Meat Sale Banned : ಈ ನಗರಗಳಲ್ಲಿ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಈ ಕ್ರಮದ ಎಚ್ಚರಿಕೆ!
Meat Sale Banned: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕರ್ನಾಟಕದ ಮಹಾನಗರ ಪಾಲಿಕೆಗಳು, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಮುಂಜಾಗ್ರತೆ ತೆಗೆದುಕೊಳ್ಳುತ್ತಿವೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸುವುದು ಹಾಗೂ ಗಣೇಶ ಮೂರ್ತಿಗಳ ವಿಸರ್ಜನೆಗೆ ಮೊಬೈಲ್ ಟ್ಯಾಂಕರ್‌ಗಳ ವ್ಯವಸ್ಥೆ ಕಲ್ಪಿಸುವುದು ಹಾಗೂ ನೋಡಲ್ ಅಧಿಕಾರಿಗಳ ನೇಮಕವನ್ನೂ ಮಾಡಲಾಗುತ್ತಿದೆ. ಇದರೊಂದಿಗೆ ಮಣ್ಣಿನ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಂತೆಯೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಮಾಂಸ ಮಾರಾಟ ನಿಷೇಧ ಎಲ್ಲೆಲ್ಲಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಮಾಂಸದಂಗಡಿಗಳಲ್ಲಿ (ಕಸಾಯಿಖಾನೆಗಳಲ್ಲಿ) ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟನ್ನು ಸಂಪೂರ್ಣ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.

Why Meat Sale Is Banned: ಹುಬ್ಬಳ್ಳಿ - ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲೂ ಗಣೇಶ ಚತುರ್ಥಿ ಹಿನ್ನೆಲೆಯಲಿ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಅಲ್ಲದೇ ಈ ಭಾಗದಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆಯು ವಿಶೇಷ ಎಚ್ಚರಿಕೆಯೊಂದನ್ನು ಸಹ ನೀಡಿದೆ. ಗಣೇಶ ಚತುರ್ಥಿ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ಕಸಾಯಿಖಾನೆಗಳು ಹಾಗೂ ಎಲ್ಲಾ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ.
ಲೈಸನ್ಸ್ ರದ್ದುಪಡಿಸುವ ಎಚ್ಚರಿಕೆ
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಮಾದರಿಯ ಮಾಂಸದಂಗಡಿಗಳನ್ನು ಸಹ ಬಂದ್ ಮಾಡಬೇಕು. ಒಂದೊಮ್ಮೆ ಮಾಂಸದ ಅಂಗಡಿಗಳನ್ನು ತೆರೆದಿದ್ದು ಖಚಿತವಾದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಹುಬ್ಬಳ್ಳಿ - ಧಾರವಾಡ ಪಾಲಿಕೆಯಿಂದ ಮಾಂಸದಂಗಡಿಯ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.












Click it and Unblock the Notifications