ಬೆಂಗಳೂರಿನಲ್ಲಿ 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿರುವ ಶಂಕೆ: ಆರ್.ಅಶೋಕ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರ ಸಂಖ್ಯೆ ಆತಂಕಕಾರಿ ಮಟ್ಟ ತಲುಪಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಒಂದೇ ನಗರ ವ್ಯಾಪ್ತಿಯಲ್ಲಿ ಸುಮಾರು 2 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಶಂಕೆಯನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವ್ಯಕ್ತಪಡಿಸಿದ್ದು, ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಉದ್ದೇಶಿಸಿ ಪೋಸ್ಟ್ ಮಾಡಿರುವ ಆರ್.ಅಶೋಕ್, "ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅಕ್ರಮ ವಲಸಿಗರೇ ಈ ಸಂಖ್ಯೆಯನ್ನು ಒಪ್ಪಿಕೊಳ್ಳುತ್ತಿರುವುದು ಅತ್ಯಂತ ಗಂಭೀರ ವಿಚಾರ" ಎಂದು ಹೇಳಿದ್ದಾರೆ. ಅಶೋಕ್ ಅವರ ಹೇಳಿಕೆ ಪ್ರಕಾರ, ಕಳೆದ ಒಂದು ವಾರದಿಂದ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ 71 ಶಂಕಿತ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಹಲವರು ನಕಲಿ ಆಧಾರ್ ಕಾರ್ಡ್, ಪಾರ್‌ಪೋರ್ಟ್ ಸೇರಿದಂತೆ ನಕಲಿ ದಾಖಲೆಗಳನ್ನು ಬಳಸಿಕೊಂಡು ನಗರದಲ್ಲಿ ನೆಲೆಸಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಕೆಲವರು ಮಾನವ ಕಳ್ಳಸಾಗಣೆ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು, ಇಂತಹ ನುಸುಳುಕೋರರು ಧೈರ್ಯವಾಗಿ ನ್ಯಾಯಾಲಯದಲ್ಲಿ ಜಾಮೀನು ಕೇಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಆರ್.ಅಶೋಕ್, ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ವಲಸಿಗರ ಪತ್ತೆ, ಗಡಿಪಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ
"ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ಹಾಗೂ ತುಷ್ಟೀಕರಣಕ್ಕಾಗಿ ರಾಜ್ಯದ ಹಿತವನ್ನು ಬಲಿಕೊಡಬಾರದು. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಬೇಕು" ಎಂದು ಅವರು ಆಗ್ರಹಿಸಿದ್ದಾರೆ. ಅಕ್ರಮ ವಲಸಿಗರ ಪತ್ತೆ ಹಾಗೂ ಗಡಿಪಾರಿಗಾಗಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿರುವ ಆರ್. ಅಶೋಕ್, ಈ ವಿಷಯದಲ್ಲಿ ತಕ್ಷಣದ ಕ್ರಮ ಕೈಗೊಳ್ಳದಿದ್ದರೆ ಪರಿಣಾಮಗಳು ಭಾರೀ ಆಗಲಿವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಆರೋಪಗಳಿಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಈಗ ಸಾರ್ವಜನಿಕ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಲಸಿಗರು ಕಾಂಗ್ರೆಸ್ ಮತ ಬ್ಯಾಂಕ್
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಕ್ರಮ ಬಾಂಗ್ಲಾ ವಲಸಿಗರನ್ನು ಪೋಷಿಸುತ್ತಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಕಿಸ್ಥಾನಕ್ಕೆ ಜಯಕಾರ ಕೂಗಿದರೆ, ಬಾಂಗ್ಲಾದೇಶದಿಂದ ಗತಿಗೆಟ್ಟು ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ವಲಸಿಗರು ಕರುನಾಡಿನ ಮಣ್ಣಿನಲ್ಲಿದ್ದುಕೊಂಡು ಬಾಂಗ್ಲಾದೇಶಕ್ಕೆ ಜಯಘೋಷ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಮೃದು ಧೋರಣೆಯೇ ಇದಕ್ಕೆಲ್ಲ ಪ್ರೇರಣೆ. ಏಕೆಂದರೆ ಅಕ್ರಮ ಬಾಂಗ್ಲಾ ವಲಸಿಗರೂ ಕೂಡಾ ಕಾಂಗ್ರೆಸ್ ಮತ ಬ್ಯಾಂಕ್ ಎಂದು ಆರೋಪ ಮಾಡಿದ್ದಾರೆ.












Click it and Unblock the Notifications