ಬೆಂಗಳೂರಿನ ಪ್ರಮುಖ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣ: ಭೂಸ್ವಾಧೀನ ಪ್ರಕ್ರಿಯೆ ವಿವರ!
ಬೆಂಗಳೂರಿನ ಪ್ರಮುಖ ಮೇಲ್ಸೇತುವೆ ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉತ್ತರ ನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಹೊಸ ಪಾಲಿಕೆಗಳು ರಚನೆಯಾದ ಬೆನ್ನಲ್ಲೇ ವಿವಿಧ ಕೆಲಸಗಳು ಚುರುಕು ಪಡೆದುಕೊಂಡಿವೆ. ಇದೀಗ ನಗರದ ಪ್ರಮುಖ ಮೇಲ್ಸೇತುವೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಾಗಿ ಹೇಳಲಾಗಿದೆ.
ಬೆಂಗಳೂರಿನ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ 3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಮುಂದೆ ನೋಡೋಣ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಉತ್ತರ ನಗರಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉತ್ತರ ನಗರ ಪಾಲಿಕೆಯಲ್ಲಿ ಸೋಮವಾರ (ಸೆಪ್ಟೆಂಬರ್ 08)ರಂದು ಬೆಳಿಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಜಕ್ಕೂರು ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಭೂಸ್ವಾಧೀನ ಸಮಸ್ಯೆಯನ್ನು ಬಗೆಹರಿದಿದೆ. ಎರಡೂ ಕಡೆಯ ರ‍್ಯಾಂಪ್ ಕಾಮಗಾರಿಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಜಕ್ಕೂರು ರೈಲ್ವೇ ಸಮಾಂತರ ರಸ್ತೆ (ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ರಸ್ತೆ) ಪರಿಶೀಲಿಸಿ, ಹೊಸ ರಸ್ತೆಯ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು. ರೈಲ್ವೇ ಸಮಾಂತರ ರಸ್ತೆಯಾದ ಎಂ.ಸಿ.ಇ.ಸಿ.ಹೆಚ್.ಎಸ್ ಹಂತ-2, ಮೇಸ್ತ್ರಿಪಾಳ್ಯ-ರಾಚೇನಹಳ್ಳಿ ಲಿಂಕ್ ರಸ್ತೆಗಳಲ್ಲಿ ಡಾಂಬರೀಕರಣ ಮತ್ತು ಎರಡೂ ಬದಿಯ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಶೀಘ್ರ ಪೂರ್ಣಗೊಳಿಸಲು ತಿಳಿಸಿದ್ದಾರೆ.
ರಾಯಲ್ ಎನ್‌ಕ್ಲೇವ್ ಲೇಔಟ್‌ನಲ್ಲಿ ಮನೆ-ಮನೆ ಕಸ ಸಂಗ್ರಹಣಾ ಕಾರ್ಯವನ್ನು ಪರಿಶೀಲಿಸಿ, ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಜೊತೆಗೆ ಪ್ರತಿನಿತ್ಯ ಆಟೋ ಟಿಪ್ಪರ್ ಗಳನ್ನು ಮನೆ-ಮನೆಗೆ ಭೇಟಿ ನೀಡಿ ಕಸ ಸಂಗ್ರಹಿಸಲು ತಿಳಿಸಲಾಗಿದೆ.
ವರ್ಚ್ಯುವಲ್ ಮೂಲಕ ಅಧಿಕಾರಿಗಳ ಜೊತೆ ಸಭೆ: ಮಳೆಯಿಂದ ಆಗುವ ಅನಾಹುತ ತಡೆಗಟ್ಟುವ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಕುರಿತು ಹಾಗೂ ಇ-ಖಾತಾ ಅರ್ಜಿಗಳ ವಿಲೇವಾರಿ ಮಾಡುವ ಕುರಿತು ವರ್ಚ್ಯುವಲ್ ಮೂಲಕ ಸಭೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.
3.5 ಟನ್ ಏಕ ಬಳಕೆ ಪ್ಲಾಸ್ಟಿಕ್ ವಶ & 1.5 ಲಕ್ಷ ರೂ. ದಂಡ: ಬೆಂಗಳೂರು ಉತ್ತರ ನಗರ ಪಾಲಿಕೆ ದಾಸರಹಳ್ಳಿಯ ಭೈರವವೇಶ್ವರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗೋಡನ್ ಗೆ ಎ.ಜಿ.ಎಂ ಆದ ಪವನಾ ನೇತೃತ್ವದ ತಂಡವು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಏಕ ಬಳಕೆಯ 3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ದಂಡ ವಿಧಿಸಲಾಗಿದೆ. ಮತ್ತೆ ಇದೇ ಮರುಕಳಿಸಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಈ ವೇಳೆ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರರಾದ ಸುಧಾಕರ್, ನಾಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.












Click it and Unblock the Notifications