Lalbagh Flower Show: ಟ್ರಾಫಿಕ್ ಸಲಹೆ, ವಾಹನ ನಿಲುಗಡೆ ಮತ್ತು ಪಾರ್ಕಿಂಗ್ ನಿಷೇಧ ಪ್ರದೇಶಗಳ ಮಾಹಿತಿ
ಬೆಂಗಳೂರು, ಆಗಸ್ಟ್ 3: ಲಾಲ್‌ಬಾಗ್‌ನಲ್ಲಿ ಆಗಸ್ಟ್ 4ರಿಂದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಸಿಗಲಿದ್ದು ಆಗಸ್ಟ್ 15ರವರೆಗು ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಈ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಲಕ್ಷಾಂತರ ಜನ ಈ ಪ್ರದರ್ಶನದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಸಂಚಾರ ಪೊಲೀಸರು, ಸಂಚಾರ ಸಲಹೆಗಳನ್ನು ನೀಡಿದ್ದಾರೆ.
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದ್ದು, ಹಲವು ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಲಾಲ್ ಬಾಗ್ ಸುತ್ತಮುತ್ತ ದಟ್ಟಣೆ ತಡೆಯಲು ಹಲವು ಕ್ರಮಗಳನ್ನು ಸಂಚಾರ ಪೊಲೀಸರು ತೆಗೆದುಕೊಂಡಿದ್ದಾರೆ.

ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಗಣ್ಯರು, ವಿದೇಶಿ ಅತಿಥಿಗಳು, ಶಾಲಾ ಮಕ್ಕಳು ಸೇರಿ ಸುಮಾರು 8 ರಿಂದ 10 ಲಕ್ಷ ಪ್ರವಾಸಿಗರು ಭೇಟಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೆಚ್ಚಿನ ಸಂಚಾರ ದಟ್ಟಣೆ ತಪ್ಪಿಸಲು ಲಾಲ್‌ಬಾಗ್ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
'ಸಂಚಾರ ಸಲಹೆ'
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 3, 2023
'Traffic advisory' pic.twitter.com/ViZ1yo97AB
ಫಲಪುಷ್ಪ ಪ್ರದರ್ಶನಕ್ಕೆ ಬರುವವರಿಗೆ ಪಾರ್ಕಿಂಗ್ ಸ್ಥಳ
ಡಾ. ಮರಿಗೌಡ ರಸ್ತೆ- ಹಾಪ್ ಕಾಮ್ಸ್ ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ.
ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ ಮಾತ್ರ ನಿಲುಗಡೆಗೆ ಅವಕಾಶ ನೀಡಲಾಗಿದೆ.
ಕೆ.ಹೆಚ್.ರಸ್ತೆ, ಶಾಂತಿನಗರ ಬಿಎ೦ಟಿಸಿ ಬಸ್ ನಿಲ್ದಾಣದ ಬಳಿ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿಷೇಧ
ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ.
ಕೆಹೆಚ್.ರಸ್ತೆ, ಕೆ.ಹೆಚ್.ವೃತ್ತದಿ೦ದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಪಾರ್ಕಿಂಗ್‌ಗೆ ನಿಷೇಧ ಹೇರಲಾಗಿದೆ.
ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ ಪಾರ್ಕಿಂಗ್‌ಗೆ ಅನುಮತಿ ಇಲ್ಲ.
ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ, ಬಿ.ಎಂ.ಟಿ.ಸಿ ರಸ್ತೆಯ ಎರಡೂ ಬದಿಗಳಲ್ಲಿ. ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ. ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ. ಆರ್‌ಎ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ ವರೆಗೆ, ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ ಯಾವ ವಾಹನಗಳ ನಿಲುಗಡೆಗೂ ಅವಕಾಶ ಇಲ್ಲ.
ಪಾರ್ಕಿಂಗ್ ತೊಂದರೆ ಮತ್ತು ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಪ್ರದರ್ಶನ ವೀಕ್ಷಿಸಲು ಬರುವ ಪ್ರವಾಸಿಗರಿಗೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಆಗಸ್ಟ್ 15ರಂದು ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ. ವಿಧಾನಸೌಧ, ಶಿವಪುರ ಸ್ವಾತಂತ್ಯ್ರಸೌಧ ಪ್ರತಿಕೃತಿಗಳನ್ನು 10 ಲಕ್ಷ ಹೂ ಬಳಸಿ ನಿರ್ಮಾಣ ಮಾಡಲಾಗುತ್ತಿದ್ದು ಪ್ರಮುಖ ಆಕರ್ಷಣೆಯಾಗಲಿದೆ.












Click it and Unblock the Notifications