Sex Scandal Videos: ಸಾಮಾಜಿಕ ಜಾಲತಾಣ ಬಳಕೆದಾರರು, ಮಾಧ್ಯಮಗಳಿಗೆ SIT ಮಹತ್ವದ ಸೂಚನೆ
ಬೆಂಗಳೂರು, ಮೇ 06: ಹಾಸನದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸೂಚನೆ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಹ ನೀಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಸುಮಾರು 3000 ಅಶ್ಲೀಲ ವಿಡಿಯೋ/ಫೋಟೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬಾರದು. ಸೂಕ್ಷ್ಮ ಸಂವೇದನೆಯಿಂದ ಸಾಮಾಜದ ಸ್ವಾಸ್ಥ್ಯ ಹಾಳಾಗದಂತೆ ವರ್ತಿಸಬೇಕು. ವಿಡಿಯೋ ಶೇರ್ ಮಾಡಿ ಸಂತ್ರಸ್ತರ ಗುರುತು ಪತ್ತೆ, ಗೌರವಕ್ಕೆ ಧಕ್ಕೆ ಉಂಟು ಮಾಡಿದರೆ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಸ್‌ಐಟಿ ಮುಖ್ಯಸ್ಥರು ಹೇಳಿದ್ದಾರೆ.

ಐಟಿ ಕಾಯಿದೆ ಸ್ಪಷ್ಟ ಉಲ್ಲಂಘನೆ ಆಗಲಿದೆ
ಎಸ್‌ಐಟಿ ಸೂಚನೆಯಲ್ಲಿ ಏನಿದೆ ಎಂದು ನೋಡುವುದಾದರೆ, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪ್ ನಂತಹ ಮೆಸೆಂಜರ್ ಆಪ್ ಸೇರಿ) ಹಂಚಿಕೊಳ್ಳುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ಎಸ್‌ಐಟಿ ತಿಳಿಸಿದೆ.
ಬಲಿಪಶು ಮಹಿಳೆಯರಿಗೆ ಘನತೆ ಕಾಪಾಡಬೇಕು
ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ವಿಡಿಯೋ ಶೇರ್ ಮಾಡಿಕೊಂಡರೆ ಯಾರು ಹೀಗಿ ಮಾಡಿದ್ದಾರೆ ಎಂಬುದನ್ನು ಪತ್ತೆ ಮಾಡಬಹುದಾಗಿದೆ. ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದು ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡಿದಂತಾಗುದೆ. ಈ ಕಾರಣದಿಂದ ವಿಡಿಯೋ ಶೇರ್ ಅನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಬೆಳಗ್ಗೆ 8-ರಾತ್ರಿ 8ರವರೆಗೆ ಸಹಾಯವಾಣಿ ಕಾರ್ಯ
ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ 'ನಮ್ಮ ಹೆಲ್ಸ್ ಲೈನ್' 6360938947 ಸಂಖ್ಯೆಗೆ ಬೆಳಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರ್‌ಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಅವರು ಎಸ್ ಐ ಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಿದ್ದೇವೆ.

ಮಾಧ್ಯಮ, ಸಂಘ-ಸಂಸ್ಥೆಗಳಿಗೆ ಎಸ್‌ಐಟಿ ಎಚ್ಚರಿಕೆ
ಪ್ರಕರಣದಲ್ಲಿ ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು. ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಮಾಡಿಬಾರದು. ಮಾಡಿದರೇ ಅಗತ್ಯ ಎನಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳು ನಾಚಿಕೆ ಪಟ್ಟುಕೊಳ್ಳಬೇಕಾದ ಸಂಗತಿ. ಹಿಂಜರಿಯಬೇಕಾದ ಪ್ರಕರಣಗಳೂ. ಅವಮಾನ ಎಂದು ಭಾವಿಸಬೇಕಾದ ವಿಷಯ. ಇಂತಹ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿಗೆ ಶಿಕ್ಷೆ, ಅವಮಾನ ಆಗಬೇಕೆ ಹೊರತು ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ನಾವೆಲ್ಲರು ಅರಿಯಬೇಕು.
ಸಮಾಜದ ಆರೋಗ್ಯದ ದೃಷ್ಟಿಯಿಂದ ಸೂಕ್ತ ಸಂವೇದನೆಯಿಂದ ವರ್ತಿಸುವುದು ಅಗತ್ಯವಾಗಿದೆ. ಈ ವಿಚಾರದಲ್ಲಿ ಎಸ್ ಐ ಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರುಗಳು, ವೈದ್ಯರುಗಳು, ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್ ಐ ಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವಂತೆ ಎಸ್‌ಐಟಿ ಮನವಿ ಮಾಡಿಕೊಂಡಿದೆ.












Click it and Unblock the Notifications