Get Updates
Get notified of breaking news, exclusive insights, and must-see stories!

BBMP Property: ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ, ಮನೆ ಕಟ್ಟುವವರು ಗಮನಿಸಿ

ಬೆಂಗಳೂರು, ಮಾರ್ಚ್ 11: ಬೆಂಗಳೂರಿನ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಹಾಗೂ ಪಾರದರ್ಶಕ ವ್ಯವಸ್ಥೆಗಾಗಿ ಕರ್ನಾಟಕ ಸರ್ಕಾರ 'ಬ್ರ್ಯಾಂಡ್ ಬೆಂಗಳೂರು' (Brand Bengaluru) ಉಪಕ್ರಮದಡಿ ಸ್ವಂತ ಮನೆ ಕಟ್ಟುವವರಿಗೆ 'ನಂಬಿಕೆ ನಕ್ಷೆ' ಎಂಬ ಹೊಸ ಆಸ್ತಿ ತೆರಿಗೆ ಪದ್ಧತಿ (New Tax System), ಆಸ್ತಿ ತೆರಿಗೆ ಖಾತಾ ವಿತರಣೆ ಮಾಡುವ ಯೋಜನೆಯನ್ನು ಜಾರಿಗೆ ತರುವ ಮೂಲಕ ಕ್ರಾಂತಿಕಾರಕ ಹೆಜ್ಜೆ ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 50 x 80 ಅಡಿ ವಿಸ್ತೀರ್ಣವರೆಗಿನ ನಿವೇಶನಗಳಲ್ಲಿ 4 ಯುನಿಟ್ ಮನೆ ಕಟ್ಟಿಕೊಳ್ಳುವವರು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ತಮ್ಮ ಕಟ್ಟಡದ ನಕ್ಷೆಗಳಿಗೆ ಆನ್ ಲೈನ್ ಮೂಲಕ ಸ್ವಯಂ ಅನುಮತಿ ಪಡೆಯುವ 'ನಂಬಿಕೆ ನಕ್ಷೆ' ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದರು.

Nambike Nakshe tax Scheme Will Implement for Bengaluru New House Builders Know Benefits

ನಂಬಿಕೆ ನಕ್ಷೆ ಜತೆಗೆ ಬೆಂಗಳೂರಿಗರ ಸಮಸ್ಯೆಗೆ ಪರಿಹಾರ ನೀಡಲು ಹೊಸ 'ಆಸ್ತಿ ತೆರಿಗೆ ಪದ್ಧತಿ' (New Property Tax System) ಹಾಗೂ ಆಸ್ತಿ ತೆರಿಗೆ ಖಾತಾ ವಿತರಣೆಯಂತಹ ಕಾರ್ಯಕ್ರಮ ರೂಪಿಸಲಾಗಿದೆ.

'ನಂಬಿಕೆ ನಕ್ಷೆ' ಯೋಜನೆಯ ಪ್ರಯೋಜನ

ಬೆಂಗಳೂರಿನಲ್ಲಿ ಇನ್ನು ಮುಂದೆ ಹೊಸದಾಗಿ ಮನೆ ಕಟ್ಟುವ ನಾಗರಿಕರು 50X80 ವಿಸ್ತೀರ್ಣವರೆಗಿನ ನಿವೇಶನ ಹೊಂದಿರುವ, 4 ಯುನಿಟ್ ಮನೆ ಕಟ್ಟಿಕೊಳ್ಳುವವರಿಗೆ ಬಿಲ್ಡಿಂಗ್ ಪ್ಲಾನ್ ಅನ್ನು ನೊಂದಾಯಿತ ವಾಸ್ತುಶಿಲ್ಪಿ (ಆರ್ಕಿಟೆಕ್ಟ್) ಅಥವಾ ಇಂಜಿನಿಯರ್ ಮೂಲಕ ಆನ್ ಲೈನ್ ನಲ್ಲಿ ಕಟ್ಟಡದ ನಕ್ಷೆಗೆ ಸ್ವಯಂ ಅನುಮತಿ ಪಡೆಯಬಹುದು. ಈ ಯೋಜನೆಯಿಂದಾಗಿ ಸಾರ್ವಜನಿಕರು ತಮ್ಮ ಕಟ್ಟಡದ ನಕ್ಷೆಗೆ ಅನುಮತಿ ಪಡೆಯಲು ಪಾಲಿಕೆ ಕಚೇರಿಗಳನ್ನು ಅಲೆಯುವಂತಿಲ್ಲ. ಜತೆಗೆ ಅಧಿಕಾರಿಗಳಿಗೆ ಲಂಚ ನೀಡುವ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ ಎಂದು ಹೇಳಿದರು.

