ಬೆಂಗಳೂರು ಅಭಿವೃದ್ಧಿಗೆ ಕೃಷ್ಣ ಬೈರೇಗೌಡ ಖಡಕ್ ಸೂಚನೆ: ರಸ್ತೆ ಗುಂಡಿ, ಆಸ್ತಿ ತೆರಿಗೆ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರ
ಬೆಂಗಳೂರು ನಗರದ ಸುಧಾರಣೆಗಾಗಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಕಾರ್ಯಕ್ರಮಗಳು ಹಾಗೂ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಎಲ್ಲಾ ವಿಭಾಗಗಳ ಅಧಿಕಾರಿಗಳೊಂದಿಗೆ ಆಗಸ್ಟ್ 27ರ ಗುರುವಾರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ನಾವು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಒಂದು ತಂಡವಾಗಿ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಲ್ಲ. ಈ ನಿಟ್ಟಿನಲ್ಲಿ ನಗರದ ಸುಧಾರಣೆಗಾಗಿ ಒಂದು ತಂಡವಾಗಿ ಕೆಲಸ ಮಾಡೋಣ ಎಂದರು.
ಬೆಂಗಳೂರು ನಗರದಲ್ಲಿ ಅವ್ಯವಸ್ಥೆಯೇ ವ್ಯವಸ್ಥೆಯಾಗಿ ಮಾರ್ಪಟ್ಟಿದ್ದು, ಅದನ್ನು ಬದಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು ಸರಿದಾರಿಗೆ ಬಂದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ. ಇರುವ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಾಗರಿಕರು ಕೂಡ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ಹೇಳಿದರು.

ಸಚಿವರ ಹಂತದಲ್ಲಿ ಪ್ರತಿ ತಿಂಗಳು ಸಭೆ
ಜನರು ಕಚೇರಿಗೆ ಬಂದು ಪರಿಹಾರ ಕಂಡುಕೊಳ್ಳುವ ಬದಲು, ಆಡಳಿತದಲ್ಲಿ ಸುಧಾರಣೆ ತಂದು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಸ್ಥಳದಲ್ಲಿಯೇ ಪರಿಹಾರ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ನನ್ನ ಹಂತದಲ್ಲಿ ಪ್ರತಿ ತಿಂಗಳು ಸಭೆ ನಡೆಸುತ್ತೇನೆ. ಅದಲ್ಲದೆ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಆಯುಕ್ತರು ಕೂಡ ಸಭೆಗಳನ್ನು ನಡೆಸಿ ನಿರ್ದಿಷ್ಟ ಸೂಚನೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.
ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ: ಕೃಷ್ಣಬೈರೇಗೌಡ ಭರವಸೆ
ನಗರದ ಪ್ರಮುಖ ರಸ್ತೆಗಳಾದ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳ ಸಮೀಕ್ಷೆ ನಡೆಸಿ ಅವುಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ ಬಳಿಕ ವಾರ್ಡ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು. ಸಹಾಯ 2.0 ತಂತ್ರಾಂಶದಲ್ಲಿ ದಾಖಲಾಗುವ ದೂರುಗಳನ್ನು ಕೂಡಲೇ ಬಗೆಹರಿಸುವ ಕೆಲಸ ಮಾಡಬೇಕು. ನಾಗರಿಕರಿಂದ ಬಂದಂತಹ ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಿದಲ್ಲಿ ಮಾತ್ರ ನಾಗರಿಕರಲ್ಲಿ ನಮ್ಮ ಮೇಲೆ ವಿಶ್ವಾಸ ಮೂಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ದೂರುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಿರಂತರ ಮೇಲ್ವಿಚಾರಣೆ ನಡೆಸುವುದರ ಜೊತೆಗೆ ಸಭೆಗಳನ್ನು ಕೂಡ ನಡೆಸಲಾಗುವುದು ಎಂದರು.
ಸಹಾಯ ತಂತ್ರಾಂಶದಲ್ಲಿ ನಾಗರಿಕರು ಈವರೆಗೆ 75,152 ದೂರುಗಳನ್ನು ದಾಖಲಿಸಿದ್ದಾರೆ. ಅದರಲ್ಲಿ 73,985 ದೂರುಗಳನ್ನು ಪರಿಹರಿಸಲಾಗಿದ್ದು, 1,152 ದೂರುಗಳು ಮಾತ್ರ ಬಾಕಿ ಉಳಿದಿವೆ. ಕೆಲವು ದೂರುಗಳು ಇತ್ಯರ್ಥಕ್ಕೆ ಸಮಯ ತೆಗೆದುಕೊಳ್ಳುತ್ತಿವೆ. ಅದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದ್ದೇನೆ. ಹಿರಿಯ ಅಧಿಕಾರಿಗಳು ಬಗೆಹರಿಸಿದ ಕೆಲ ಸಮಸ್ಯೆಗಳನ್ನು ಮರುಪರಿಶೀಲನೆ ಮಾಡಿ, ವರದಿ ನೀಡಲು ಸೂಚನೆ ನೀಡಿದ್ದೇನೆ.
