BMRCL; ಬಿಎಂಆರ್‌ಸಿಎಲ್‌ಗೆ ಹೊಸ ಎಂಡಿ ನೇಮಿಸಿದ ಕೇಂದ್ರ ಸರ್ಕಾರ
ಬೆಂಗಳೂರು, ಜನವರಿ 11: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ಗೆ ಹೊಸ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಿದೆ.
ಜನವರಿ 11ರ ಗುರುವಾರ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರವನ್ನು ಬರೆದಿದ್ದಾರೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.

1995ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂ. ಮಹಾಬಲೇಶ್ವರ ರಾವ್ ಅವರನ್ನು ಬಿಎಂಆರ್‌ಸಿಎಲ್‌ನ ಹೊಸ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಮೆಟ್ರೋ ಯೋಜನೆಯನ್ನು ಬಿಎಂಆರ್‌ಸಿಎಲ್ ನಿರ್ವಹಣೆ ಮಾಡುತ್ತದೆ.
ಆದೇಶದ ವಿವರ; ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ನಿರ್ದೇಶಕರು ತಮ್ಮ ಆದೇಶದಲ್ಲಿ ಕರ್ನಾಟಕ ಸರ್ಕಾರದ 28/12/2023ರ ಪತ್ರವನ್ನು ಉಲ್ಲೇಖ ಮಾಡಿದ್ದಾರೆ.
ಎಂ. ಮಹಾಬಲೇಶ್ವರ ರಾವ್ ಅವರನ್ನು ಬಿಎಂಆರ್‌ಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡುವಂತೆ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರ ಬರೆದಿದ್ದ ಪತ್ರವನ್ನು ಉಲ್ಲೇಖಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ವರ್ಗಾವಣೆ ಮಾಡುವಂತಿಲ್ಲ ಅಥವ ತೆಗೆದು ಹಾಕುವಂತಿಲ್ಲ ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ.
ಅಲ್ಲದೇ ಕರ್ನಾಟಕ ಸರ್ಕಾರ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಹೊಸ ವ್ಯವಸ್ಥಾಪಕ ನಿರ್ದೇಶಕರಿಗೆ ಯಾವುದೇ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಒಪ್ಪಿಗೆ ಇಲ್ಲದೇ ನೀಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ತೇಜಸ್ವಿ ಸೂರ್ಯ ಕೇಂದ್ರದ ಗಮನ ಸೆಳೆದಿದ್ದರು; ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರಿಗೆ ಪೂರ್ಣಾವಧಿ ಹೊಣೆ ನೀಡುವ ಕುರಿತು ಕೇಂದ್ರ ಸರ್ಕಾರ ಮಧ್ಯಸ್ತಿಕೆವಹಿಸಬೇಕು ಎಂದು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.
ತೇಜಸ್ವಿ ಸೂರ್ಯ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಬಿಎಂಆರ್‌ಸಿಎಲ್‌ಗೆ ಪೂರ್ಣ ಪ್ರಮಾಣದ ಎಂಡಿಯನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದರು. ಪೂರ್ಣಾವಧಿ ಎಂಡಿ ನೇಮಕ ವಿಚಾರದಲ್ಲಿ ಕರ್ನಾಟಕ ಸರ್ಕಾರ ಗಂಭೀರವಾಗಿಲ್ಲ. ಆದ್ದರಿಂದ ನಮ್ಮ ಮೆಟ್ರೋ ಯೋಜನೆಗಳು ವಿಳಂಬವಾಗಿ, ವೆಚ್ಚವೂ ಹೆಚ್ಚಾಗುತ್ತಿದೆ ಎಂದು ಹೇಳಿದ್ದರು.
ಸಚಿವ ಹರ್ದೀಪ್ ಸಿಂಗ್ ಪುರಿ ಭೇಟಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ತೇಜಸ್ವಿ ಸೂರ್ಯ, 'ಬೆಂಗಳೂರು ಮೆಟ್ರೋ ತನ್ನ ಕಾರ್ಯಾಚರಣೆಯನ್ನು ಮುಂದುವರೆಸಲು ಬಿಎಂಆರ್‌ಸಿಎಲ್‌ಗೆ ಪೂರ್ಣ ಪ್ರಮಾಣದ ಎಂಡಿ ಅಗತ್ಯವಿದೆ. ಪೂರ್ಣ ಪ್ರಮಾಣದ ನಾಯಕರು ಇಲ್ಲದೇ ಹಳದಿ ಸೇರಿದಂತೆ ಯೋಜನೆಯ ಹಲವು ಕೆಲಸಗಳು ವಿಳಂಬವಾಗುತ್ತಿದೆ" ಎಂದು ತಿಳಿಸಿದ್ದರು.
ಕರ್ನಾಟಕ ಸರ್ಕಾರ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್‌ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಹೊಣೆಯನ್ನು ನೀಡಿತ್ತು. ಬಳಿಕ ಬಿಎಂಆರ್‌ಸಿಎಲ್ ಎಂಡಿಗೆ ಪೂರ್ಣ ಪ್ರಮಾಣದ ಎಂಡಿ ನೇಮಕ ಮಾಡಬೇಕು ಎಂಬ ಬೇಡಿಕೆ ಕೇಳಿ ಬಂದಿತ್ತು.
ತೇಜಸ್ವಿ ಸೂರ್ಯ ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ್ ಭೇಟಿಯಾದಾಗಲೂ ಸಹ ಬಿಎಂಆರ್‌ಸಿಎಲ್‌ಗೆ ಪೂರ್ಣ ಪ್ರಮಾಣದ ಎಂಡಿ ನೇಮಕ ಮಾಡುವಂತೆ ಮನವಿಯನ್ನು ಸಲ್ಲಿಕೆ ಮಾಡಿದ್ದರು.












Click it and Unblock the Notifications