PSI Exam Update: ಪಿಎಸ್ಐ ಪರೀಕ್ಷೆ ದಿನಾಂಕದ ಬಗ್ಗೆ ಅಪ್ಡೇಟ್ ಕೊಟ್ಟ ಗೃಹ ಸಚಿವ ಜಿ ಪರಮೇಶ್ವರ್
ಕರ್ನಾಟಕದಲ್ಲಿ ನಡೆಯಲಿರುವ ಪಿಎಸ್‌ಐ ಪರೀಕ್ಷೆಯ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ. ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆಪ್ಟೆಂಬರ್ 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ.
ಮುಂದುವರಿದು ಕರ್ನಾಟಕದಲ್ಲಿ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಅಲ್ಲದೇ ಬಿಜೆಪಿ ಸಹ ಈ ಬಗ್ಗೆ ಮನವಿ ಮಾಡಿತ್ತು.

ಪರೀಕ್ಷಾ ದಿನಾಂಕದ ಬಗ್ಗೆ ರಾಜ್ಯ ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪಿಎಸ್‌ಐ ಪರೀಕ್ಷೆ ಹಿನ್ನೆಲೆ
ಇನ್ನು ಇದೇ ಸೆಪ್ಟೆಂಬರ್ 22ಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ (ಪಿಎಸ್‌ಐ ಪರೀಕ್ಷ) ನೇಮಕಾತಿ ಪರೀಕ್ಷೆಯನ್ನು ಮುಂದೂಡುವುದಕ್ಕೆ ಇದು ಪ್ರಮುಖ ಕಾರಣವಾಗಿದೆ. ಈಗಾಗಲೇ ಈ ಪರೀಕ್ಷೆಯನ್ನು ಮುಂದೂಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದರು. ಅದರಂತೆ ಗುರುವಾರ ಪರೀಕ್ಷೆ ಮುಂದೂಡುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಯುಪಿಎಸ್‌ಸಿಯ ಮುಖ್ಯ ಪರೀಕ್ಷೆ ದಿನಾಂಕ ಈಗಾಗಲೇ ನಿಗದಿಯಾಗಿದೆ. ಎರಡೂ ಪ್ರಮುಖ ಪರೀಕ್ಷೆಗಳು ಒಂದೇ ದಿನದಂದು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ ಆಗಲಿದೆ ಎಂದು ಸ್ಪರ್ಧಾ ಪರೀಕ್ಷೆಗೆ ಸಿದ್ಧತೆ ನಡೆಸಿರುವ ಅಭ್ಯರ್ಥಿಗಳು ಹೇಳಿದ್ದರು.
ಅಲ್ಲದೇ ಪಿಎಸ್‌ಐ ನೇಮಕಾತಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಶಾಸಕ ಸಿಎನ್ ಅಶ್ವಥ್ ನಾರಾಯಣ್ ಅವರ ನೇತೃತ್ವದ ಬಿಜೆಪಿ ನಿಯೋಗವು ಈಚೆಗೆ ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಮನವಿಯನ್ನು ಸಹ ಸಲ್ಲಿಸಿತ್ತು. ಹೀಗಾಗಿ, ಪರಮೇಶ್ವರ ಅವರು ಇದೀಗ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.












Click it and Unblock the Notifications