ಬೆಂಗಳೂರಿನ ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್
Bengaluru Traffic Master Plan: ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು ಅದನ್ನು ಕಂಟ್ರೋಲ್ ಮಾಡುವುದಕ್ಕೆ ಬಳ್ಳಾರಿ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಪಾಲಿಕೆ, ಮೆಟ್ರೋ ಹಾಗೂ ಎನ್‌ಎಚ್‌ಎಐ ಅಧಿಕಾರಿಗಳು ಸಮನ್ವಯತೆಗೆ ಪ್ಲ್ಯಾನ್ ಮಾಡಲಾಗುತ್ತಿದೆ.
ಬಳ್ಳಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಸಂಬಂಧಿಸಿದಂತೆ ವಿಶೇಷ ಯೋಜನೆ ರೂಪಿಸುವುದಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಹತ್ವದ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಳ್ಳಾರಿ ರಸ್ತೆಯ ಮೆಟ್ರೋ ಕಾಮಗಾರಿ ಪೂರ್ಣಗೊಂಡ ಪ್ರದೇಶಗಳಲ್ಲಿ ಇರುವ ಭಗ್ನಾವಶೇಷಗಳು ಮತ್ತು ಅನುಪಯುಕ್ತ ಕಬ್ಬಿಣ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಮೆಟ್ರೋ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಹೆಬ್ಬಾಳ ಮೇಲ್ಸೇತುವೆಯ ಮೇಲ್ಭಾಗ ಹಾಳಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣವೇ ಸಂಪೂರ್ಣ ಮೇಲ್ಸೇತುವೆಗೆ ಡಾಂಬರೀಕರಣ ಮಾಡಿ ವಾಹನ ಸಂಚಾರ ಸುಗಮಗೊಳಿಸಲು ಸೂಚಿಸಲಾಗಿದೆ. ಹೆಬ್ಬಾಳದಿಂದ ಕೊಡಿಗೆಹಳ್ಳಿ ಕಡೆಗೆ ಸಂಪರ್ಕ ನೀಡುವ ಹಯಾತ್ ಸೆಂಟರ್ ಮುಂಭಾಗದ ರಸ್ತೆಯ ಮಧ್ಯಭಾಗದಲ್ಲಿರುವ ಸ್ಲ್ಯಾಬ್ ಸರಿಯಾಗಿ ಅಳವಡಿಸದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಅದನ್ನು ತಪ್ಪಿಸಲು ನಿರ್ದೇಶನ ನೀಡಲಾಗಿದೆ. ಅಲ್ಲದೇ ಕೊಡಿಗೆಹಳ್ಳಿ ಸಿಗ್ನಲ್‌ನ ನಂತರ ಕ್ರಾಸ್ ಕಲ್ವರ್ಟ್ ಬಳಿ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ಸಮಸ್ಯೆ ಉಂಟಾಗುತ್ತದೆ. ಕಲ್ವರ್ಟ್‌ನ ಹೂಳನ್ನು ತೆಗೆದು, ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸರ್ವೀಸ್ ರಸ್ತೆಯಿಂದ ಮುಖ್ಯ ರಸ್ತೆಗೆ ಸಂಪರ್ಕ ನೀಡಿ: ಬಳ್ಳಾರಿ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಸರ್ವೀಸ್ ರಸ್ತೆಯಿಂದ ಮುಖ್ಯ ರಸ್ತೆಗೆ ಒಳಹೊಕ್ಕು-ಹೊರಹೊಮ್ಮುವ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಬ್ಯಾಟರಾಯನಪುರದಲ್ಲಿ ಅನುಷ್ಠಾನಗೊಂಡಿದೆ. ಇದೇ ಮಾದರಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿಯೂ ಇದೇ ರೀತಿಯ ಸಂಪರ್ಕ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದು ಅನುಷ್ಠಾನ ಮಾಡುವುದಕ್ಕೆ ಹೇಳಲಾಗಿದೆ.
ಬ್ಯಾಟರಾಯನಪುರ ಜಂಕ್ಷನ್‌ನಲ್ಲಿ ಸರ್ವೀಸ್ ರಸ್ತೆ ಮತ್ತು ಮುಖ್ಯ ರಸ್ತೆ ನಡುವೆ ಬ್ಯಾರಿಕೇಡ್ ಇರುವುದರಿಂದ ಪಾದಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಅಲ್ಲಿ ಸ್ಕೈವಾಕ್ ನಿರ್ಮಿಸಲು ಸಾಧ್ಯತೆ ಪರಿಶೀಲನೆ ಹಾಗೂ ಮುಖ್ಯ ರಸ್ತೆ ಮತ್ತು ಸರ್ವೀಸ್ ರಸ್ತೆಯ ಮಧ್ಯದಲ್ಲಿರುವ ಚರಂಡಿಯ ಬಹುತೇಕ ಭಾಗದಲ್ಲಿ ಸ್ಲ್ಯಾಬ್‌ಗಳು ಹಾಳಾಗಿವೆ. ಅವುಗಳನ್ನು ದುರಸ್ತಿ ಮಾಡಿ, ಚರಂಡಿಯಲ್ಲಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಹೇಳಿದ್ದಾರೆ.
ಪರಿಶೀಲನೆಯ ವೇಳೆ ನೀಡಿದ ಇತರೆ ಪ್ರಮುಖ ನಿರ್ದೇಶನಗಳು:
1. ಯಲಹಂಕ ರೈತರ ಸಂತೆ ಬಳಿ ಸೈಡ್ ಡ್ರೈನ್ ನಿರ್ಮಿಸಲು ಸೂಚನೆ
2. ಬಾಗಲೂರು ಕ್ರಾಸ್‌ನಲ್ಲಿ ಜಲಾವೃತ, ರಸ್ತೆ ದುರಸ್ತಿ ಹಾಗೂ ಡ್ರೈನ್ ಸ್ವಚ್ಛತೆಗೆ ಸೂಚನೆ
3. ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಸೂಚನೆ
4. ಅಲ್ಲಾಳಸಂದ್ರ ಗೇಟ್ ಬಳಿ ಎನ್‌ಎಚ್‌ಎಐ ಮೇಲ್ಸೇತುವೆ ಕೆಳಭಾಗದ ಖಾಲಿ ಜಾಗವನ್ನು ಸುಂದರೀಕರಣಗೊಳಿಸಲು ಸೂಚನೆ
5. ಬ್ಯಾಟರಾಯನಪುರ ಸಿಗ್ನಲ್‌ನಿಂದ ಕೊಡಿಗೆಹಳ್ಳಿ ಸಿಗ್ನಲ್‌ವರೆಗೆ ರಸ್ತೆ ದುರಸ್ತಿ ಮತ್ತು ಸ್ವಚ್ಛತೆ ಕಾಪಾಡಲು ನಿರ್ದೇಶನ
6. ಯಲಹಂಕ ರೈಲ್ವೆ ಸೇತುವೆ ಬಳಿ ಸೈಡ್ ಡ್ರೈನ್ ರಸ್ತೆ ಮಟ್ಟಕ್ಕಿಂತ ಎತ್ತರದಲ್ಲಿರುವುದರಿಂದ ಮಳೆ ಬಂದಾಗ ನೀರು ರಸ್ತೆಯಲ್ಲಿ ನಿಂತುಕೊಳ್ಳುತ್ತದೆ. ಈ ಸಮಸ್ಯೆಗೆ ಶೀಘ್ರ ಪರಿಹಾರ.











Click it and Unblock the Notifications