NEET ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ: ಬೆಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಲಾಠಿಚಾರ್ಜ್
ಬೆಂಗಳೂರು; ಇವತ್ತು ದೇಶಾದ್ಯಂತ ನೀಟ್ ಪಿಜಿ 2026 ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಮತ್ತೊಂದೆಡೆ ಈ ಹಿಂದೆ ನಡೆದಿದ್ದ ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಿದರು ನೀಟ್ ಹೋರಾಟ ಬೆಂಗಳೂರಿನಲ್ಲಿ ನಿಂತಿಲ್ಲ. ಇಂದು ಭಾನುವಾರ ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಲಾಠಿ ಚಾರ್ಜ್ ಸಹ ನಡೆಯಿತು ಎಂದು ವರದಿ ಆಗಿದೆ.
ಬೆಂಗಳೂರು ಬಿಜೆಪಿ ಕಚೇರಿ ಮುತ್ತಿಗೆ ಯತ್ನ
ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ನಗರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪ್ರತಿಭಟನೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುರಾಜೀನಾಮೆ ನೀಡುವಂತೆ ಒಕ್ಕೋರಲಿನಿಂದ ಆಗ್ರಹಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಯುವ ಕಾಂಗ್ರೆಸ್ಸಿಗರ ಬಂಧನ, ಬಿಡುಗಡೆ
ಬೆಂಗಳೂರಿನಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ಸಿಗರು ಮುತ್ತಿಗೆ ಹಾಕಲು ಮುಂದಾದರು. ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಧೋರಣೆ ಖಂಡಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ನೆರೆದಿದ್ದ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು, ವಿದ್ಯಾರ್ಥಿಗಳನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಲಾಠಿಚಾರ್ಜ್ ಖಂಡನಾರ್ಹ
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಪ್ರತಿಭಟನೆಯನ್ನು ಪೊಲೀಸರು ಲಾಠಿಚಾರ್ಜ್ ಮಾಡುವ ಮೂಲಕ ಹತ್ತಿಕ್ಕಲು ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.
ಈ ಧೋರಣೆಯನ್ನು ಖಂಡಿಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (ಕೆಪಿವೈಸಿಸಿ) ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಕ್ಕಾಗಿ ಬೀದಿಗಿಳಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಲಾಠಿ ಪ್ರಹಾರ ಅತ್ಯಂತ ಖಂಡನೀಯ ಹಾಗೂ ಹೇಡಿತನದ ಕೃತ್ಯ. ಸತ್ಯವನ್ನು ಮರೆಮಾಚಲು ಮತ್ತು ಜನರ ಧ್ವನಿಯನ್ನು ಹತ್ತಿಕ್ಕಲು ಲಾಠಿಚಾರ್ಜ್ ಮಾಡಲಾಗಿದೆ ಎಂದು ಕಿಡಿ ಕಾರಿದರು.
ಪ್ರತಿಭಟನೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ತಾರೀಖ್ ಬಾಗವಾನ್ ಸೇರಿದಂತೆ ಸಾವಿರಾರು ಯುವ ಕಾಂಗ್ರೆಸ್ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪೊಲೀಸರ ಮಾತಿಗೆ ಜಗ್ಗದಿದ್ದಾಗ ಪ್ರತಿಭಟನಾಕಾರರನ್ನು ಎಳೆದು ಬಸ್, ಪೊಲೀಸ್ ಜೀಪ್‌ನಲ್ಲಿ ಹೊತ್ತೊಯ್ದದ್ದು ಕಂಡು ಬಂತು.


Click it and Unblock the Notifications