ನಾಗರಿಕರು ನೀಡುವ ದೂರುಗಳು ತ್ವರಿತವಾಗಿ ಇತ್ಯರ್ಥವಾಗುತ್ತಿಲ್ಲ. ಈ ಸಂಬಂಧ ಸಹಾಯ 2.0 ತಂತ್ರಾಂಶದಲ್ಲಿ ಅಗತ್ಯ ಬದಲಾವಣೆಗಳನ್ನು ತಂದು ಅಪ್‌ಗ್ರೇಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ ನಂತರ ನಾಗರಿಕರೊಂದಿಗೆ ಸಮಾಲೋಚನಾ ಸಭೆ ನಡೆಸಿ, ಅಗತ್ಯ ಬದಲಾವಣೆಗಳನ್ನು ಕೈಗೊಂಡು ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗುವುದು ಎಂದಿದ್ದಾರೆ.
ನಗರದ ಆಸ್ತಿ ತೆರಿಗೆ ಸಂಗ್ರಹ ಗುರಿ ಸಾಧಿಸಿ
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ₹6,700 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದ್ದು, ಈ ಪೈಕಿ ಈವರೆಗೆ ₹3,382 ಕೋಟಿ (50.48%) ಸಂಗ್ರಹಿಸಲಾಗಿದೆ. ಬಾಕಿ ಇರುವ ಆಸ್ತಿ ತೆರಿಗೆಯನ್ನು ತ್ವರಿತಗತಿಯಲ್ಲಿ ಸಂಗ್ರಹಿಸುವ ಕೆಲಸ ಮಾಡಬೇಕು. ಜೊತೆಗೆ ಹಲವು ವರ್ಷಗಳಿಂದ ತೆರಿಗೆ ಪಾವತಿಸದ ಸುಸ್ತಿದಾರರಿಂದ ಹಾಗೂ ಪರಿಷ್ಕರಣೆ ಪ್ರಕರಣಗಳಿಂದ ತೆರಿಗೆ ವಸೂಲಿ ಮಾಡುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಪ್ರಗತಿ ಸಾಧಿಸದ ಕಂದಾಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಸೂಚನೆ ನೀಡಿದರು.
ನಗರದಲ್ಲಿ ಸಿಎಂಐಡಿಪಿ, ಎಸ್‌ಎಸ್‌ಐಪಿ, ವೈಟ್ ಟಾಪಿಂಗ್ ಸೇರಿದಂತೆ 8,000 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,500 ಕಿ.ಮೀ. ರಸ್ತೆಗಳಿಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 840 ಕಿ.ಮೀ. ಉದ್ದದ ರಾಜಕಾಲುವೆ ಇದ್ದು, 640 ಕಿ.ಮೀ. ಉದ್ದದ ರಾಜಕಾಲುವೆಯನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಬಾಕಿ ಇರುವ 200 ಕಿ.ಮೀ. ರಾಜಕಾಲುವೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅದಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ನೀಡಿದ ಇತರೆ ಪ್ರಮುಖ ನಿರ್ದೇಶನಗಳು
* ಅನುಮೋದನೆಗಾಗಿ ಬಾಕಿ ಇರುವ ಇ-ಖಾತಾ ಅರ್ಜಿಗಳನ್ನು ಕೂಡಲೇ ಅನುಮೋದಿಸಲು ಸೂಚನೆ.
* ಬಿ-ಖಾತಾದಿಂದ ಎ-ಖಾತಾಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಗೆ ವೇಗ ನೀಡಲು ಸೂಚನೆ.
* 40 ಅಡಿ ಹಾಗೂ ಅದಕ್ಕಿಂತ ಕಡಿಮೆ ಅಗಲವಿರುವ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳನ್ನು ಹೆಚ್ಚು ಎತ್ತರಿಸದೆ ನಿರ್ಮಿಸುವಂತೆ ಸೂಚನೆ.
* ರಸ್ತೆಯಲ್ಲಿ ಬೀಳುವ ನೀರು ಚರಂಡಿಯಲ್ಲಿ ಸರಾಗವಾಗಿ ಹರಿದುಹೋಗುವ ರೀತಿಯಲ್ಲಿ ಶೋಲ್ಡರ್ ಡ್ರೈನ್‌ಗಳನ್ನು ನಿರ್ಮಿಸಲು ಸೂಚನೆ.
* ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಸೂಚನೆ.
* ಕಾಮಗಾರಿ ನಡೆಯುತ್ತಿರುವ ಕಡೆ ನಿರ್ಮಾಣ ಸಾಮಗ್ರಿಗಳನ್ನು ಪಾದಚಾರಿಗಳಿಗೆ ತೊಂದರೆಯಾಗದಂತೆ ಇಡಬೇಕು.


Click it and Unblock the Notifications
