ ಸಹ ಇನ್ನು ಮೂರ್ನಾಲ್ಕು ದಿನ ಮಳೆಯಾಗುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications