'MB Patil vs HDK: ಮೇಕೆದಾಟು ಯೋಜನೆ ಒಪ್ಪಿದರೆ ಎರಡು ಕಡೆಗೂ ಅನುಕೂಲ'...Mekedatu
ಬೆಂಗಳೂರು, ಜುಲೈ 05: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಮೇಕೆದಾಟು' ಯೋಜನೆಗೆ ವಿರೋಧ ಮುಂದುವರಿದಿದೆ. ತಮಿಳುನಾಡು ಯೋಜನೆ ಅನುಷ್ಠಾನಕ್ಕೆ ಅಡ್ಡಿ ಉಂಟು ಮಾಡುತ್ತಲೇ ಇದೆ. ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಹೀಗೆ ಎರಡು ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಕೈಗಾರಿಕೆ ಮತ್ತು ಮೂಲಸೌಕರ್ಯಾಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅವರು ಹೇಳಿದರು.
ಶನಿವಾರ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕುಡಿಯುವ ನೀರು ಎರಡು ರಾಜ್ಯಗಳಿಗೂ ಸಿಗಲಿದೆ ಎಂಬ ಸತ್ಯ ಎಲ್ಲರಿಗೂ ಗೊತ್ತಿದೆ. ಇದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ರಾಜಕೀಯ ಮಾಡಿಕೊಂಡು ಕೂರಬಾರದು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಇದನ್ನು ಮನಗಂಡು, ರಚನಾತ್ಮಕವಾಗಿ ಕೆಲಸ ಮಾಡಲಿ ಎಂದು ತಿಳಿಸಿದರು.

ಯೋಜನೆ ತಮ್ಮಿಂದ ಸಾಧ್ಯ: ಇದ ಸರಿಯಲ್ಲ
ಇನ್ನು ಮೇಕೆ ದಾಟು ಯೋಜನೆಯ ಸಾಕಾರ ತಮ್ಮ ಕುಟುಂಬದಿಂದ ಮಾತ್ರ ಸಾಧ್ಯ ಕೇಂದ್ರ ಸಚಿವ ಎಚ್‌ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಂತಹ ಹೇಳಿಕೆ, ಧೋರಣೆ ಸರಿಯಲ್ಲ. ಈ ಯೋಜನೆ ಜಾರಿಯಿಂದ ಸಂಕಷ್ಟದ ಸಮಯದಲ್ಲಿ ನೀರು ಸಿಗುತ್ತದೆ ಎನ್ನುವುದು ತಮಿಳುನಾಡಿನ ರಾಜಕೀಯ ಪಕ್ಷಗಳಿಗೂ ಗೊತ್ತು. ಆದರೆ ಅವರು ಸಹ ರಾಜಕೀಯಕ್ಕೋಸ್ಕರ ಮೇಕೆದಾಟು ಯೋಜನೆಯನ್ನು ವೃಥಾ ವಿರೋಧಿಸುತಿದ್ದಾರೆ. ತಮಿಳುನಾಡು ಸರ್ಕಾರ, ಕೇಂದ್ರ ಸಚಿವರು ಇಂತಹ ಧೋರಣೆಗಳನ್ನು ಬಿಟ್ಟು ಯೋಜನೆಗೆ ಒಪ್ಪಿದರೆ ಎರಡು ರಾಜ್ಯಗಳ ಜನರಿಗೂ, ಎರಡು ಕಡೆಗೂ ಒಳ್ಳೆಯದಾಗುತ್ತದೆ ಎಂದರು.
ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದ ವೇಳೆ ಕಾವೇರಿ ವಿವಾದವು ಸುಪ್ರೀಂಕೋರ್ಟ್ ಮುಂದೆ ಬಂದಿತ್ತು. ನಮ್ಮ ಪ್ರಯತ್ನದಿಂದ ರಾಜ್ಯಕ್ಕೆ 14 ಟಿಎಂಸಿ ಅಡಿ ನೀರು ಹೆಚ್ಚು ಸಿಕ್ಕಿತು. ಜೊತೆಗೆ, ಬೆಂಗಳೂರಿಗೂ ಕುಡಿಯುವ ನೀರು ಪೂರೈಸಲು ಕಾವೇರಿ ನೀರನ್ನು ಬಳಸಿಕೊಳ್ಳಲು ಅವಕಾಶ ಸಿಕ್ಕಿತು. ನಮ್ಮ ರಾಜಧಾನಿಯ ಮೂರನೇ ಎರಡರಷ್ಟು ಭಾಗ ಕಾವೇರಿ ಕೊಳ್ಳದಿಂದ ಹೊರಗಿದೆ ಎಂದು ತಮಿಳುನಾಡಿನವರು ತಕರಾರು ತೆಗೆದಿದ್ದರು. ಆಗ ನಾವು ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳು ಚೆನ್ನೈನ ಕುಡಿಯುವ ನೀರಿನ ಅಗತ್ಯಕ್ಕೆ ಕೃಷ್ಣಾ ಕೊಳ್ಳದಲ್ಲಿನ ತಮ್ಮ ಪಾಲಿನ ತಲಾ 5 ಟಿಎಂಸಿಯಂತೆ ಒಟ್ಟು 15 ಟಿಎಂಸಿ ನೀರನ್ನು ಬಿಟ್ಟುಕೊಟ್ಟಿದ್ದನ್ನು ನೆನಪಿಸಬೇಕಾಯಿತು. ಈ ವಿಚಾರದಲ್ಲಿ ನಮ್ಮ ಪರ ವಕೀಲ ಎಫ್ ಎಸ್ ನಾರಿಮನ್ ಪರಿಣಾಮಕಾರಿಯಾಗಿ ವಾದ ಮಂಡಿಸಿದರು ಎಂದು ಅವರು ವಿವರಿಸಿದರು.

ಮೇಕೆದಾಟು ವಿಚಾರದಲ್ಲಿ ರಾಜ್ಯಕ್ಕೆ ಸಹಾಯ ಮಾಡಿ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಹೋರಾಟದ ಪ್ರಶ್ನೆಯೇನೂ ಇಲ್ಲ. ಕುಮಾರಸ್ವಾಮಿಯವರು ಈಗ ಕೇಂದ್ರ ಸಂಪುಟದಲ್ಲಿದ್ದಾರೆ. ಅವರು ರಾಜ್ಯಕ್ಕೆ ಸಹಾಯ ಮಾಡಲು ಅವಕಾಶವಿದೆ. ಇದರತ್ತ ನಮ್ಮ ಗಮನವಿರಬೇಕಷ್ಟೆ. ಕ್ಷುಲ್ಲಕ ರಾಜಕಾರಣ ಮಾಡುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಪಾಟೀಲ ಹೇಳಿದ್ದಾರೆ.
ದೇವನಹಳ್ಳಿ ಭೂಸ್ವಾಧೀನ ಸಮಸ್ಯೆಗೆ ಸಚಿವರ ಭರವಸೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಭಾಗದಲ್ಲಿ ಹೈಟೆಕ್ ಪಾರ್ಕ್ ನಿರ್ಮಾಣ ಸಂಬಂಧ ಅಧಿಸೂಚನೆ ಬಳಿಕ ಸೃಷ್ಟಿಯಾದ ಭೂಸ್ವಾಧೀನ ವಿವಾದದ ಬಗ್ಗೆ ಅವರು ಮಾತನಾಡಿದರು. ಕೃಷಿ ಮತ್ತು ಕೈಗಾರಿಕೆ ಎರಡನ್ನೂ ನಾವು ಸರಿದೂಗಿಸಿಕೊಂಡು ಹೋಗಬೇಕಾಗಿದೆ. ಈ ಸಂಬಂಧ ಈಗಾಗಲೇ ನಾಲ್ಕೈದು ಮಹತ್ವದ ಸಭೆಗಳು ನಡೆದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶುಕ್ರವಾರ ಸಭೆ ನಡೆಸಿ, ಹತ್ತು ದಿನಗಳ ಕಾಲಾವಕಾಶ ಕೇಳಿದ್ದಾರೆ. ಇದರಲ್ಲಿ ಕಾನೂನು ತೊಡಕಿನ ಸಮಸ್ಯೆಗಳಿದ್ದು, ಪರಿಹರಿಸಿಕೊಂಡು ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಕೊಡುವ ಅಗತ್ಯವಿದೆ. ಮುಂದಿನ ಕೆಲವೇ ದಿನಗಳಲ್ಲಿ ಇದೆಲ್ಲ ಇತ್ಯರ್ಥಗೊಳ್ಳಲಿದೆ ಎಂದು ಭರವಸೆ ನೀಡಿದರು.












Click it and Unblock the Notifications