ಬೆಂಗಳೂರಿನಲ್ಲಿ ಪ್ರೇಮಿಗಳ ದಿನಾಚರಣೆ ದಿನದಿಂದ 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ಯಾಕೆ-ಮಾಹಿತಿ ತಿಳಿಯಿರಿ
ಬೆಂಗಳೂರು, ಫೆಬ್ರವರಿ, 04: ಫೆಬ್ರವರಿ 14ರಂದು ಪ್ರೇಮಿಗಳ ದಿನವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ದಿನದಿಂದಲೇ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹಾಗಾದರೆ ಮದ್ಯ ಮಾರಾಟ ನಿಷೇಧ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕಿದೆ.

ಆದ್ದರಿಂದ ಕರ್ನಾಟಕ ಅಬಕಾರಿ ನಿಯಮಗಳು 1967ರ ನಿಯಮ -10(ಬಿ)ರ ಅನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ)ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ, ಫೆಬ್ರವರಿ 14 ಸಂಜೆ 5 ಗಂಟೆಯಿಂದ 17ರ ಬೆಳಗ್ಗೆ 6 ಗಂಟೆವರಗೆ ಬೆಂಗಳೂರು ನಗರ ಜಿಲ್ಲಾದ್ಯಂತ ಮದ್ಯಪಾನ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆದ್ದರಿಂದ ಜಿಲ್ಲೆಯಾದ್ಯಂತ ವಿಧದ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಣೆ ಮಾಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ 7 ವಿಧಾನಸಭಾ ಕ್ಷೇತ್ರಗಳಾದ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಿಕ್ಷಕರು ಮತ ಚಲಾಯಿಸಲಿದ್ದಾರೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಜನವರಿ 16ರಿಂದ ಫೆಬ್ರವರಿ 23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.












Click it and Unblock the Notifications