ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಬಿಡುವುದಿಲ್ಲ!
ಬೆಂಗಳೂರು, ಡಿಸೆಂಬರ್ 27 : ಮಹದಾಯಿಗಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಇಷ್ಟಾದರೂ ನಮ್ಮ ಕೂಗು ಯಾರಿಗೂ ಕೇಳುತ್ತಿಲ್ಲ. ಇದು ಹೀಗೇ ಮುಂದುವರಿದರೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ಉತ್ತರ ಕರ್ನಾಟಕದಲ್ಲಿ ನಡೆಸಲು ಬಿಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುಂದೆ ರೈತರು ನಡೆಸುತ್ತಿರುವ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟಿದೆ. ಯಾವುದೇ ಸಂಧಾನಕ್ಕೂ ಬಗ್ಗದ ರೈತರು, ಮಹದಾಯಿ ವಿವಾದಕ್ಕೆ ಒಂದು ಗತಿ ಕಾಣಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಈ ಕುರಿತು ಬುಧವಾರ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸುವುದಾಗಿ ರೈತರು ನಿರ್ಣಯ ತೆಗೆದುಕೊಂಡಿದ್ದಾರೆ. ಜೊತೆಗೆ ಚುನಾವಣಾ ಆಯೋಗಕ್ಕೂ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ನೀರು ತರಲು ಕೇಂದ್ರ, ರಾಜ್ಯ ಸರಕಾರಗಳು, ಅಲ್ಲಿನ ರಾಜಕಾರಣಿಗಳು ಸಂಪೂರ್ಣ ವಿಫಲವಾಗಿದ್ದು, ವಿವಾದ ಬಗೆಹರಿಯದಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯನ್ನು ನಡೆಸದಿರಲು ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ರೈತರು ಹೇಳಿದ್ದಾರೆ.












Click it and Unblock the Notifications