10 ಸಾವಿರ ನಕ್ಷೆ ಅನುಮತಿ ಸಾಧ್ಯತೆ

ಅನುಮತಿ ನೀಡುವ ವಾಸ್ತುಶಿಲ್ಪಿಗಳು ಹಾಗೂ ಇಂಜಿನಿಯರ್‌ಗಳು ಸರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಿರಬೇಕು. ಕಟ್ಟಡದ ನಕ್ಷೆ ನಿಯಮಾನುಸಾರವಾಗಿ ತಂತ್ರಜ್ಞಾನದ ಮೂಲಕ ಪರಿಶೀಲನೆ ಆಗಲಿದೆ. ಆನ್ ಲೈನ್ ನಲ್ಲೆ ಶುಲ್ಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ 9 ಸಾವಿರ ಕಟ್ಟಡ ನಕ್ಷೆ ಅನುಮತಿ ನೀಡಲಾಗಿದೆ. ಈ ಬಾರಿ 10 ಸಾವಿರ ನಕ್ಷೆ ಅನುಮತಿ ನೀಡಬಹುದು ಎಂದು ಅಂದಾಜಿಸಲಾಗಿದೆ.

ಜನರನ್ನು ನಂಬಬೇಕು. ಪ್ರಮಾಣಿಕೃತ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ ಗಳನ್ನು ನಂಬಬೇಕಿದೆ. ಬ್ರ್ಯಾಂಡ್ ಬೆಂಗಳೂರಿಗೆ ಸಂಬಂಧಿಸಿದಂತೆ ನಮಗೆ ಬಂದ 70,000ಕ್ಕೂ ಹೆಚ್ಚು ಸಲಹೆಗಳಲ್ಲಿ ನೀಡಿರುವ ಜನರು ತಮಗಾಗುತ್ತಿರುವ ತೊಂದರೆಗಳ ಕುರಿತು ತಿಳಿಸಿದ್ದರು. ಆ ಪೈಕಿ ಜನರ ಸಮಸ್ಯೆಗಳನ್ನು ಈ ರೀತಿ ಕಾರ್ಯಕ್ರಮ ರೂಪಿಸುವ ಮೂಲಕ ಸಲಹೆಗಳನ್ನು ಜಾರಿಗೆ ತರಲಾಗುತ್ತಿದೆ.

ಬಿಬಿಎಂಪಿ ವ್ಯಾಪ್ತಿಯ ರಾಜರಾಜೇಶ್ವರಿನಗರ ಹಾಗೂ ದಾಸರಹಳ್ಳಿ ವಲಯದ ವ್ಯಾಪ್ತಿಯಲ್ಲಿ ಈ ಯೋಜನೆಯು ಮೊದಲ ಹಂತದಲ್ಲಿ ಎಲ್ಲಾ ವಾರ್ಡ್ ಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಆಗಲಿದೆ. ನಂತರ ನೋಡಿಕೊಂಡಿ ಇಡೀ ಬೆಂಗಳೂರಿಗೆ ವಿಸ್ತರಣೆ ಮಾಡಲಿದ್ದೇವೆ.

Nambike Nakshe tax Scheme Will Implement for Bengaluru New House Builders Know Benefits

ಹೊಸ ತೆರಿಗೆ ಪದ್ಧತಿ: ದಂಡ-ಬಡ್ಡಿ ಮನ್ನಾ

ಹಿಂದಿನ ಬಿಜೆಪಿ ಸರ್ಕಾರವು 2020ರಲ್ಲಿ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿತು. ಅದರಲ್ಲಿ ತೆರಿಗೆ ಪಾವತಿ ವಿಚಾರದಲ್ಲಿ ಅನೇಕ ಏರುಪೇರುಗಳಾಗಿದ್ದವು. ನಮ್ಮ ಸರ್ಕಾರ ಬಂದ ಮೇಲೆ ;ಮನೆ ಬಾಗಿಲಿಗೆ ಬಂತು ಸರ್ಕಾರ' ಕಾರ್ಯಕ್ರಮದಲ್ಲಿ ಈ ಕುರಿತು ಹಲವು ದೂರು ಸಲ್ಲಿಕೆಯಾದವು. ಇದಕ್ಕೆ ಪರಿಹಾರ ನೀಡಲು ಬಜೆಟ್ ಅಧಿವೇಶನದಲ್ಲಿ ತಿದ್ದುಪಡಿ ತಂದು ಎಲ್ಲೆಲ್ಲಿ ದಂಡದ ಸಮಸ್ಯೆ ಇದೆ ಅಲ್ಲೆಲ್ಲಾ 31-07-2024 ವರೆಗೂ ತೆರಿಗೆ ಕಟ್ಟಿದವರಿಗೆ ದಂಡ ಹಾಗೂ ಬಡ್ಡಿ ಮನ್ನಾ ಮಾಡುವ ತೀರ್ಮಾನ ಮಾಡಿದ್ದೇವೆ.

ಬೆಂಗಳೂರಿನ ನಾಗರಿಕರು ಇದರ ಉಪಯೋಗ ಪಡೆಯಬೇಕು. ದಂಡವನ್ನು ಶೇಕಡಾ 200 ರಿಂದ ಶೇ 100 ಕ್ಕೆ ಇಳಿಸಿದ್ದೇವೆ. ಇನ್ನು ನಾವು 5 ವರ್ಷದವರೆಗೂ ಲೆಕ್ಕಾಚಾರದಲ್ಲಿ ತೆರಿಗೆ ಬಾಕಿಯನ್ನು ವಸೂಲಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಅವರು ವಿವರಿಸಿದರು.

