ಬೆಂಗಳೂರಿಗೆ ಕುಖ್ಯಾತಿ ತರಲು ಡಿಕೆಶಿ ಅವಿರತ ಶ್ರಮ: ಅಶೋಕ್ ಲೇವಡಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿದ ಭಾರಿ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಯಲಾಯ್ತು ಬ್ರ್ಯಾಂಡ್ ಬೆಂಗಳೂರಿನ ಮುಖವಾಡ, ಬೀದಿಗೆ ಬಂತು ಕಾಂಗ್ರೆಸ್ ಸರ್ಕಾರದ ಬಂಡವಾಳ. ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಸಲಿಯತ್ತು ಏನೆಂಬುದನ್ನು ಬಟಾಬಯಲು ಮಾಡಿದೆ ಎಂದಿದ್ದಾರೆ.
40% ಕಮಿಷನ್ ಸರ್ಕಾರ ಅಂತ ಸುಳ್ಳು, ಅಪಪ್ರಚಾರದ ಮೂಲಕ ಕನ್ನಡಿಗರಿಗೆ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ತನ್ನ ಭ್ರಷ್ಟಾಚಾರದ ಹಸಿವು, ದಾಹ ನೀಗಿಸಿಕೊಳ್ಳಲು ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರವನ್ನು ಬಲಿ ಕೊಡುತ್ತಿದೆ ಎಂದು ದೂರಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ರಾಜಧಾನಿಯ ರಸ್ತೆಗಳು ಕೆರೆಗಳಾಗಿವೆ, ಬಡಾವಣೆಗಳು ಜಲಾವೃತವಾಗಿವೆ. ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಹೊಡೆದು, ಸಿಲಿಕಾನ್ ಸಿಟಿ ಜನರನ್ನು ಮಳೆ ನೀರಲ್ಲಿ ಮುಳುಗಿಸಿ, ಬೆಂಗಳೂರಿನ ಮರ್ಯಾದೆ ಹರಾಜು ಹಾಕಿದ್ದೀರಲ್ಲ, ಇದೇನಾ ತಾವುಗಳು ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡುವ ಪರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಒಂದೇ ಒಂದು ರಸ್ತೆಗುಂಡಿ ಮುಚ್ಚಲು ಕೈಲಾಗದಷ್ಟು ಅಸಮರ್ಥ ಆಯೋಗ್ಯ ಕಾಂಗ್ರೆಸ್ ಸರ್ಕಾರದಿಂದ ಬ್ರ್ಯಾಂಡ್ ಬೆಂಗಳೂರು ಹೋಗಿ "ಗುಂಡಿ ಬೆಂಗಳೂರು" ಆಗಿ ಪರಿವರ್ತನೆಗೊಂಡಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡದೆ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರಸ್ತೆಗಳ ಗುಂಡಿ ಮಚ್ಚಲು ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ.
ಸ್ಕೈ ಡೆಕ್ ನಿರ್ಮಿಸುತ್ತೇನೆ, ಟನಲ್ ರಸ್ತೆ ನಿರ್ಮಿಸುತ್ತೇನೆ ಎಂದು ಅಂಗೈಯಲ್ಲೇ ಅರಮನೆ ತೋರಿಸುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಲ್ಲೊಂದು ಇಲ್ಲೊಂದು ಗುಂಡಿ ಮುಚ್ಚಿ ಬಿಟ್ಟಿ ಪ್ರಚಾರಕ್ಕೆ ಪೋಸ್ ಕೊಡುವುದು ಬಿಟ್ಟರೆ ಕಳೆದ 15 ತಿಂಗಳಿಂದ ಸಾಧಿಸಿದ್ದು ದೊಡ್ಡ ಶೂನ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜಧಾನಿಯ ಯಾವುದೇ ರಸ್ತೆಗಳಿಗೂ ಹೋದರೂ ನೂರಾರು ಗುಂಡಿಗಳು ಕಾಣುತ್ತಿವೆ. ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ದುಸ್ಥಿತಿಯನ್ನ ರಾಜ್ಯ ಸರ್ಕಾರ ತಂದಿಟ್ಟಿದೆ. ಜನಸಾಮಾನ್ಯರು, ವಾಹನ ಸವಾರರು ದಿನನಿತ್ಯ ಛೀ.. ಥೂ ಎಂದು ಸರ್ಕಾರಕ್ಕೆ ಉಗಿಯುತ್ತಿದ್ದರೂ ದಪ್ಪ ಚರ್ಮದ ಸರ್ಕಾರ ಮಾತ್ರ ತನ್ನ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿರುವುದು ರಾಜ್ಯದ ದುರಂತ ಎಂದಿದ್ದಾರೆ.
ರಸ್ತೆಗುಂಡಿ ಮುಚ್ಚಲು ಯೋಗ್ಯತೆ ಇಲ್ಲದ ಭ್ರಷ್ಟ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕಾಗಿ ಅಧಿಕಾರದಲ್ಲಿದೆ?ಗಾರ್ಡನ್ ಸಿಟಿ, ಗ್ರೀನ್ ಸಿಟಿ, ಐಟಿ ಸಿಟಿ, ಸ್ಟಾರ್ಟಪ್ ಸಿಟಿ, ಸಿಲಿಕಾನ್ ಸಿಟಿ ಎಂದು ಖ್ಯಾತಿ ಹೊಂದಿದ್ದ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿಯಿಂದ ರಸ್ತೆ ಗುಂಡಿಗಳ ನಗರ, ವಾಟರ್ ಫಾಲ್ಸ್ ನಗರ ಎಂದು ನಗೆಪಾಟಲಿಗೆ ಈಡಾಗಿದೆ. ಬೆಂಗಳೂರಿಗೆ ಈ ಕುಖ್ಯಾತಿ ತಂದುಕೊಡಲು ಸನ್ಮಾನ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಳೆದೊಂದು ವರ್ಷದಿಂದ ಅವಿರತವಾಗಿ ಶ್ರಮಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇಷ್ಟಕ್ಕೂ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ? ಕಾಂಗ್ರೆಸ್ ಸರ್ಕಾರ ಕಳೆದ 15 ತಿಂಗಳ ಆಡಳಿತದಲ್ಲಿ ಬೆಂಗಳೂರಿಗೆ ಬಿಡಿಗಾಸು ಅನುದಾನ ಸಹ ನೀಡಿಲ್ಲ. ಬೆಂಗಳೂರಿನ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು ನೋವುಗಳು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು. ಬೆಂಗಳೂರು ನಗರಕ್ಕೆ 25,000 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನ ಸರಿಪಡಿಸುವ ಕೆಲಸ ಮಾಡಬೇಕು ಎಂದು ಆರ್.ಅಶೋಕ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.












Click it and Unblock the Notifications