ಕರ್ನಾಟಕದಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಭಯೋತ್ಪಾದನೆ ನಿಯಂತ್ರಿಸಿ: ಆರ್.ಅಶೋಕ
ಬೆಂಗಳೂರು, ಸೆಪ್ಟಂಬರ್ 10: ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ತಲ್ಲಣ ಸೃಷ್ಟಿಸಿತ್ತು. ಈ ಕೆಫೆ ಬದಲು ಬಿಜೆಪಿ ಕಚೇರಿ ಸ್ಪೋಟಿಸಲು ಸಂಚು ರೂಪಿಸಲಾಗಿತ್ತು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಗ್ರಹಕ್ಕೆ 'ಟಾಸ್ಕ್ ಫೋರ್ಸ್' ರಚಿಸುವಂತೆ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರ ಹೇಳಿಕೆಗಳಿಂದ ರಾಜ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ ಎಂದು ಕಾಂಗ್ರೆಸ್ ಮೇಲೆ ಆರೋಪಿಸಿದರು.

ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ರೂಪಿಸಿದ್ದನ್ನು ಅವರು ಖಂಡಿಸಿದರು. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕು. ಐಟಿ, ಬಿಟಿ ಕೇಂದ್ರವಾಗಿರುವ ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಲು ಪ್ಲಾನ್ ಮಾಡಿಕೊಂಡಿದ್ದಾರೆ. ನಗರದ ಆರ್ಥಿಕತೆಯನ್ನು ನಾಶಕ್ಕೆ ಭಯೋತ್ಪಾದಕರು ಮುಂದಾಗಿದ್ದರು.
ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಲು ಕಾರಣ
ಇನ್ನೂ ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದು, ರಾಜ್ಯದಲ್ಲಿ ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗುತ್ತಿದೆ.
ಕರ್ನಾಟಕ ರಾಜ್ಯ ಗೃಹ ಇಲಾಖೆ ಹೆಚ್ಚುತ್ತಿರುವ ಈ ಭಯೋತ್ಪಾದನಾ ಚಟುವಟಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ.

ಕರ್ನಾಟಕಕ್ಕೂ ಅಸ್ಸಾಂ ಸ್ಥಿತಿ ಬರಬಹುದು
ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ಕರ್ನಾಟಕ ರಾಜ್ಯಕ್ಕೂ ಬರಲಿದೆ. ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅವರು ಕೋರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಶಕ್ತಿ ಸೌಧದಲ್ಲೇ (ವಿಧಾನಸೌಧ) ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ವಿಚಾರವನ್ನು ಖುದ್ದು ಕಾಂಗ್ರೆಸ್ ಸಚಿವರೇ ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ. ರಾಜ್ಯದಲ್ಲಿ ಏನು ಮಾಡಿದರೂ ನಡೆಯುತ್ತದೆ ಎಂಬ ವಾತಾವರಣ ಭಯೋತ್ಪಾದಕರಿಗೆ ಬರುತ್ತಿರಬಹುದು. ಆದ್ದರಿಂದಲೇ ಇಲ್ಲಿ ಇಂತಹ ಸಮಾಜ ಮತ್ತು ಕಾನೂನು ವಿರೋಧಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸರ್ಕಾರ ಇಂತಹ ಹೇಳಿಕೆ ಕೊಡಬಾರದು ಎಂದರು.
ಕಾಂಗ್ರೆಸ್ ಬಂದ ಬಳಿಕ ಭಯೋತ್ಪಾದಕರಿಗೆ ಭಯ ಇಲ್ಲ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಲಾಗಿತ್ತು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ನಮಗಿಂತಲೂ ಕಾಂಗ್ರೆಸ್ ನಾಯಕರಿಗೆ ಹೆಚ್ಚು ವಿಶ್ವಾಸ ಇದೆ ಎಂದು ಟಾಂಗ್ ನೀಡಿದರು. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಅವರು ಆಪಾದಿಸಿದರು.












Click it and Unblock the Notifications