ತೆರಿಗೆ ಪದ್ಧತಿಯಲ್ಲಿ ಸರಳೀಕರಣ

ಪ್ರಸ್ತುತ ಇದ್ದ ಯುನಿಟ್ ವಿಸ್ತೀರ್ಣ ಮೌಲ್ಯ (UAV) ಆಸ್ತಿ ತೆರಿಗೆ ಪದ್ಧತಿಯನ್ನು 2008 ರಲ್ಲಿ ಜಾರಿಗೊಳಿಸಲಾಗಿತ್ತು. ಆಗ ಆಸ್ತಿಗಳನ್ನು 18 ವರ್ಗೀಕರಣ ಮಾಡಲಾಗಿತ್ತು. ಇದರಿಂದ ತೆರಿಗೆ ಪಾವತಿಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಮಾರ್ಗಸೂಚಿ ದರವನ್ನು ಬೆಂಗಳೂರಿನ ವ್ಯಾಪ್ತಿಯಲ್ಲಿ ಏಕರೂಪದ ಆಸ್ತಿ ತೆರಿಗೆ ನಿಗದಿ ಮಾಡಲಾಗಿದೆ. ಈ ವ್ಯವಸ್ಥೆಯಿಂದ ತೆರಿಗೆ ಪದ್ಧತಿಯನ್ನು ಸರಳೀಕರಣ ಮಾಡಲಾಗಿದೆ.

2016 ರಲ್ಲಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಆಗ ವಸತಿ ಆಸ್ತಿಗಳಿಗೆ ಶೇಕಡಾ 20ರಷ್ಟು, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇಕಡಾ 25ರಷ್ಟು ಏರಿಕೆಯಾಗಿತ್ತು. ಕಳೆದ ಎಂಟು ವರ್ಷಗಳಿಂದ ಆಸ್ತಿ ಮೌಲ್ಯ ಏರಿಕೆಯಾಗಿರಲಿಲ್ಲ. ಈಗ ನಾವು ಈ ಬಗ್ಗೆ ಚರ್ಚೆ ಮಾಡಿ ಇದನ್ನು ಕಡಿಮೆ ಮಾಡಲು, ಆಸ್ತಿ ತೆರಿಗೆ ಹೆಚ್ಚಳದ ಮಿತಿಯನ್ನು ಶೇಕಡಾ 10ಕ್ಕೆ ನಿಗದಿ ಪಡಿಸಲಾಗಿದೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲೀಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದು ಹೇಳಿದರು.

ಬಿಬಿಎಂಪಿ ಖಾತಾ ವಿತರಣೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾರು ಆಸ್ತಿ ತೆರಿಗೆ ಪಾವತಿಗೆ ತಮ್ಮನ್ನು ತಾವು ಘೋಷಣೆ ಮಾಡಿಕೊಂಡಿಲ್ಲ ಅಂತವರಿಗೆ ಒಂದು ಅವಕಾಶ ನೀಡಲಿದ್ದೇವೆ. ಈ ಮೂಲಕ ನಾಗರಿಕರು ತಮ್ಮ ಆಸ್ತಿಯನ್ನು ಸ್ವಯಂ ಘೋಷಣೆ ಮಾಡಿಕೊಂಡು ಆಸ್ತಿ ತೆರಿಗೆ ಸಂಖ್ಯೆ ಮತ್ತು ಬಿಬಿಎಂಪಿ ಖಾತಾ ನೀಡಲಾಗುವುದು. ಬಿಬಿಎಂಪಿಯಿಂದ ದಾಖಲೆ ಸರಿಯಾಗಿ ಇರುವರಿಗೆ 'ಎ' ಖಾತಾ ನೀಡುತ್ತೇವೆ. ಕನ್ವರ್ಷನ್ ಮಾಡಿಕೊಳ್ಳದೇ, ಯೋಜನೆ ಇಲ್ಲದವರಿಗೆ 'ಬಿ' ಖಾತಾ ನೀಡಲಾಗುವುದು ಎಂದು ಅವರು ತಿಳಿಸಿದರು.

ಸದ್ಯ ಬಿಬಿಎಂಪಿಯು ಇದೇ ಮುಂದಿನ ಏಪ್ರಿಲ್ ನಿಂದ ಹೊಸ ತೆರಿಗೆ ಪದ್ಧತಿ ಜಾರಿಗೆ ತರುವ ಮುನ್ಸೂಚನೆ ನೀಡಿತ್ತು. ಆದರೆ ಇಂದಿನ ಪರಿಸ್ಥಿತಿ ನೋಡಿದರೆ ಈ ಹೊಸ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವುದು ಒಂದು ವರ್ಷ ತಡವಾಗಬಹುದು ಎಂದು ಮೂಲಗಳು ಮಾಹಿತಿ ನೀಡಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+